Muda scam: ಸಿಎಂ ವಿರುದ್ಧ ಪ್ರಾಸಿಕ್ಯೂಷನ್'ಗೆ ಅನುಮತಿಸಿದರೆ ಕಾನೂನು ಹೋರಾಟ- ಗೃಹ ಸಚಿವ ಪರಮೇಶ್ವರ್
ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ.

ಬೆಂಗಳೂರು: ಮುಡಾ ಪ್ರಕರಣವನ್ನು ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಅನುಮತಿ ನೀಡಿದ್ದೇ ಆದರೆ ಕಾನೂನು ಹೋರಾಟ ನಡೆಸುತ್ತೇವೆಂದು ಗೃಹ ಸಚಿವ ಪರಮೇಶ್ವರ್ ಅವರು ಶನಿವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡುವುದಿಲ್ಲ ಎಂಬ ವಿಶ್ವಾಸವಿದೆ. ಒಂದು ವೇಳೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ, ಕಾನೂನು ಹೋರಾಟ ನಡೆಸುತ್ತೇವೆ. ಕಾನೂನು ಹೋರಾಟ ಪ್ರಾರಂಭವಾದ ಬಳಿಕ ಮುಂದಿನ ಬೆಳವಣಿಗೆ ಏನೆಂಬುದನ್ನು ಗಮನಿಸಿ ರಾಷ್ಟ್ರಪತಿಯವರನ್ನು ಭೇಟಿ ಮಾಡಲು ನಿರ್ಧರಿಸಲಾಗುವುದು ಎಂದು ಹೇಳಿದರು.
ಹತ್ತಾರು ಪ್ರಕರಣಗಳು ರಾಜ್ಯಪಾಲರ ಕಚೇರಿಯಲ್ಲಿ ಬಾಕಿ ಉಳಿದಿವೆ. ಯಾವುದಕ್ಕೂ ಕೂಡ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಮುಂದಾಗಿಲ್ಲ. ಮೂಡಾ ವಿಚಾರದಲ್ಲಿ ತುರಾತುರಿಯಲ್ಲಿ ನೋಟಿಸ್ ನೀಡಿದ್ದಾರೆ. ಜುಲೈ 26ರಂದು ರಾಜ್ಯಪಾಲರಿಗೆ ಟಿ.ಜೆ.ಅಬ್ರಹಾಂ ಮನವಿ ಕೊಡುತ್ತಾರೆ. ಅದೇ ದಿನ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆಯುತ್ತಾರೆ. ಮುಖ್ಯ ಕಾರ್ಯದರ್ಶಿಯವರು ಹೋಗಿ ಸ್ಪಷ್ಟನೆ ನೀಡಿ ಬಂದಿದ್ದಾರೆ. ಅದೇ ದಿನ ಸಂಜೆ ಸಿಎಂ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದಿನ ಉದ್ದೇಶ ಏನೆಂಬುದನ್ನು ರಾಜ್ಯಪಾಲರು ಹೇಳಬೇಕಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕೂ ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ಇದರ ಹಿಂದೆ ಷಡ್ಯಂತ್ರ ಇದೆ. ರಾಜ್ಯಪಾಲರ ಮುಂದಿನ ನಡೆ ಏನು ಎಂಬುದನ್ನು ಕಾದು ನೋಡುತ್ತೇವೆ. ಬಿಜೆಪಿ ಕಾಲದಲ್ಲಿ ಸಾಕಷ್ಟು ಹಗರಣಗಳಾಗಿವೆ. ತನಿಖೆಗೆ ಆದೇಶ ಮಾಡಿದ್ದೇವೆ. ವರದಿಯನ್ನು ಆಧರಿಸಿ ಮುಂದಿನ ಕ್ರಮದ ಬಗ್ಗೆ ಸಂಪುಟದಲ್ಲಿ ನಿರ್ಧರಿಸುತ್ತೇವೆ ಎಂದು ತಿಳಿಸಿದರು.
ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಪ್ರಕರಣದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕೋರ್ಟ್ ನೀಡಿರುವ ತಡೆಯಾಜ್ಞೆಯನ್ನು ತೆರವು ಮಾಡಿಸಲು ಅಡ್ವೋಕೇಟ್ ಜನರಲ್‌ಗೆ ತಿಳಿಸಲಾಗಿದೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



