ಚುನಾವಣಾ ಅಫಿಡವಿಟ್‌ನಲ್ಲಿ ತಪ್ಪು ಮಾಹಿತಿ: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ದೂರು ದಾಖಲು
ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆ ವೇಳೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಕೆಲ ಆಸ್ತಿ ವಿವರಗಳನ್ನು ಮರೆಮಾಚಿದ್ದಾರೆ ಎಂಬ ಆರೋಪದ ಮೇಲೆ ಕಾರವಾರದ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಬೆಂಗಳೂರಿನ ಶೇಷಾದ್ರಿಪುರಂ ನಿವಾಸಿ ಶ್ರೀನಿವಾಸ ಎಂಬುವವರು ಈ ಸಂಬಂಧ ಚುನಾವಣಾ ಆಯೋಗಕ್ಕೆ ಸೆಪ್ಟೆಂಬರ್ 20ರಂದು ದೂರು ದಾಖಲಿಸಿದ್ದಾರೆ.
ದೂರುದಾರರ ಪ್ರಕಾರ, ಸತೀಶ್ ಸೈಲ್ ಮತ್ತು ಅವರ ಪತ್ನಿ ಕಲ್ಪನಾ ಅವರ ಒಡೆತನದಲ್ಲಿರುವ ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿ. ಕಂಪನಿಯ ಕುರಿತು ಯಾವುದೇ ಮಾಹಿತಿಯನ್ನು ಅಫಿಡವಿಟ್‌ನಲ್ಲಿ ಉಲ್ಲೇಖಿಸಿಲ್ಲ. ಅಲ್ಲದೆ, ಅಫಿಡವಿಟ್‌ನಲ್ಲಿ ಕಂಪನಿಯ ಬ್ಯಾಂಕ್ ವಹಿವಾಟುಗಳನ್ನು ಸಹ ನಮೂದಿಸದಿರುವುದು ಅನುಮಾನಕ್ಕೆ ಕಾರಣವಾಗಿದೆ ಎಂದು ದೂರಿದ್ದಾರೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಪ್ರೈವೇಟ್ ಲಿಮಿಟೆಡ್ ಹೆಸರಿನಲ್ಲಿ ಶಾಸಕ ಸೈಲ್ ಅವರು 63,90,19,813 ರೂ. ಸಾಲ ಪಡೆದಿದ್ದಾರೆ. ರಾಜ್ಯ ಸರ್ಕಾರದಿಂದ 30 ವರ್ಷಗಳ ಅವಧಿಗೆ ಲೀಸ್ ಪಡೆದ ಬಂದರು ಇಲಾಖೆಗೆ ಸೇರಿದ ಜಟ್ಟಿಯನ್ನು ಅಡವಿಟ್ಟು ಬ್ಯಾಂಕ್ ಸಾಲ ಪಡೆದಿರುವುದು ಕಾನೂನಿಗೆ ವಿರುದ್ಧವಾಗಿದೆ. ಅಫಿಡವಿಟ್‌ನಲ್ಲಿ ಈ ಬಗ್ಗೆಯೂ ಯಾವುದೇ ಉಲ್ಲೇಖವಿಲ್ಲ ಎಂದು ದೂರುದಾರರು ಆರೋಪಿಸಿದ್ದಾರೆ.
ಮಲ್ಲಿಕಾರ್ಜುನ ಶಿಪ್ಪಿಂಗ್ ಕಂಪನಿ ಹೆಸರಿನಲ್ಲಿ ಹೊರರಾಜ್ಯದ ಕೆಲ ಬ್ಯಾಂಕುಗಳಲ್ಲಿ ಪಡೆದ ಸಾಲದ ಮಾಹಿತಿಯನ್ನು ನಮೂದಿಸಿಲ್ಲ. ಉಳಿತಾಯ ಖಾತೆಯ ವಿವರಗಳನ್ನು ಮಾತ್ರ ನೀಡಲಾಗಿದೆ. ಹೀಗಾಗಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರುದಾರರು ಒತ್ತಾಯಿಸಿದ್ದಾರೆ.
ಮಾಹಿತಿ ಮರೆಮಾಚಿದ್ದಾರೆ ಎನ್ನುವ ಆರೋಪದ ಮೇಲೆ ಇತ್ತೀಚೆಗಷ್ಟೇ ಕರ್ನಾಟಕ ಹೈಕೋರ್ಟ್ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಅವರ ಮೊಮ್ಮಗ, ಜೆಡಿಎಸ್ ನಾಯಕ ಪ್ರಜ್ವಲ್ ರೇವಣ್ಣ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಮತದಾರರಿಗೆ ಕುಕ್ಕರ್ ಮತ್ತು ಐರನ್ ಬಾಕ್ಸ್ ಹಂಚುವ ಮೂಲಕ ಚುನಾವಣಾ ಅವ್ಯವಹಾರ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧವೂ ದೂರು ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


