ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಸಿದ್ದರಾಮಯ್ಯ
ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಬೆಂಗಳೂರು: ಶೀಘ್ರದಲ್ಲೇ ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.
ಶುಕ್ರವಾರ ಇಲ್ಲಿನ ಶಿವಾಜಿನಗರದ ಸೇಂಟ್ ಮೇರಿ ಬೆಸಿಲಿಕಾ ಚರ್ಚ್‍ನಲ್ಲಿ ತಾಯಿ ಮೇರಿ ಜಯಂತೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪನೆಯನ್ನು ನಾವು ಬಜೆಟ್‍ನಲ್ಲೇ ಘೋಷಿಸಿದ್ದೇವೆ. ಇದಕ್ಕಾಗಿ 100 ಕೋಟಿ ರೂಪಾಯಿಗಳನ್ನು ಮೀಸಲಿಟ್ಟು ಆದಷ್ಟು ಬೇಗ ನಿಗಮ ಸ್ಥಾಪಿಸಿ ಅದಕ್ಕೆ ಅರ್ಹ ಅಧ್ಯಕ್ಷರನ್ನು ನೇಮಿಸಲಾಗುವುದು’ ಎಂದು ಹೇಳಿದರು.
‘ಬೆಸಿಲಿಕಾ ಪ್ರಾರ್ಥನಾ ಮಂದಿರಕ್ಕೆ ಎಲ್ಲ ಜಾತಿ, ಧರ್ಮದವರು ಬರುತ್ತಾರೆ. ಹೀಗಾಗಿ ಇದೊಂದು ಭಾವೈಕ್ಯತಾ ಕೇಂದ್ರವಾಗಿ ರೂಪುಗೊಂಡಿದೆ. ಹೀಗಾಗಿ ನಾನು ಈ ಜಯಂತೋತ್ಸವಕ್ಕೆ ಮತ್ತು ಹಬ್ಬಕ್ಕೆ ಪ್ರತಿ ವರ್ಷ ತಪ್ಪದೆ ಹಾಜರಾಗುತ್ತೇನೆ. ಇದು ನನಗೆ ಬಹಳ ಖುಷಿಯ ಸಂಗತಿ’ ಎಂದು ಅವರು ಬಣ್ಣಿಸಿದರು.
‘ಭಾರತವೇ ಒಂದು ಭಾವೈಕ್ಯ ಕೇಂದ್ರ. ಇಲ್ಲಿ ಜಾತಿ-ಧರ್ಮದ ಹೆಸರಿನಲ್ಲಿ ಮನುಷ್ಯ ದ್ವೇಷಕ್ಕೆ ಜಾಗ ಇಲ್ಲ. ಕೆಲವರು ಮನುಷ್ಯ ದ್ವೇಷವನ್ನೇ ಸಂಸ್ಕೃತಿಯನ್ನಾಗಿ ಆಚರಿಸಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಸರಕಾರ ದ್ವೇಷದ ವಾತಾವರಣ ಹರಡಿಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಂಡು ಭಾರತದ ಭಾವೈಕ್ಯತಾ ಪರಂಪರೆಯನ್ನು ಕಾಪಾಡಲು ಬದ್ದವಾಗಿದೆ’ ಎಂದು ತಿಳಿಸಿದರು.
‘ಯಾವ ಧರ್ಮವೂ ಮನುಷ್ಯ ದ್ವೇಷವನ್ನು ಹೇಳುವುದಿಲ್ಲ. ಆದರೆ, ಕೆಲವು ಕಪಟಿಗಳು ಧರ್ಮದ ಹೆಸರಿನಲ್ಲಿ ಮನುಷ್ಯರನ್ನು, ಸಮಾಜವನ್ನು ವಿಭಜಿಸುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರಕಾರ ಇಂತಹವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ. ಅನೈತಿಕ ಪೊಲೀಸ್‍ಗಿರಿ ನೆಪದಲ್ಲಿ ಯಾರಾದರೂ ಕಾನೂನು ಕೈಗೆತ್ತಿಕೊಂಡರೆ ಅವರಿಗೆ ತಕ್ಕ ಕಾನೂನಿನ ಶಾಸ್ತಿ ಆಗಲಿದೆ’ ಎಂದು ಎಚ್ಚರಿಕೆ ನೀಡಿದರು.
ಇದೇ ವೇಳೆ ಶಿವಾಜಿನಗರ ಮೆಟ್ರೋ ನಿಲ್ದಾಣಕ್ಕೆ ‘ಸೇಂಟ್ ಮೇರೀಸ್ ನಿಲ್ದಾಣ’ ಎಂದು ಹೆಸರಿಡಬೇಕು ಎನ್ನುವುದೂ ಸೇರಿ ಸಮುದಾಯದ ಮುಖಂಡರು ಮುಂದಿಟ್ಟಿರುವ ಮೂರು ಬೇಡಿಕೆಗಳ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


