ರಾಜ್ಯ

MUDA case: ರಾಜ್ಯಪಾಲರ ನಿರ್ಧಾರದತ್ತ ಕಾಂಗ್ರೆಸ್ ಚಿತ್ತ

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾರ್ಯಕರ್ತ ಟಿಜೆ ಅಬ್ರಹಾಂ ಅವರು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

MUDA case: ರಾಜ್ಯಪಾಲರ ನಿರ್ಧಾರದತ್ತ ಕಾಂಗ್ರೆಸ್ ಚಿತ್ತ
ಡಾ ಜಿ ಪರಮೇಶ್ವರ್
Published On :

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಅನುಮತಿ ಕೋರಿ ಸಲ್ಲಿಸಿರುವ ಅರ್ಜಿಯ ಕುರಿತು ರಾಜ್ಯಪಾಲರ ಮುಂದಿನ ನಡೆಗಾಗಿ ಕಾಯುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಮಂಗಳವಾರ ಹೇಳಿದರು,

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ವಿರುದ್ಧ ಕಾನೂನು ಕ್ರಮ ಜರುಗಿಸಲು ಕಾರ್ಯಕರ್ತ ಟಿಜೆ ಅಬ್ರಹಾಂ ಅವರುಸ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಕೇಂದ್ರ ಸರ್ಕಾರ ರಾಜ್ಯಪಾಲರನ್ನು ದುರುಪಯೋಗಪಡಿಸಿಕೊಂಡು ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ. ಇದಕ್ಕೆ ಪ್ರತಿಯಾಗಿ ಸಚಿವ ಸಂಪುಟ ಸಭೆ ಸಲಹೆ ನೀಡುವ ನಿರ್ಧಾರ ತೆಗೆದುಕೊಂಡು ರಾಜ್ಯಪಾಲರಿಗೆ ರವಾನಿಸಲಾಗಿದೆ, ನೋಟಿಸ್ ಹಿಂಪಡೆಯುವಂತೆ ರಾಜ್ಯಪಾಲರಿಗೆ ಸಚಿವ ಸಂಪುಟ ಸಲಹೆ ನೀಡಿದೆ. ಇದು ತಪ್ಪು (ನೋಟಿಸ್ ಜಾರಿ ಮಾಡುವುದು) ಎಂದು ಹೇಳಿದ್ದೇವೆ. ಅರ್ಜಿಯನ್ನು ತಿರಸ್ಕರಿಸುವಂತೆ ಸಲಹೆ ನೀಡಿದ್ದೇವೆ. ರಾಜ್ಯಪಾಲರು ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ, ಅವರ ನಿರ್ಧಾರ ಕಾದು ನೋಡುತ್ತಿದ್ದೇವೆಂದು ಹೇಳಿದರು.

ಇದೇ ವೇಳೆ ಚಾಮುಂಡಿ ದೇವಸ್ಥಾನವನ್ನು ತಮಗೆ ಬಿಟ್ಟುಕೊಡಬೇಕು ಎಂದು ರಾಜಮನೆತನದ ಪ್ರಮೋದಾ ದೇವಿಯವರು ನೀಡಿರುವ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಪೊಲೀಸ್ ದೃಷ್ಟಿಯಿಂದ ನನಗೆ ಯಾವುದೇ ಮಾಹಿತಿ ಇಲ್ಲ. ಅವರ ಹೇಳಿಕೆಯನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಸಂದರ್ಭ ಬಂದಾಗ ಸರ್ಕಾರ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಚಾಮುಂಡಿ ದೇವಸ್ಥಾನದ ಅಭಿವೃದ್ಧಿ ಪ್ರಾಧಿಕಾರ ಮಾಡಲು ನಿರ್ಧರಿಸಿದ್ದು ಸಮಗ್ರ ವ್ಯವಸ್ಥೆಯ ಸುಧಾರಣೆಗಾಗಿ. ಸವದತ್ತಿ ಹಾಗೂ ಉಳಿದ ಬಹಳಷ್ಟು ದೇವಸ್ಥಾನಗಳಲ್ಲಿ ಸಾಕಷ್ಟು ಹಣ ಸಂಗ್ರಹವಾಗುತ್ತಿದೆ, ಹೆಚ್ಚು ಜನ ಬರುತ್ತಾರೆ, ಭಕ್ತರಿಗೆ ಸೂಕ್ತ ಸೌಲಭ್ಯ ಒದಗಿಸಲು ಪ್ರಾಧಿಕಾರಗಳನ್ನು ರಚಿಸಿ, ಸ್ಥಳೀಯ ಆಡಳಿತಕ್ಕೆ ಜವಾಬ್ದಾರಿ ನೀಡಲಾಗುತ್ತದೆ. ಅದೇ ರೀತಿ ಚಾಮುಂಡಿ ಬೆಟ್ಟಕ್ಕೂ ಕೂಡ ಪ್ರಾಧಿಕಾರ ಮಾಡಲಾಗಿತ್ತು. ಈಗ ಮೈಸೂರು ರಾಜವಂಶಸ್ಥರು ಪ್ರಾಧಿಕಾರಕ್ಕೆ ವಿರೋಧ ವ್ಯಕ್ತಪಡಿಸಿ ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತಂದಿದ್ದಾರೆ ಎಂದು ತಿಳಿಸಿದರು.

ಗಣರಾಜ್ಯೋತ್ಸವ ಹಾಗೂ ಸ್ವಾತಂತ್ರ್ಯ ದಿನಾಚರಣೆ ಸಂದರ್ಭದಲ್ಲಿ ಮುನ್ನೆಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಕೆಲವು ಸೂಚನೆಗಳನ್ನು ನೀಡುತ್ತದೆ. ರಾಜ್ಯಸರ್ಕಾರವೂ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುತ್ತದೆ. ನಿರ್ದಿಷ್ಟ ಎಚ್ಚರಿಕೆಗಳು ಬಂದರೆ ಸೂಕ್ತ ಕ್ರಮ ವಹಿಸಲಾಗುವುದು. ವಿಮಾನನಿಲ್ದಾಣದಲ್ಲಿ ರಾಷ್ಟ್ರೀಯ ಹಬ್ಬಗಳ ಮೊದಲ ಹಾಗೂ ಅನಂತರದ ಎರಡು ದಿನ ತೀವ್ರ ನಿಗಾ ವಹಿಸಲಾಗುವುದು. ಅದೇ ರೀತಿ ಗಣೇಶ ಹಬ್ಬದ ಸಂದರ್ಭದಲ್ಲೂ ಶಾಂತಿ ಪಾಲನೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಳೆದ ವರ್ಷ ಯಾವುದೇ ಅಹಿತಕರ ಘಟನೆ ನಡೆಯದಂತೆ ಯಶಸ್ವಿ ಬಂದೋಬಸ್ತ್ ಆಯೋಜಿಸಲಾಗಿತ್ತು. ಈ ವರ್ಷ ಅದೇ ರೀತಿ ಒಂದಷ್ಟು ಸೂಚನೆಗಳನ್ನು ನೀಡಲಾಗಿದೆ ಎಂದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.