ವಿದ್ಯುತ್ ಕಳ್ಳತನ: ಕಾಂಗ್ರೆಸ್ ಆರೋಪಕ್ಕೆ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ
ದೀಪಾವಳಿ ಹಬ್ಬಕ್ಕೆ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿದ ಕುರಿತು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಮನೆಗೆ ದೀಪಾಲಂಕಾರ ಮಾಡಲು ವಿದ್ಯುತ್ ಕಂಬದಿಂದ ವಿದ್ಯುತ್ ಕಳ್ಳತನ ಮಾಡಿದ ಕುರಿತು ಕಾಂಗ್ರೆಸ್ ಮಾಡಿರುವ ಆರೋಪಕ್ಕೆ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ್ದಾರೆ.
ಅತ್ತ ಕಾಂಗ್ರೆಸ್ ಟ್ವೀಟ್ ಬೆನ್ನಲ್ಲೇ ಇತ್ತ ಆ ಬಗ್ಗೆ ಸ್ಪಷ್ಟನೆ ನೀಡಿ ಟ್ವೀಟ್ ಮಾಡಿರುವ ಕುಮಾರಸ್ವಾಮಿ, 'ದೀಪಾವಳಿ ಹಬ್ಬಕ್ಕೆ ನನ್ನ ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಲು ಖಾಸಗಿ ಡೆಕೋರೇಟರ್ ಒಬ್ಬರಿಗೆ ಹೇಳಲಾಗಿತ್ತು. ಅವರು ಮನೆಗೆ ವಿದ್ಯುತ್ ದೀಪಗಳ ಅಲಂಕಾರ ಮಾಡಿದ ಮೇಲೆ ಪಕ್ಕದಲ್ಲಿಯೇ ಇದ್ದ ಕಂಬದಿಂದ ವಿದ್ಯುತ್ ಸಂಪರ್ಕ ಪಡೆದು ಪರೀಕ್ಷೆ ಮಾಡಿದ್ದಾರೆ. ಆಗ ನಾನು ಬಿಡದಿಯ ತೋಟದಲ್ಲಿದ್ದೆ. ನಿನ್ನೆ ರಾತ್ರಿ ಮನೆಗೆ ವಾಪಸ್ ಬಂದಾಗ ಈ ವಿಷಯ ನನ್ನ ಗಮನಕ್ಕೆ ಬಂತು. ತಕ್ಷಣ ಅದನ್ನು ತೆಗೆಸಿ ಮನೆಯ ಮೀಟರ್ ಬೋರ್ಡ್ ನಿಂದಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮಾಡಿದ್ದೇನೆ. ಇದು ವಾಸ್ತವ ಸ್ಥಿತಿ. ಇದರಲ್ಲಿ ಮುಚ್ಚುಮರೆ ಏನೂ ಇಲ್ಲ. ಈ ಅಚಾತುರ್ಯಕ್ಕೆ ನನ್ನ ವಿಷಾದವಿದೆ. ಬೆಸ್ಕಾಂ ಅಧಿಕಾರಿಗಳು ಬಂದು ಪರೀಕ್ಷೆ ಮಾಡಿ ನೋಟಿಸ್ ನೀಡಲಿ. ದಂಡ ಕಟ್ಟುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.
ಅಂತೆಯೇ ಇದೇ ವೇಳೆ ಕಾಂಗ್ರೆಸ್ ಬಗ್ಗೆ ಕಿಡಿಕಾರಿರುವ ಎಚ್ ಡಿ ಕುಮಾರಸ್ವಾಮಿ, ಇದನ್ನೇ ಕಾಂಗ್ರೆಸ್ ದೊಡ್ಡದು ಮಾಡಿ ಪ್ರಚಾರ ಗಿಟ್ಟಿಸುವ ಕೆಲಸ ಮಾಡುತ್ತಿದೆ. ಆ ಪಕ್ಷದ ಕ್ಷುಲ್ಲಕ ಮನಃಸ್ಥಿತಿಯ ಬಗ್ಗೆ ನನಗೆ ಮರುಕ ಇದೆ. ನಾನೇನು ರಾಜ್ಯದ ಆಸ್ತಿ ಕಬಳಿಸಿಲ್ಲ. ಕಂಡವರ ಭೂಮಿಗೆ ಬೇಲಿ ಹಾಕಿಲ್ಲ. ಇನ್ನೊಬ್ಬರ ರಕ್ತ ಕುಡಿದು ಧನದಾಹ ತೀರಿಸಿಕೊಂಡಿಲ್ಲ. ಕುಮಾರಸ್ವಾಮಿ ವಿದ್ಯುತ್ ಕಳ್ಳತನ ಮಾಡಿದ್ದಾರೆ, ಬೆಸ್ಕಾಂ ಕ್ರಮ ಕೈಗೊಳ್ಳಲಿ ಎಂದು ಉಪ ಮುಖ್ಯಮಂತ್ರಿಗಳು ಹೇಳಿದ್ದಾರೆ. ನಾನು ಮನೆಯಲ್ಲೇ ಇದ್ದೇನೆ. ಬೆಸ್ಕಾಂ ಅಧಿಕಾರಿಗಳು ಬರಲಿ. ಅವರ ಯಾವುದೇ ಕ್ರಮಕ್ಕೆ ನಾನು ಸಿದ್ಧನಿದ್ದೇನೆ ಎಂದು ಟ್ವೀಟ್ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


