ಪಿಎಸ್ಐ ನೇಮಕಾತಿ ಮರು ಪರೀಕ್ಷೆ ಜನವರಿ 23ಕ್ಕೆ ಮುಂದೂಡಿಕೆ: ಗೃಹ ಸಚಿವ ಪರಮೇಶ್ವರ್
ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.

ಬೆಳಗಾವಿ: ಡಿಸೆಂಬರ್ 23ಕ್ಕೆ ನಿಗದಿಯಾಗಿದ್ದ 545 ಪಿಎಸ್ಐ ಹುದ್ದೆಗಳ ಮರು ಪರೀಕ್ಷೆಯನ್ನು ರಾಜ್ಯ ಸರ್ಕಾರ ಒಂದು ತಿಂಗಳ ಕಾಲ ಮುಂದೂಡಿದ್ದು, ಮುಂದಿನ ವರ್ಷ ಜನವರಿ 23ಕ್ಕೆ ಪರೀಕ್ಷೆ ನಡೆಯಲಿದೆ.
545 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ ನೀಡಿತ್ತು. ನಂತರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ಇದೇ ಡಿಸೆಂಬರ್ 23ಕ್ಕೆ ಮರುಿ ಪರೀಕ್ಷೆ ನಡೆಸುವುದಾಗಿ ಪ್ರಕಟಿಸಿತ್ತು. ಆದರೆ ಹಲವು ಅಭ್ಯರ್ಥಿಗಳು ಮತ್ತು ಪ್ರತಿಪಕ್ಷ ಬಿಜೆಪಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸಿದ್ದವು.
ಇಂದಿನಿಂದ ಬೆಳಗಾಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಬೆಳಗಾವಿಯ ಸುವರ್ಣಸೌಧದಲ್ಲಿ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ಪರೀಕ್ಷೆ ಮುಂದೂಡಿರುವುದಾಗಿ ಘೋಷಿಸಿದರು. ಮರು ಪರೀಕ್ಷೆಯನ್ನು ಮುಂದೂಡುವಂತೆ ಆಡಳಿತ ಮತ್ತು ವಿಪಕ್ಷಗಳ ಸದಸ್ಯರು ಆಗ್ರಹಿಸಿದ ಹಿನ್ನೆಲೆಯಲ್ಲಿ ಪಿಎಸ್ ಐ ನೇಮಕಾತಿ ಮರು ಪರೀಕ್ಷೆಯನ್ನು ಡಿ.23ರ ಬದಲು ಜ. 23ಕ್ಕೆ ನಡೆಸುವುದಾಗಿ ಪರಮೇಶ್ವರ್ ತಿಳಿಸಿದ್ದಾರೆ.
ಪೊಲೀಸ್ ಇಲಾಖೆ ಈ ಹಿಂದೆ ನಡೆಸಿದ್ದ ಪರೀಕ್ಷೆಗೆ ಅರ್ಹತೆ ಪಡೆದ ಎಲ್ಲರಿಗೂ ಮರು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ ನಡೆಯಲಿದೆ.
2021ರ ಜನವರಿ 21ರಂದು ಪೊಲೀಸ್ ಇಲಾಖೆಯು 545 PSI ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿತ್ತು. 2021ರ ಅಕ್ಟೋಬರ್ 31ರಂದು ಲಿಖಿತ ಪರೀಕ್ಷೆ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಬಳಿಕ ಪರೀಕ್ಷೆ ವಿವಾದದ ಸುಳಿಯಲ್ಲಿ ಸಿಲುಕಿತ್ತು.
ಹಗರಣಕ್ಕೆ ಸಂಬಂಧಿಸಿದಂತೆ ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಮೃತ್ ಪಾಲ್ ಮತ್ತು ಪೊಲೀಸ್ ಉಪ ಅಧೀಕ್ಷಕರು, ಇನ್‌ಸ್ಪೆಕ್ಟರ್, ಸಬ್ ಇನ್‌ಸ್ಪೆಕ್ಟರ್, ಸಹಾಯಕ ಸಬ್ ಇನ್‌ಸ್ಪೆಕ್ಟರ್ ಮತ್ತು ಕಾನ್‌ಸ್ಟೆಬಲ್‌ಗಳ ಶ್ರೇಣಿಯ ಕೆಲವು ಹಿರಿಯ ಪೊಲೀಸ್ ಅಧಿಕಾರಿಗಳು ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು. ಇನ್ನು ಅಂದಿನ ಬಿಜೆಪಿ ಸರ್ಕಾರ ಪರೀಕ್ಷೆಯನ್ನು ರದ್ದುಪಡಿಸಿ ಮತ್ತೆ ನಡೆಸಲು ನಿರ್ಧರಿಸಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


