ರಾಜಕೀಯ ದ್ವೇಷದಿಂದ ವರ್ಗಾವಣೆ: ಚಲುವರಾಯ ಸ್ವಾಮಿ ವಿರುದ್ಧ ಆರೋಪಿಸಿ ಕೆಎಸ್ ಆರ್ ಟಿಸಿ ಡ್ರೈವರ್ ಆತ್ಮಹತ್ಯೆ ಯತ್ನ
ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ.

ಮಂಡ್ಯ: ರಾಜಕೀಯ ದ್ವೇಷದಿಂದ ವರ್ಗಾವಣೆ ಮಾಡಿದ್ದಾರೆ ಎಂದು ಸಚಿವ ಎನ್. ಚಲುವರಾಯಸ್ವಾಮಿ ವಿರುದ್ಧ ಆರೋಪ ಮಾಡಿ ಕೆಎಎಸ್ಆರ್ಟಿಸಿ ಬಸ್ ಚಾಲಕ ಜಗದೀಶ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಡಿಪೋದಲ್ಲಿ ನಡೆದಿದೆ.
ಅಸ್ವಸ್ಥಗೊಂಡಿರುವ ಜಗದೀಶ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವರ್ಗಾವಣೆಯಿಂದ ಬೇಸತ್ತು ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಒಂದು ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ ಎಂಬ ಆರೋಪದ ಮೇಲೆ ನಾಗಮಂಗಲದ ಕೆಎಸ್ಆರ್ಟಿ ಬಸ್ ಡಿಪೋದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಚಾಲಕ ಕಂ ನಿರ್ವಾಹಕ ಹೆಚ್.ಆರ್ ಜಗದೀಶ್ ಅವರನ್ನು ರಾಜಕೀಯ ಒತ್ತಡದ ಮೇರೆಗೆ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಜಗದೀಶ್ ಅವರಿಗೆ ವರ್ಗಾವಣೆ ಆದೇಶ ನೀಡಲು ಅಧಿಕಾರಿಗಳು ಮುಂದಾಗಿದ್ದರು. ಆದರೆ, ವರ್ಗಾವಣೆ ಆದೇಶ ತೆಗೆದುಕೊಳ್ಳದೇ ಜಗದೀಶ್ ನಾಗಮಂಗಲ ಬಸ್ ಡಿಪೋ ಮುಂದೆಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ವಿಷ ಸೇವಿಸಿದ ಜಗದೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಇಲ್ಲಿನ ಸಿಬ್ಬಂದಿ ಯತ್ನಿಸಿದರೂ ವರ್ಗಾವಣೆ ಆದೇಶ ರದ್ದುಗೊಳಿಸುವವರೆಗೂ ಹೋಗುವುದಿಲ್ಲ ಎಂಬುದಾಗಿ ಹಠ ಹಿಡಿದಿದ್ದಾರೆ. ಕೊನೆಗೆ ಜಗದೀಶ್ ಅವರ ಮನವೊಲಿಸಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ನನ್ನ ವರ್ಗಾವಣೆಗೆ ರಾಜಕೀಯ ಒತ್ತಡವೇ ಕಾರಣ. ರಾಜಕೀಯ ದ್ವೇಷದಿಂದ ನನ್ನನ್ನು ವರ್ಗಾವಣೆ ಮಾಡಲಾಗಿದೆ ಎಂದು ಎಂದು ಜಗದೀಶ್ ಆರೋಪಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಪೋ ಉಸ್ತುವಾರಿ ಮಂಜುನಾಥ್, ಚಾಲಕ ಜಗದೀಶ್ ಮಹಿಳಾ ಪ್ರಯಾಣಿಕರ ಜೊತೆ ಅನುಚಿತ ವರ್ತನೆ ತೋರಿರುವುದಾಗಿ ದೂರು ಬಂದಿತ್ತು. ಆ ದೂರಿನ ಅನ್ವಯ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಹೇಳಿದರು. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೂ ಆತ್ಮಹತ್ಯೆಗೆ ಯತ್ನಿಸಿದ ಚಾಲಕನನ್ನು ಮೈಸೂರಿನ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಎಚ್. ಕುಮಾರಸ್ವಾಮಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಈ ಬಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಈ ಬಗ್ಗೆ ಕ್ರಮಕೈಗೊಳ್ಳಲಿ. ತಮ್ಮ ರಾಜಕೀಯ ತೆವಲಿಗೆ ಅಮಾಯಕರ ಮೇಲೆ ದೌರ್ಜನ್ಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಗದೀಶ್ ಸದ್ಯ ವೆಂಟಿಲೇಟರ್‌ನಲ್ಲಿ ಇದ್ದಾರೆ. ಸರ್ಕಾರ ಬಂದು ಐವತ್ತು ದಿನ ಆಗಿಲ್ಲ. ವರ್ಗಾವಣೆ ಮಾಡಿಕೊಳ್ಳುವುದಾದರೆ ಮಾಡಿಕೊಳ್ಳಲಿ. ಆದರೆ ಈ ರೀತಿ ಮಾಡುವುದು ಸರಿಯಲ್ಲ. ಜಗದೀಶ್ ಪತ್ನಿ ಪಂಚಾಯತಿ ಸದಸ್ಯರು. ಆಗಲೇ ದ್ವೇಷ ರಾಜಕಾರಣ ಆರಂಭಿಸಿದ್ದಾರೆ. ಊರಿನಲ್ಲಿರುವ ಮಹದೇವ ಎಂಬ ರೌಡಿ ಜಗದೀಶ್ ಕುಟುಂಬಕ್ಕೆ ಕಿರುಕುಳ ನೀಡಿದ್ದಾನೆ. ಈ ಹೆಣ್ಣು ಮಗಳು ಜೆಡಿಎಸ್ ಪಕ್ಷ ಬಿಡುವಂತೆ, ಕಾಂಗ್ರೆಸ್ ಸೇರುವಂತೆ ಒತ್ತಡ ಏರಿದ್ದಾನೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


