ವಯನಾಡು ಗುಡ್ಡ ಕುಸಿತ ಎಫೆಕ್ಟ್: ಎಚ್ಚೆತ್ತ ಸರ್ಕಾರ, ಅನಧಿಕೃತ ಹೋಮ್ ಸ್ಟೇ, ರೆಸಾರ್ಟ್ ತೆರವುಗೊಳಿಸುವಂತೆ ಸೂಚನೆ
ವಯನಾಡು ಗುಡ್ಡ ಕುಸಿತ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶ್ಚಿಮ ಘಟ್ಟದಲ್ಲಿನ ಎಲ್ಲಾ ಅನಧಿಕೃತ ಹೋಮ್ ಸ್ಟೇ ಹಾಗೂ ರೆಸಾರ್ಟ್‌ಗಳ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.

ಬೆಂಗಳೂರು: ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ದೇಶದ ಹಲವು ಭಾಗಗಳು ನಲುಗಿ ಹೋಗಿವೆ. ಅಲ್ಲಲ್ಲಿ ಪ್ರವಾಹ, ಗುಡ್ಡ ಕುಸಿತದಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ನೂರಾರು ಜೀವಗಳು ಬಲಿಯಾಗಿವೆ. ಅದರಲ್ಲೂ ವಯನಾಡು ದುರಂತವಂತೂ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ.
ವಯನಾಡು ಗುಡ್ಡ ಕುಸಿತ ದುರ್ಘಟನೆ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು, ಪಶ್ಚಿಮ ಘಟ್ಟದಲ್ಲಿನ ಎಲ್ಲಾ ಅನಧಿಕೃತ ಹೋಮ್ ಸ್ಟೇ ಹಾಗೂ ರೆಸಾರ್ಟ್‌ಗಳ ತೆರವುಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಈ ಕುರಿತು ಅರಣ್ಯ ಸಚಿವ ಈಶ್ವರ್ ಖಂಡ್ರಯವರು ಸುತ್ತೋಲೆ ಹೊರಡಿಸಿದ್ದಾರೆ. ರಾಜ್ಯದ ಶಿರೂರು ಬಳಿ ಸಂಭವಿಸಿದ ಗುಡ್ಡ ಕುಸಿತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ನೆರೆ ರಾಜ್ಯ ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಗುಡ್ಡ ಕುಸಿತದಲ್ಲಿ 250 ಮುಗ್ಧ ಜನರು ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ಕಣ್ಮರೆಯಾಗಿರುವುದು ಅತ್ಯಂತ ನೋವಿನ ಸಂಗತಿ. ಈ ದುರಂತಗಳು ನಮಗೂ ಎಚ್ಚರಿಕೆಯ ಗಂಟೆಯಾಗಿದೆ.
ಸ್ವಾಭಾವಿಕ, ಪ್ರಕೃತಿ ದತ್ತವಾದ ಪಶ್ಚಿಮ ಘಟ್ಟದ ಗುಡ್ಡಗಳು ಮತ್ತು ಶೋಲಾ ಅರಣ್ಯಗಳ ತಲೆ ಕಡಿದು ಕಾಫಿ ತೋಟ, ಮನೆ, ಹೋಂಸ್ಟೇ, ರೆಸಾರ್ಟ್ ಮಾಡುತ್ತಿರುವುದರಿಂದ ಹಾಗೂ ಬೇರಿನಿಂದ ಗಟ್ಟಿಯಾಗಿ ಮಣ್ಣು ಹಿಡಿದಿಡುವ ಬೃಹತ್ ಮರಗಳ ಕಡಿತಲೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸಿ ನಿರ್ಮಿಸುವ ರಸ್ತೆಗಳಿಂದ ಇಂತಹ ದುರಂತ ಮರುಕಳಿಸುತ್ತಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ಗಿರಿ ಮತ್ತು ಘಟ್ಟ ಪ್ರದೇಶದಲ್ಲಿ ವಿಪರೀತವಾಗಿ ವಾಹನಗಳ ಸಂಚಾರದಿಂದಲೂ ಅಪಾಯ ಎದುರಾಗುತ್ತಿದೆ. ವಾರಾಂತ್ಯದಲ್ಲಿ ಪ್ರವಾಸ, ಚಾರಣದ ಹೆಸರಲ್ಲಿ ಗಿರಿ ಮತ್ತು ಕಾನನ ಪ್ರದೇಶಕ್ಕೆ ಸಾವಿರಾರು ಸಂಖ್ಯೆಯಲ್ಲಿ ಜನರು ಬರುವುದೂ ಇಂತಹ ದುರಂತಗಳಿಗೆ ಪೂರಕವಾಗಿದೆ.
ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಮೈಸೂರು, ಚಾಮರಾಜಗರ, ಬೆಳಗಾವಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಹಾಸನ ಸೇರಿದಂತೆ ರಾಜ್ಯದ ಪಶ್ಚಿಮಘಟ್ಟದಲ್ಲಿ 2015ರಿಂದೀಚೆಗೆ ಪಶ್ಚಿಮ ಘಟ್ಟದ ಎಲ್ಲ ಗಿರಿ ಪ್ರದೇಶಗಳಲ್ಲಿ ಅನಧಿಕೃತವಾಗಿ ಮತ್ತು ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಲಾಗಿರುವ ಬಡಾವಣೆ, ತೋಟ, ಹೋಂ ಸ್ಟೇ ಮತ್ತು ರೆಸಾರ್ಟ್‌ಗಳ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಹಾಗೂ 1 ತಿಂಗಳೊಳಗೆ ಕೈಗೊಂಡ ಕ್ರಮದ ವಿವರದೊಂದಿಗೆ ಕಡತದಲ್ಲಿ ವರದಿ ಸಲ್ಲಿಸುವಂತೆ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದಾರೆ.
ಸುತ್ತೋಲೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿರುವ ಸಚಿವರು, ರಾಜ್ಯದ ಪಶ್ಚಿಮ ಘಟ್ಟಗಳಲ್ಲಿ 2015ರ ನಂತರ ಅರಣ್ಯ ಒತ್ತುವರಿ ಮಾಡಿಕೊಂಡು ಅನಧಿಕೃತವಾಗಿ ನಿರ್ಮಿಸಿರುವ ಹೋಮ್ ಸ್ಟೇ , ರೆಸಾರ್ಟ್ ತೆರವಿಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಕೃತಿ ವಿಕೋಪದಿಂದ ಆಗುತ್ತಿರುವ ಅನಾಹುತಗಳನ್ನು ನೋಡುತ್ತಿದ್ದೇವೆ. ಕೇರಳದಲ್ಲಿ ಆದ ಘಟನೆಯಿಂದ ನಾಲ್ಕೈದು ಹಳ್ಳಿ ನಾಪತ್ತೆಯಾಗಿ ನೂರಾರು ಜನರು ಸಾವಿಗೀಡಾಗಿದ್ದಾರೆ. ವಿಶೇಷವಾಗಿ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಹೋಂ ಸ್ಟೇ, ರೆಸಾರ್ಟ್‌ಗಳಿಗೆ ರಸ್ತೆ ಮಾಡುತ್ತಾರೆ, ಅವೈಜ್ಞಾನಿಕವಾಗಿ ಗುಡ್ಡ ಕತ್ತರಿಸ್ತಾರೆ. ಇವುಗಳಿಂದ ಅನಾಹುತ ಆಗುತ್ತದೆ. ಮೊದಲು ಕೃಷಿ ಚಟುವಟಿಕೆಗಳನ್ನು ಶುರುಮಾಡಿ ನಂತರ ರೆಸಾರ್ಟ್ ಮಾಡುತ್ತಾರೆ. ಹೀಗಾಗಿ ಅನಧಿಕೃತ ಹೋಂ ಸ್ಟೇ ವಿರುದ್ಧ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



