ನವೆಂಬರ್‌ನಲ್ಲಿ 7ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧತೆ!
ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.

ತುಮಕೂರು: ರಾಜ್ಯ ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸಂಬಂಧ ರಚಿಸಿರುವ 7ನೇ ವೇತನ ಆಯೋಗ ಮುಂದಿನ ನವೆಂಬರ್ ಒಳಗೆ ವರದಿ ಸಲ್ಲಿಸಲಿದ್ದು, ವರದಿ ಬಳಿಕ ಅನುಷ್ಠಾನದ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ಶುಕ್ರವಾರ ಭರವಸೆ ನೀಡಿದರು.
ನಗರದ ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಶುಕ್ರವಾರ ಆರಂಭವಾದ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟಕ್ಕೆ ಸಚಿವರು ಚಾಲನೆ ನೀಡಿ ನೀಡಿದರು.
ಬಳಿಕ ಮಾತನಾಡಿದ ಅವರು, ನವೆಂಬರ್ ಒಳಗೆ ವರದಿ ಸಲ್ಲಿಸುವಂತೆ ವೇತನ ಆಯೋಗಕ್ಕೆ ಸೂಚಿಸಲಾಗಿದೆ. ವರದಿ ಬಂದ ನಂತರ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ಭರವಸೆ ನೀಡಿದ್ದಾರೆ. ವೇತನ ಆಯೋಗ ಜಾರಿಯಾಗಲಿದ್ದು, ನೌಕರರು ಆತಂಕಪಡುವ ಅಗತ್ಯವಿಲ್ಲ ಎಂದು ಹೇಳಿದರು.
ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಪಡಿಸಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ತರಲು ಸರ್ಕಾರ ಬದ್ಧವಾಗಿದ್ದು, ವರದಿ ನೀಡಲು ಸಮಿತಿ ರಚಿಸಲಾಗಿದೆ. ವರದಿ ಬಂದ ನಂತರ ಜಾರಿ ಮಾಡಲಾಗುವುದು. ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿ ಒಪಿಎಸ್ ಜಾರಿ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಅದರಂತೆ ಸರ್ಕಾರ ನಡೆದುಕೊಳ್ಳಲಿದ್ದು, ಜಾರಿ ಮಾಡಿಯೇ ತೀರುತ್ತೇವೆ. ಎಲ್ಲಾ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದವರಿಗೆ ಉಚಿತವಾಗಿ ಆರೋಗ್ಯ ಸೇವೆ ಒದಗಿಸುವ ‘ಕರ್ನಾಟಕ ಆರೋಗ್ಯ ಸಂಜೀವಿನಿ’ ಯೋಜನೆಯೂ ಶೀಘ್ರವೇ ಜಾರಿಯಾಗಲಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರು ಇದ್ದು, ಇನ್ನೂ 2.50 ಲಕ್ಷ ಹುದ್ದೆಗಳು ಖಾಲಿ ಉಳಿದಿವೆ. ಚುನಾವಣೆ ಪ್ರಣಾಳಿಕೆಯಲ್ಲಿ ಈ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದ್ದು, ಮುಂದಿನ ಐದು ವರ್ಷಗಳಲ್ಲಿ ನೇಮಕ ಮಾಡಲಾಗುವುದು ಎಂದರು.
ರಾಜ್ಯದ ಆಡಳಿತ ವ್ಯವಸ್ಥೆ ದೇಶದಲ್ಲೇ ಮಾದರಿಯಾಗಿದ್ದು, ‘ಕರ್ನಾಟಕ ಮಾದರಿ’ ಎನ್ನುವಂತಾಗಿದೆ. ಅದಕ್ಕೆ ನೌಕರ ವರ್ಗದ ಬದ್ಧತೆ ಕಾರಣವಾಗಿದೆ. ದಕ್ಷತೆ, ಪ್ರಾಮಾಣಿಕತೆಯಿಂದ ಕೆಲಸ ಮಾಡಿದರೆ ಸರ್ಕಾರಕ್ಕೆ ಒಳ್ಳೆಯ ಹೆಸರು ಬರುತ್ತದೆ. ಕ್ರೀಡೆ ನೌಕರರ ಜೀವನದ ಒಂದು ಭಾಗವಾದರೆ ಆರೋಗ್ಯ ಸುಧಾರಿಸಿ ಸರಿಯಾಗಿ ಕರ್ತವ್ಯ ನಿರ್ವಹಿಸಲು ಸಾಧ್ಯವಾಗುತ್ತದೆ. ಇಂತಹ ಸದುದ್ದೇಶದಿಂದಲೇ ಕ್ರೀಡಾಕೂಟಕ್ಕೆ ರಾಜ್ಯ ಸರ್ಕಾರ ರೂ.3.50 ಕೋಟಿ ಹಣ ನೀಡಿದೆ ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


