ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ತೀವ್ರ ಅನ್ಯಾಯ ಮಾಡುತ್ತಿದೆ: ಸಚಿವ ಈಶ್ವರ್ ಖಂಡ್ರೆ
ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಗುರುವಾರ ಹೇಳಿದರು.

ಬೀದರ್: ಬರ ಪರಿಹಾರ ಬಿಡುಗಡೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತೀವ್ರ ಅನ್ಯಾಯ ಮಾಡುತ್ತಾ ಬಂದಿದೆ’ ಎಂದು ಪರಿಸರ, ಅರಣ್ಯ ಮತ್ತು ಜೀವಿಶಾಸ್ತ್ರ ಖಾತೆ ಸಚಿವ ಈಶ್ವರ ಬಿ. ಖಂಡ್ರೆ ಅವರು ಗುರುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಿಂದ ಸಚಿವರ ನಿಯೋಗ ಕೇಂದ್ರಕ್ಕೆ ತೆರಳಿ ಹಣ ಬಿಡುಗಡೆ ಮಾಡುವಂತೆ ಕೇಳಿದೆ. ಆದರೆ, ಕೇಂದ್ರ ಸರ್ಕಾರ ಮಲತಾಯಿ ಧೋರಣೆ ಮಾಡುತ್ತಿರುವುದು ಜನರಿಗೆ ಅರ್ಥವಾಗುತ್ತಿದೆ ಎಂದು ಹೇಳಿದರು.
ಕೇಂದ್ರ ಸರ್ಕಾರ ಬರ ಪರಿಹಾರ ಕೊಡುತ್ತದೆಯೋ, ಇಲ್ಲವೋ ಎಂಬುದನ್ನು ನೋಡಿಕೊಂಡು ತೀರ್ಮಾನ ಮಾಡುತ್ತೇವೆ. ನಮ್ಮದು ರೈತರ ಪರ ಸರ್ಕಾರ. ರೈತರ ಹಿತದೃಷ್ಟಿಯಿಂದ ಆದಷ್ಟು ಶೀಘ್ರದಲ್ಲಿ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ತಿಳಿಸಿದರು.
ಪಂಚರಾಜ್ಯಗಳ ಚುನಾವಣೆ ಕುರಿತು ಮಾತನಾಡಿ, ಚುನಾವಣೆಯಲ್ಲಿ ಕಾಂಗ್ರೆಸ್ ಅಭೂತಪೂರ್ವ ಗೆಲುವು ಸಾಧಿಸಲಿದೆ. ಕಾಂಗ್ರೆಸ್ ವಿರೋಧಿ ಪಕ್ಷಗಳು ಧೂಳಿಪಟವಾಗಲಿವೆ. ಮುಂದಿನ ಲೋಕಸಭೆ ಚುನಾವಣೆಗೆ ಐದು ರಾಜ್ಯಗಳ ಫಲಿತಾಂಶ ದಿಕ್ಸೂಚಿಯಾಗಲಿದೆ. ಕರ್ನಾಟಕದ ಫಲಿತಾಂಶ ದೇಶಕ್ಕೆ ಒಂದು ಸಂದೇಶ ನೀಡಿದೆ. ನಮ್ಮ ರಾಜ್ಯದಿಂದಲೇ ಪರಿವರ್ತನೆ ಆರಂಭವಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಜನ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದರು.
ಇತರೆ ಪಕ್ಷಗಳ ದುರಾಡಳಿತ, ಭ್ರಷ್ಟಾಚಾರಕ್ಕೆ ಬೇಸತ್ತು ಜನ ಕಾಂಗ್ರೆಸ್‌ಗೆ ಅಧಿಕಾರ ನೀಡುತ್ತಾರೆ. ಜನರಿಗೆ ತಪ್ಪಿನ ಅರಿವಾಗಿ ಕಾಂಗ್ರೆಸ್‌ಗೆ ಮತ ನೀಡುತ್ತಾರೆ. ಬರುವ ದಿನಗಳಲ್ಲಿ ಕಾಂಗ್ರೆಸ್ ಅಲೆ ಸುನಾಮಿ ತರಹ ಹರಡುತ್ತದೆ. ಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ ಎಂದು ಭರವಸೆ ವ್ಯಕ್ತಪಡಿಸಿದರು.
ಶಾಸಕ ಬಿ.ಆರ್. ಪಾಟೀಲ ಪಕ್ಷದ ಅತ್ಯಂತ ಹಿರಿಯ ನಾಯಕರಿದ್ದಾರೆ. ಸಿದ್ದರಾಮಯ್ಯನವರ ಆಪ್ತ ಸ್ನೇಹಿತರು. ಕಾಂಗ್ರೆಸ್ ಪಕ್ಷದ ಕಟ್ಟಾಳು. ಅವರು ಅವರ ಅನಿಸಿಕೆಗಳನ್ನು ವ್ಯಕ್ತಪಡಿಸಿದ್ದಾರೆ. ವರಿಷ್ಠರು ಸರಿಪಡಿಸುತ್ತಾರೆ. ನಮ್ಮಲ್ಲಿ ಯಾವುದೇ ಗೊಂದಲವಿಲ್ಲ ಎಂದು ಹೇಳಿದರು.
ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಪ್ರಕರಣ ಸಂಬಂಧ ಪ್ರತಿಕ್ರಿಯಿಸಿ, ಅದನ್ನು ತೀವ್ರವಾಗಿ ಖಂಡಿಸುತ್ತೇನೆ. ಅದು ಶಿಕ್ಷಾರ್ಹ ಅಪರಾಧ ಎನ್ನುವುದು ಜನರಲ್ಲಿ ಅರಿವು ಮೂಡಿಸಬೇಕಿದೆ. ಹೆಣ್ಣು ಭ್ರೂಣ ಹತ್ಯೆಯಿಂದ ಸಾಮಾಜಿಕ ಅಸಮತೋಲನವಾಗುತ್ತದೆ. ಅದನ್ನು ತಡೆಯುವ ಕೆಲಸ ಸರ್ಕಾರ ಮಾಡಲಿದೆ. ಜಿಲ್ಲೆಯಲ್ಲಿ ಅಂತಹ ಪ್ರಕರಣ ಆಗದಂತೆ ಕ್ರಮ ಜರುಗಿಸಲಾಗುವುದು’ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


