2024 ಏಪ್ರಿಲ್ ವೇಳೆಗೆ ಬಿಎಂಟಿಸಿಗೆ 1,400 ಹೊಸ ಎಲೆಕ್ಟ್ರಿಕ್ ಬಸ್ ಸೇರ್ಪಡೆ
2024ರ ಏಪ್ರಿಲ್ ವೇಳೆಗೆ 1, 400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬೆಂಗಳೂರು: 2024ರ ಏಪ್ರಿಲ್ ವೇಳೆಗೆ 1,400 ಹೊಸ ಎಲೆಕ್ಟ್ರಿಕ್ ಬಸ್ ಗಳು ಬಿಎಂಟಿಸಿಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬಿಎಂಟಿಸಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಇಲ್ಲಿಯವರೆಗೂ ರಾಜ್ಯ ಸಾರಿಗೆಯ ಬಸ್ ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಬಸ್ ಗಳಲ್ಲಿ ಪ್ರಯಾಣಿಸಿದ್ದಾರೆ. ನಿತ್ಯ 40 ಲಕ್ಷ ಜನ ಬಿಎಂಟಿಸಿ ಯಲ್ಲಿ ಪ್ರಯಾಣಿಸುತ್ತಿದ್ದಾರೆ. ಇದರಲ್ಲಿ ಎಲ್ಲ ಜಾತಿ, ಎಲ್ಲ ಧರ್ಮದ, ಎಲ್ಲ ಅಂತಸ್ತಿನ ಮಹಿಳೆಯರು ಉಚಿತ ಪ್ರಯಾಣ ಮಾಡುತ್ತಿದ್ದಾರೆ ಎಂದರು.
ಉಚಿತ ಬಸ್ ಪ್ರಯಾಣವನ್ನು ಬಿಜೆಪಿ ಯವರು ಟೀಕಿಸುತ್ತಿದ್ದಾರೆ. ಆದರೆ ಬಿಜೆಪಿ ಯವರು ತಾವು ಅಧಿಕಾರದಲ್ಲಿದ್ದಾಗ ಈ ಜನೋಪಯೋಗಿ ಯೋಜನೆಯನ್ನು ಏಕೆ ಜಾರಿಗೆ ತರಲಿಲ್ಲ ಎಂದು ಪ್ರಶ್ನಿಸಿದ ಸಿಎಂ, ನಮ್ಮ ಗ್ಯಾರಂಟಿಗಳಿಂದ ಜನರ ಕೊಳ್ಳುವ ಶಕ್ತಿ ಹೆಚ್ಚಾಗಿ ರಾಜ್ಯದ ಆರ್ಥಿಕ ಚಟುವಟಿಕೆ ಹೆಚ್ಚಾಗಿ ರಾಜ್ಯದ ಆರ್ಥಿಕ ಬೆಳವಣಿಗೆ ಆಗುತ್ತಿದೆ ಎಂದು ಅವರು ತಿಳಿಸಿದರು.
ಕಾರ್ಮಿಕ ಮತ್ತು ರೈತ ಮಹಿಳೆಯರು, ದುಡಿಯುವ ವರ್ಗಗಳ ಮಹಿಳೆಯರಿಗೆ ಇದರಿಂದ ಸಾಕಷ್ಟು ಹಣ ಉಳಿತಾಯವಾಗಿದೆ. ಆ ಹಣವನ್ನು ತಮ್ಮ ಕುಟುಂಬದ ಇತರೆ ಅಗತ್ಯಗಳಿಗೆ ಬಳಸುತ್ತಿದ್ದಾರೆ. ಹೀಗಾಗಿ ಲಕ್ಷಾಂತರ ಕುಟುಂಬಗಳ ಆರ್ಥಿಕ ಶಕ್ತಿಯೂ ಹೆಚ್ಚುತ್ತಿದೆ ಎಂದು ಸರ್ಕಾರದ ಜನೋಪಯೋಗಿ ಯೋಜನೆಯ ಪರಿಣಾಮಕಾರಿ ಫಲಿತಾಂಶವನ್ನು ವಿವರಿಸಿದರು.
ರಾಜ್ಯದ 4 ಕೋಟಿ 30 ಲಕ್ಷ ಮಂದಿ ನೇರವಾಗಿ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಯೋಜನ ಪಡೆಯುತ್ತಿದ್ದಾರೆ. ಆ ಮೂಲಕ ಬಡವರು ಮತ್ತು ದುಡಿಯುವ ವರ್ಗಗಳನ್ನು ಆರ್ಥಿಕ ಪ್ರಗತಿಯ ಮುಖ್ಯವಾಹಿನಿಗೆ ತರಲಾಗುತ್ತಿದೆ. ಆರ್ಥಿಕ ಶಕ್ತಿ ಮೂಲಕ ನಾಡಿನ ಸಮಸ್ತ ಮಹಿಳೆಯರಿಗೆ ಮತ್ತು ಬಡ, ಶ್ರಮಿಕ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ಆರ್ಥಿಕ ಸ್ವಾತಂತ್ರ್ಯ ಲಭಿಸಿದೆ. ಇದನ್ನು ಸಾಧಿಸಲು ಕಾಂಗ್ರೆಸ್ ಸರ್ಕಾರವೇ ಬರಬೇಕಾಯಿತು. ಹಿಂದಿದ್ದ ಬಿಜೆಪಿ ಸರ್ಕಾರಗಳು ಇದನ್ನು ಸಾಧಿಸಲಿಲ್ಲ. ಬದಲಿಗೆ ಟೀಕಿಸುತ್ತಾ ಕುಳಿತಿವೆ ಎಂದರು.
ಈ ಮಧ್ಯೆ ಪ್ರಯಾಣಿಕರಿಗೆ ಸುರಕ್ಷಿತ ಸಾರಿಗೆ ವ್ಯವಸ್ಥೆ ಮತ್ತು ಚಾಲಕರಿಗೆ ಹೆಚ್ಚಿನ ಜಾಗೃತಿ ಮೂಡಿಸಲು 10 ಬಸ್‌ಗಳಲ್ಲಿ ಅಡ್ವಾನ್ಸ್ ಡ್ರೈವರ್ ಅಸಿಸ್ಟೆನ್ಸ್ ಸಿಸ್ಟಮ್ (ಎಡಿಎಎಸ್) ಅನ್ನು ಅಳವಡಿಸಲಾಗಿದೆ ಎಂದು ಬಿಎಂಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.
ಚಾಲಕರಿಂದ ಸಂಭವಿಸುವ ಸಂಚಾರ ಉಲ್ಲಂಘನೆ ಮತ್ತು ಅಪಘಾತ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು, ಸುರಕ್ಷಿತ ಚಾಲನೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಡಿಸೆಂಬರ್‌ನಿಂದ 3,000 ಚಾಲಕರಿಗೆ ಟ್ರಾಫಿಕ್ ಕಮಾಂಡ್ ಮತ್ತು ಕಂಟ್ರೋಲ್ ಸೆಂಟರ್‌ನಲ್ಲಿ ತರಬೇತಿ ನೀಡಲಾಗುತ್ತಿದೆ ಎಂದು ಅದು ಹೇಳಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


