ರಾಜ್ಯ

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯಿಂದ ಕೃತ್ಯ!

ಬೆಂಗಳೂರಿನ ಲುಲು ಮಾಲ್ ನಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಅಂತಹುದೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಬೆಂಗಳೂರು ಮೆಟ್ರೋ ನಿಲ್ದಾಣದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯಿಂದ ಕೃತ್ಯ!
ನಮ್ಮ ಮೆಟ್ರೋ ರೈಲು
Published On :

ಬೆಂಗಳೂರು: ಬೆಂಗಳೂರಿನ ಲುಲು ಮಾಲ್ ನಲ್ಲಿ ನಡೆದಿದ್ದ ಲೈಂಗಿಕ ಕಿರುಕುಳ ಪ್ರಕರಣ ಹಸಿರಾಗಿರುವಂತೆಯೇ ಇತ್ತ ಅಂತಹುದೇ ಮತ್ತೊಂದು ಲೈಂಗಿಕ ಕಿರುಕುಳ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ.

ಈ ಬಾರಿ ಬೆಂಗಳೂರಿನ ಪ್ರಮುಖ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನಡೆದಿದ್ದು, ಜನರಿಂದ ತುಂಬಿ ತುಳುಕುತ್ತಿದ್ದ ಮೆಟ್ರೋ ನಿಲ್ದಾಣದಲ್ಲಿ ದುಷ್ಕರ್ಮಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಹೇಳಲಾಗಿದೆ. ಈ ಬಗ್ಗೆ ಯುವತಿಯ ಸ್ನೇಹಿತರು ಸಾಮಾಜಿಕ ಜಾಲತಾಣ Reddit ವಿಚಾರ ಬಹಿರಂಗ ಪಡಿಸಿದ್ದು, ಕೂಡಲೇ ತಪ್ಪಿತಸ್ಥನ ವಿರುದ್ಧ ಕ್ರಮ ಜರುಗಿಸುವಂತೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ನಿನ್ನೆ ಅಂದರೆ ಇದೇ ಸೋಮವಾರ ಬೆಳಗ್ಗೆ ಸುಮಾರು 8.30ರ ಸುಮಾರಿನಲ್ಲಿ ಬೆಂಗಳೂರಿನ ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಈ ಘಟನೆ ನೆಡೆದಿದೆ ಎಂದು ಹೇಳಲಾಗಿದೆ. ಸಾಮಾಜಿಕ ಜಾಲತಾಣದಲ್ಲಿರುವಂತೆ, ‘ಆಕೆ ನಿತ್ಯ ಕಾಲೇಜಿಗೆ ಬಸ್‌ನಲ್ಲೇ ತೆರಳುತ್ತಿದ್ದಳು. ಆದರೆ, ಅಂದು ಬೆಳಿಗ್ಗೆ 8.30ರ ಸುಮಾರಿಗೆ ಮೆಟ್ರೊದಲ್ಲಿ ಪ್ರಯಾಣಿಸಲು ಮೆಜೆಸ್ಟಿಕ್‌ಗೆ ಬಂದಿದ್ದಳು. ಮೆಟ್ರೊ ಏರುವಾಗ ದಟ್ಟಣೆಯಿತ್ತು. ರೈಲು ಏರಿದ ಮೇಲೆ ಕೆಂಪು ಅಂಗಿ ಧರಿಸಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಸ್ಪರ್ಶಿಸಿದ್ದಾನೆ. ಆರಂಭದಲ್ಲಿ ಆಕೆಗೆ ಏನಾಗುತ್ತಿದೆ ಎಂಬ ಅರಿವು ಇರಲಿಲ್ಲ. ಮುಂದಕ್ಕೆ ತೆರಳಿ ಸಹಾಯಕ್ಕೆ ಕೋರಿದ್ದರೂ ಮೆಟ್ರೊ ಪ್ರಯಾಣಿಕರು ನೆರವಿಗೆ ಬಂದಿರಲಿಲ್ಲ’ ಎಂದು ಬರೆದುಕೊಂಡಿದ್ದಾರೆ.

Story image

ಬಳಿಕ ಇದನ್ನು ಗಮನಿಸಿದ ಹಲವರು ಮೆಟ್ರೊ ಸಂಪೂರ್ಣ ಸಿಸಿ ಟಿ.ವಿ ಕ್ಯಾಮೆರಾದ ಕಣ್ಗಾವಲಿನಲ್ಲಿದೆ. ದೂರು ಸಲ್ಲಿಸಿದರೆ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಾರೆ. ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕರನ್ನೂ ಸಂಪರ್ಕಿಸಿ ದೂರು ನೀಡಬಹುದು ಎಂದು ಕೆಲವರು ಸಲಹೆ ನೀಡಿದ್ದಾರೆ.

ಬೆಂಗಳೂರು ಮೆಟ್ರೋದಲ್ಲಿ 2ನೇ ಘಟನೆ
ಬೆಂಗಳೂರು ಮೆಟ್ರೋದಲ್ಲಿ ನಡೆದ 2ನೇ ಘಟನೆ ಇದಾಗಿದ್ದು, ಕಳೆದ ಸೆ.9ರಂದು ಇಂತಹದ್ದೇ ಘಟನೆಯೊಂದು ನಡೆದಿತ್ತು. ನಗರದ ಕಾಲೇಜೊಂದರ 20 ವರ್ಷದ ವಿದ್ಯಾರ್ಥಿನಿ, ಲೈಂಗಿಕ ಕಿರುಕುಳದ ಬಗ್ಗೆ ದೂರು ನೀಡಿದ್ದರು. ಕಬ್ಬನ್ ಪಾರ್ಕ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು, ಕೃತ್ಯ ನಡೆದ ಸ್ಥಳದ ಆಧಾರದ ಮೇಲೆ ಹಲಸೂರು ಗೇಟ್ ಠಾಣೆಗೆ ಇತ್ತೀಚೆಗೆ ವರ್ಗಾಯಿಸಲಾಗಿತ್ತು. ದೂರಿನಲ್ಲಿರುವಂತೆ ‘ಸ್ನೇಹಿತೆ ಜೊತೆ ಮೆಜೆಸ್ಟಿಕ್‌ಗೆ ಹೋಗಲು, ಎಂ.ಜಿ. ರಸ್ತೆಯಲ್ಲಿರುವ ಮೆಟ್ರೊ ನಿಲ್ದಾಣದಲ್ಲಿ ರೈಲು ಹತ್ತಿದ್ದೆ. ಸೆಂಟ್ರಲ್ ಕಾಲೇಜು ನಿಲ್ದಾಣ ಬಳಿ ರೈಲು ಚಲಿಸುತ್ತಿದ್ದಾಗ, ಹಿಂದಿನಿಂದ ಆರೋಪಿ ತನ್ನ ಖಾಸಗಿ ಭಾಗವನ್ನು ತಾಗಿಸಿ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ್ದ’ ಎಂದು ಉಲ್ಲೇಖಿಸಿ ದೂರು ನೀಡಿದ್ದರು.

ಬಿಎಂಆರ್ ಸಿಎಲ್ ಸ್ಪಷ್ಟನೆ
ಕಳೆದ ಕೆಲವು ದಿನಗಳ ಹಿಂದೆ ಪ್ರಯಾಣಿಕರೊಬ್ಬರ ಪರ್ಸ್‌ ಸಹ ಕಳವು ಮಾಡಲಾಗಿತ್ತು. ಅವರು ಉಪ್ಪಾರಪೇಟೆ ಠಾಣೆಗೆ ದೂರು ನೀಡಿದ್ದರು. ಈ ಎರಡು ಘಟನೆಗಳು ನಡೆದ ಮೇಲೆ ದಟ್ಟಣೆ ಅವಧಿಯಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ರೈಲು ಚಲಿಸುವ ಸಂದರ್ಭದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಿಎಂಆರ್‌ಸಿಎಲ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಂತೆಯೇ ಘಟನೆ ಕುರಿತು ಇದುವರೆಗೂ ಯಾರೂ ದೂರು ನೀಡಿಲ್ಲ. ದೂರು ನೀಡಿದರೆ ತಕ್ಷಣವೇ ಸಿಸಿ ಟಿ.ವಿ ಕ್ಯಾಮೆರಾ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ ಎಂದು ನಮ್ಮ ಮೆಟ್ರೊ ವ್ಯವಸ್ಥಾಪಕ ನಿರ್ದೇಶಕ ಅಂಜುಂ ಪರ್ವೇಜ್‌ ಹೇಳಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.