2ಎ ಮೀಸಲಾತಿಗೆ ಆಗ್ರಹ: ಸೆಪ್ಟೆಂಬರ್ 10 ರಿಂದ ಮತ್ತೆ ಹೋರಾಟಕ್ಕೆ ಪಂಚಮಸಾಲಿ ಸಮುದಾಯ ಮುಂದು!
2ಎ ಮೀಸಲಾತಿಗಾಗಿ ಸೆಪ್ಟೆಂಬರ್ 10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದರು.

ಬೆಳಗಾವಿ: 2ಎ ಮೀಸಲಾತಿಗಾಗಿ ಸೆಪ್ಟೆಂಬರ್ 10 ರಂದು ನಿಪ್ಪಾಣಿಯಲ್ಲಿ ಮತ್ತೆ ಹೋರಾಟ ಆರಂಭವಾಗಲಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಪೀಠಾಧಿಪತಿ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರು ಗುರುವಾರ ಹೇಳಿದರು.
ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ನೇರವೇರಿಸಿ ಹೋರಾಟ ಆರಂಭ ಮಾಡಲಾಗುತ್ತಿದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳಲ್ಲಿ ಇಷ್ಟಲಿಂಗ ಪೂಜೆ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಸೆ.10 ರಂದು ನಿಪ್ಪಾಣಿಯಲ್ಲಿ ಬಹಿರಂಗ ಸಭೆ ನಡೆಸಲಾಗುವುದು. ಬಳಿಕ ರಾಷ್ಟ್ರೀಯ ಹೆದ್ದಾರಿಗೆ ಪಾದಯಾತ್ರೆ ಮೂಲಕ ತೆರಳಿ ಇಷ್ಟಲಿಂಗ ಪೂಜೆ ಮಾಡಲಾಗುವುದು. ಲಿಂಗಾಯತ ಸಮುದಾಯಕ್ಕೆ 2ಎ ಮೀಸಲಾತಿ ಸಿಗಬೇಕು. ಕೇಂದ್ರ ಸರ್ಕಾರವು ಒಬಿಸಿ ಪಟ್ಟಿಯಲ್ಲಿ ಸೇರ್ಪಡೆ ಮಾಡುವಂತೆ ಒತ್ತಾಯ ಮಾಡಲಾಗುತ್ತದೆ. ಸೆ.10 ರಂದು ವೀರಶೈವ ಲಿಂಗಾಯತ ಸಮುದಾಯವರು ಹೋರಾಟದಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡಿದರು.
ಆರ್ಥಿಕವಾಗಿ ಹಿಂದುಳಿದ ಪಂಚಮಸಾಲಿಗಳಿಗೆ ಶಿಕ್ಷಣ, ಉದ್ಯೋಗ ಮತ್ತು ಉದ್ಯೋಗ ಬಡ್ತಿಯಲ್ಲಿ 2ಎ ಮೀಸಲಾತಿಗಾಗಿ ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತಿದ್ದೇವೆ. ಹಿಂದಿನ ಸರ್ಕಾರ 2ಎ ಬದಲಿಗೆ 2ಡಿ ಮೀಸಲಾತಿ ನೀಡಿತ್ತು. 2ಡಿ ಮೀಸಲಾತಿ ವಿಚಾರ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ .ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೂಡಲೇ ನಮ್ಮ ಎಲ್ಲಾ ಸಮುದಾಯದ ಮುಖಂಡರು ಮತ್ತು ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ 2ಎ ಮೀಸಲಾತಿಗೆ ಮನವಿ ಸಲ್ಲಿಸಿದ್ದರು, ಈ ಬಗ್ಗೆ ಚಿಂತನೆ ನಡೆಸುವುದಾಗಿ ಸಿಎಂ ಭರವಸೆ ನೀಡಿದ್ದು. ಬಜೆಟ್ ಅಧಿವೇಶನ ಮುಗಿದು ಎರಡು ತಿಂಗಳಾಗಿದೆ, ಆದರೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಲೋಕಸಭೆ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವ ಕಾರಣ ನಮ್ಮನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ. 2024ರ ವೇಳೆಗೆ ನಮಗೆ ಮೀಸಲಾತಿ ನೀಡಬೇಕು. 2ಎ ಮೀಸಲಾತಿಗೆ ಕಾನೂನಾತ್ಮಕ ಸಮಸ್ಯೆಯಿದ್ದರೆ, ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಆಗ್ರಹಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


