ತುಂಗಭದ್ರಾ ಡ್ಯಾಂ ಗೇಟ್ ಮುರಿದ ವಿಚಾರದಲ್ಲಿ ರಾಜಕೀಯ ಮಾಡುವುದಿಲ್ಲ, ಯಾರನ್ನು ದೂಷಿಸುವುದೂ ಇಲ್ಲ, ರೈತರ ಹಿತ ಮುಖ್ಯ: ಸಿಎಂ ಸಿದ್ದರಾಮಯ್ಯ
ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.

ಕೊಪ್ಪಳ: ತುಂಗಭದ್ರಾ ಜಲಾಶಯದ ನಿರ್ವಹಣೆಯ ಜವಾಬ್ದಾರಿ ತುಂಗಭದ್ರಾ ಮಂಡಳಿಗೆ ಸೇರಿರುತ್ತದೆ. ಆದರೆ, ಈ ವಿಷಯದಲ್ಲಿ ನಾನು ಯಾರನ್ನೂ ದೂಷಿಸುವುದಿಲ್ಲ. ಜಲಾಶಯದಲ್ಲಿ 19ನೇ ಕ್ರಸ್ಟ್ ಗೇಟ್ ಕಳಚಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನಾವು ರಾಜಕೀಯ ಮಾಡುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡುವ ಮುನ್ನ ಕೊಪ್ಪಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತುಂಗಭದ್ರಾ ಜಲಾಶಯದ ಬಗ್ಗೆ ಸರ್ಕಾರ ನಿರ್ಲಕ್ಷ್ಯ ವಹಿಸಿದೆ ಎಂದು ಆರೋಪಿಸುತ್ತಾರೆ. ಬಿಜೆಪಿಯವರು ಈ ವಿಷಯದಲ್ಲಿ ರಾಜಕೀಯ ಮಾಡುತ್ತಿದ್ದಾರೆ ಅಷ್ಟೇ. ಅದಕ್ಕೆಲ್ಲ ನಾನು ಉತ್ತರ ಕೋಡೋದಕ್ಕೆ ಹೋಗೋದಿಲ್ಲ. ಈಗ ತುಂಗಭದ್ರಾ 19ನೇ ಗೇಟ್ ತುಂಡಾಗಿದೆ. ಇದರಲ್ಲಿ ರಾಜ್ಯ ಸರಕಾರದ ಹೊಣೆಗೇಡಿತನ ಅಂದ್ರೆ ಏನರ್ಥ? ಇದು ರಾಜಕೀಯ ಮಾಡುವ ವಿಷಯವಲ್ಲ, ನಾವು ಘಟನೆಗೆ ಅವರು ಹೊಣೆ, ಇವರು ಹೊಣೆ ಎಂದು ಆರೋಪ ಮಾಡುತ್ತಾ ಕೂರುವುದಿಲ್ಲ. ನಮಗೆ ರಾಜಕೀಯಕ್ಕಿಂತ ನಾಡಿನ ರೈತರ ಹಿತ ಮುಖ್ಯ ಎಂದರು.
ಇದರ ನೇರ ಹೊಣೆ ಟಿಬಿ ಬೋರ್ಡ್‌ನದ್ದು. ಆದರೂ ಇದರಲ್ಲಿ ನಾನು ಯಾರು ತಪ್ಪು ಮಾಡಿದ್ದಾರೆ ಎಂಬುದನ್ನು ಹೇಳಲು ಹೋಗುವುದಿಲ್ಲ. ಸದ್ಯ ರೈತರ ಹಿತ ಕಾಯುವುದು ಮೊದಲ ಆದ್ಯತೆ. ತುಂಗಭದ್ರಾ ಮಂಡಳಿಯ ನೇತೃತ್ವವನ್ನು ಭಾರತ ಸರ್ಕಾರ ನೇಮಿಸಿದ ಅಧ್ಯಕ್ಷರು ನಿರ್ವಹಿಸುತ್ತಾರೆ. ಆಂಧ್ರ, ಕರ್ನಾಟಕ, ತೆಲಂಗಾಣ ರಾಜ್ಯದ ಸದಸ್ಯರು ಮಂಡಳಿಯಲ್ಲಿರುತ್ತಾರೆ ಎಂದು ಹೇಳಿದರು.
ರೈತರಿಗೆ ತೊಂದರೆಯಾಗದಂತೆ ಕ್ರಮ: ಹವಾಮಾನ ಮುನ್ಸೂಚನೆಯಂತೆ ತುಂಗಭದ್ರಾ ಜಲಾಶಯದಿಂದ ಪೋಲಾಗಿರುವ ನೀರು ಮತ್ತೆ ತುಂಬಿಕೊಳ್ಳಲಿದೆ. ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಗುವುದು ಎಂದರು.
ಜಲಾಶಯದಲ್ಲಿ ಪ್ರಸ್ತುತ 105 ಟಿಎಂಸಿ ನೀರು ತುಂಬಿತ್ತು. ಆದರೆ ತುಂಡಾಗಿರುವ ಗೇಟ್ ದುರಸ್ತಿಗಾಗಿ 50 ರಿಂದ 60 ಟಿಎಂಸಿ ನೀರು ಹೊರಗೆ ಬಿಡಬೇಕಾಗಿದೆ. ಈ ವರ್ಷದ ಅಕ್ಟೋಬರ್ ವರೆಗೆ ಮಳೆಯಾಗಲಿದ್ದು, ಜಲಾಶಯದಲ್ಲಿ ಪುನಃ ನೀರು ತುಂಬುವ ಸಾಧ್ಯತೆಯಿದೆ. ಹವಾಮಾನ ಮುನ್ಸೂಚನೆಯಂತೆ ಆಗಸ್ಟ್ 15 ರ ನಂತರ ಪುನಃ ಮಳೆಬರುವ ನಿರೀಕ್ಷೆಯಿದೆ. ಆದ್ದರಿಂದ ಈಗ ಪೋಲಾಗಿರುವ ನೀರು ಮತ್ತೊಮ್ಮೆ ಜಲಾಶಯದಲ್ಲಿ ತುಂಬಲಿದ್ದು, ರೈತರಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ ಎಂದರು.
ಈ ವೇಳೆ ಮಾತನಾಡಿದ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ನೀರಾವರಿ ಸಲಹಾ ಸಮಿತಿ ಅಧ್ಯಕ್ಷ ಶಿವರಾಜ್ ತಂಗಡಗಿ, ಇಂದು ಸಂಜೆ ಇಲ್ಲವೇ ನಾಳೆ ಬೆಳಗ್ಗೆಯೊಳಗೆ ನೂತನ ಗೇಟ್ ತಯಾರಾಗಲಿದೆ. ಶೀಘ್ರವೇ ಕಾಮಗಾರಿ ಆರಂಭಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


