ಕೆಎಸ್‌ಆರ್‌ಟಿಸಿ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನ ಪ್ರಕರಣ; ಗೃಹ ಇಲಾಖೆಯಿಂದ ತನಿಖೆ: ಡಾ. ಜಿ ಪರಮೇಶ್ವರ್
ಕೆಎಸ್‌ಆರ್‌ಟಿಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭರವಸೆ ನೀಡಿದರು.

ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ ಚಾಲಕ ಜಗದೀಶ್ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ಗೃಹ ಇಲಾಖೆ ಮೂಲಕ ತನಿಖೆ ನಡೆಸುತ್ತೇವೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಭರವಸೆ ನೀಡಿದರು.
16ನೇ ವಿಧಾನಸಭೆಯ ನಾಲ್ಕನೇ ದಿನದ ಕಲಾಪದಲ್ಲಿ ಇಡೀ ದಿನದ ಚರ್ಚೆ ಬಹುತೇಕವಾಗಿ ಸಾರಿಗೆ ಇಲಾಖೆ ನೌಕರನ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಕುರಿತಂತೆಯೇ ಹೆಚ್ಚು ಚರ್ಚೆಗಳು ನಡೆದವು. ಈ ವೇಳೆ ಪ್ರತಿಪಕ್ಷ ಮತ್ತು ಆಡಳಿತ ಪಕ್ಷದ ಸದಸ್ಯರ ನಡುವೆ ಜಟಾಪಟಿಗೂ ಸದನ ಸಾಕ್ಷಿಯಾಯಿತು. ಎರಡು ಬಾರಿ ಸಭಾಧ್ಯಕ್ಷರು ಈ ವಿಚಾರದಲ್ಲಿ ಸದನ ಮುಂದೂಡಿದ್ದು ನಡೆಯಿತು.
ಮಾಜಿ ಸಿಎಂ ಕುಮಾರಸ್ವಾಮಿ ಅವರು ಸಾರಿಗೆ ಇಲಾಖೆ ನೌಕರ ಆತ್ಮಹತ್ಯೆಗೆ ಪ್ರಯತ್ನಿಸಿರುವ ಪ್ರಕರಣ ಬಗ್ಗೆ ತನಿಖೆಯಾಗಿ ಸತ್ಯ ಹೊರಬರಬೇಕೆಂಬುದಷ್ಟೇ ನಮ್ಮ ಆಗ್ರಹ ಎಂದು ಸದನದ ಮುಂದೆ ಬೇಡಿಕೆ ಇಟ್ಟರು.
ಇದಕ್ಕೆ ಪ್ರತಿಕ್ರಿಯಿಸಿದ ಪರಮೇಶ್ವರ್ ಅವರು, ಕುಮಾರಸ್ವಾಮಿ ಅನುಭವಸ್ಥರು. ಚೆಲುವರಾಯಸ್ವಾಮಿ ಜೊತೆ ಕೆಲಸ ಮಾಡಿದ್ದರು. ಚರ್ಚೆ ಗಮನಿಸಿದಾಗ ಇತಿ ಮಿತಿ ಇರಬೇಕು ಆಗ ಸದನಕ್ಕೆ ಗೌರವ ಬರಲಿದೆ" ಎಂದರು. ಆದರೆ, ಇಂದು ಎರಡು ಕಡೆಯಿಂದ ಸ್ಬಲ್ಪ ಅತಿಯಾಯಿತು ಅನ್ನಿಸಿದೆ. ಇದು ಮರುಕಳಿಸಬಾರದು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಂದ ತನಿಖೆ ನಡೆಸುತ್ತೇವೆ. ಕೆಎಸ್‌ಆರ್‌ಟಿಸಿ ಇಲಾಖೆ ಹಿರಿಯ ಅಧಿಕಾರಿಗಳನ್ನು ಒಳಗೊಂಡು ತನಿಖೆ ನಡೆಸಿ ವರದಿ ತರಿಸುತ್ತೇವೆಂದು ಹೇಳಿದರು.
ಪೊಲೀಸ್ ಅಧಿಕಾರಿಗಳಿಂದ ತನಿಖೆಗೆ ಸರ್ಕಾರ ನಿರ್ಧಾರ ಮಾಡಿದ ಹಿನ್ನಲೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ಧರಣಿ ವಾಪಸ್ ಪಡೆದುಕೊಂಡರು.
ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕನ ಕುಟುಂಬಕ್ಕೆ ಪರಿಹಾರ ಹಾಗೂ ರಕ್ಷಣೆ ಕೊಡಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


