ಅಕ್ರಮ ಫ್ಲೆಕ್ಸ್: 264 ಎಫ್ಐಆರ್ ದಾಖಲು; ಹೈಕೋರ್ಟ್ಗೆ ಬಿಬಿಎಂಪಿ ಮಾಹಿತಿ
ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿದಂತೆ ಅಕ್ರಮ ಜಾಹೀರಾತುಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಯೊಂದು ಅಕ್ರಮ ಜಾಹೀರಾತು ಅಳವಡಿಕೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ರಾಜ್ಯ ಸರ್ಕಾರಕ್ಕೆ ತಲಾ ರೂ.50 ಸಾವಿರ ದಂಡ ವಿಧಿಸಲು...

ಬೆಂಗಳೂರು: ಹೋರ್ಡಿಂಗ್ಸ್, ಫ್ಲೆಕ್ಸ್, ಬ್ಯಾನರ್ ಸೇರಿದಂತೆ ಅಕ್ರಮ ಜಾಹೀರಾತುಗಳ ಹಾವಳಿಯನ್ನು ತಡೆಯುವ ನಿಟ್ಟಿನಲ್ಲಿ ಪ್ರತಿಯೊಂದು ಅಕ್ರಮ ಜಾಹೀರಾತು ಅಳವಡಿಕೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ರಾಜ್ಯ ಸರ್ಕಾರಕ್ಕೆ ತಲಾ ರೂ.50 ಸಾವಿರ ದಂಡ ವಿಧಿಸಲು ಹೈಕೋರ್ಟ್ ನೀಡಿರುವ ಸೂಚನೆಯನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಈ ದಿಸೆಯಲ್ಲಿ ಆಗಸ್ಟ್ 2 ರಿಂದ ಅಕ್ರಮ ಜಾಹೀರಾತು ಅಳವಡಿಸಿದ್ದ ವ್ಯಕ್ತಿಗಳ ವಿರುದ್ಧ ಒಟ್ಟು 264 ಎಫ್ಐಆರ್ಗಳನ್ನು ದಾಖಲಿಸಲಾಗಿದೆ ಎಂದು ಬಿಬಿಎಂಪಿ ಹೈಕೋರ್ಟ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನ ಮಾಯಿಗೇಗೌಡ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಮತ್ತು ನ್ಯಾಯಮೂರ್ತಿ ಎಂಜಿಎಸ್ ಕಮಲ್ ಅವರ ನೇತೃತ್ವದ ವಿಭಾಗೀಯ ಪೀಠ ಬುಧವಾರ ವಿಚಾರಣೆ ನಡೆಸಿತು.
ಬಿಬಿಎಂಪಿ ಪರ ವಕೀಲ ಎನ್ ಕೆ ರಮೇಶ್ ಅವರು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರ ಅಫಿಡವಿಟ್ ಅನ್ನು ಪೀಠಕ್ಕೆ ಸಲ್ಲಿಸಿ, ಕೈಗೊಂಡಿರುವ ಕ್ರಮ ಮತ್ತು ಯೋಜನೆಗಳ ಕುರಿತು ಪೀಠಕ್ಕೆ ವಿವರಿಸಿದರು.
ಅಫಿಡವಿಟ್ನಲ್ಲಿ ಏನಿದೆ: ಅಕ್ರಮ ಜಾಹೀರಾತುಗಳ ಅಳವಡಿಕೆ ಮಹಾನಗರದಲ್ಲಿ ಒಂದು ಉಪಟಳವಾಗಿ ಪರಿಣಮಿಸಿದೆ. ಇದನ್ನು ತಡೆಯಲು ಬಿಬಿಎಂಪಿ ಅಧಿಕಾರಿಗಳು ಹೊಸ ವಿಧಾನಗಳಡಿ ಮತ್ತು ಹೆಚ್ಚು ಕಟ್ಟುನಿಟ್ಟಾದ ಕ್ರಿಯಾ ಯೋಜನೆ ರೂಪಿಸಿದ್ದಾರೆ. ಈ ಮೂಲಕ ಭವಿಷ್ಯದಲ್ಲಿ ಅನಧಿಕೃತ ಫ್ಲೆಕ್ಸ್ಗಳು, ಬ್ಯಾನರ್ಗಳನ್ನು ಅಕ್ರಮವಾಗಿ ಅಳವಡಿಸುವುದನ್ನು ಸಂಪೂರ್ಣವಾಗಿ ತಡೆಯಲು ಶ್ರಮಿಸುತ್ತಿದ್ದಾರೆ ಎಂದು ಅಫಿಡವಿಟ್ನಲ್ಲಿ ವಿವರಿಸಲಾಗಿದೆ.
2023ರ ಆಗಸ್ಟ್ 2ರಿಂದ ಒಟ್ಟು 923 ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳು ಮತ್ತು ಇತರ ಅಕ್ರಮ ಜಾಹೀರಾತುಗಳನ್ನು ಗುರುತಿಸಲಾಗಿದೆ. 923 ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕಲಾಗಿದೆ. 369 ದೂರುಗಳನ್ನು ದಾಖಲಿಸಲಾಗಿದ್ದು, ಒಟ್ಟು 264 ಎಫ್ಐಆರ್ ದಾಖಲಾಗಿವೆ.
ಬಿಬಿಎಂಪಿಯ ಎಂಟೂ ವಲಯಗಳ ವಿಶೇಷ ಆಯುಕ್ತರು ಮತ್ತು ವಲಯ ಆಯುಕ್ತರೊಂದಿಗೆ ಇದೇ 21 ರಂದು ವಿಡಿಯೊ ಕಾನ್ಫರೆನ್ಸ್ ನಡೆಸಲಾಗಿದೆ. ನಿರ್ದಿಷ್ಟ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿಗದಿಪಡಿಸಲು ವಾರ್ಡ್ವಾರು ಅಧಿಕಾರಿಗಳ ತಂಡವನ್ನು ರಚಿಸಲಾಗಿದೆ. ಎಫ್ಐಆರ್ಗಳು, ದಂಡ ವಿಧಿಸುವುದು ಮತ್ತು ಅನಧಿಕೃತ ಜಾಹೀರಾತುಗಳನ್ನು ತೆಗೆದುಹಾಕುವ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ನಂತರ ಎಫ್ಐಆರ್ಗಳನ್ನು ದಾಖಲಿಸಲಾಗುತ್ತಿದೆ. ತಪ್ಪಿತಸ್ಥ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಚಾಲನೆ ನೀಡಲಾಗಿದೆ ಎಂದು ವಿವರಿಸಲಾಗಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲ ಜಿ ಆರ್ ಮೋಹನ್ ಅವರು ಅಕ್ರಮ ಜಾಹೀರಾತುಗಳು ಇನ್ನೂ ಅಸ್ತಿತ್ವದಲ್ಲಿವೆ ಎಂಬ ಬಗ್ಗೆ ಫೋಟೊ ಸಹಿತವಾದ ಮೆಮೊ ಅನ್ನು ಸಲ್ಲಿಸುವ ಮೂಲಕ ಬಿಬಿಎಂಪಿ ನ್ಯಾಯಾಲಯದ ಆದೇಶವನ್ನು ಪಾಲಿಸಿಲ್ಲ ಎಂದು ದೂರಿದರು. ಈ ಮೆಮೊಗೆ ಆಕ್ಷೇಪಣೆ ಸಲ್ಲಿಸುವಂತೆ ಬಿಬಿಎಂಪಿಗೆ ಸೂಚಿಸಿದ ಪೀಠವು ವಿಚಾರಣೆಯನ್ನು ಎರಡು ವಾರ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


