ಮುಡಾ ಹಗರಣ: ಸಿಎಂಗೆ ತಾತ್ಕಾಲಿಕ ರಿಲೀಫ್; ಆ.29ರವರೆಗೆ ವಿಚಾರಣೆ ಮುಂದೂಡುವಂತೆ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ
ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರೆ, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ವಾದ ಮಂಡಿಸಿದರು.

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿರುವುದರ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್ 29ಕ್ಕೆ ಮುಂದೂಡಿದೆ.
ಕರ್ನಾಟಕ ಹೈಕೋರ್ಟ್ ನಲ್ಲಿ ಸಿಎಂ ಪರ ವಕೀಲರು ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ ಪ್ರಕರಣದ ವಿಚಾರಣೆಯನ್ನು ಆಗಸ್ಟ್ 29ಕ್ಕೆ ಮುಂದೂಡಿದೆ. ಇದೇ ವೇಳೆ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸುವಂತೆ ಸಲ್ಲಿಕೆಯಾಗಿರುವ ಅರ್ಜಿಗಳ ಆದೇಶವನ್ನು ಆಗಸ್ಟ್ 29ಕ್ಕೆ ಮುಂದೂಡುವಂತೆ ಜನಪ್ರತಿನಿಧಿಗಳ ಕೋರ್ಟ್ ಗೆ ಹೈಕೋರ್ಟ್ ಸೂಚಿಸಿದ್ದು ಈ ಮೂಲಕ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.
ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ ಮತ್ತು ಟಿಜೆ ಅಬ್ರಹಾಂ ಅವರು ಸಲ್ಲಿಸಿರುವ ದೂರುಗಳ ಆದೇಶ ಆಗಸ್ಟ್ 20 ಮತ್ತು 21ರಂದು ವಿಶೇಷ ನ್ಯಾಯಾಲಯ ನೀಡಲಿದೆ ಎಂದು ಅರ್ಜಿದಾರರ ಪರ ವಕೀಲರು ಸೂಚಿಸಿದ ನಂತರ ಮಧ್ಯಂತರ ಆದೇಶವನ್ನು ನೀಡಲಾಗಿದೆ. ಅಲ್ಲದೆ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ದೂರುದಾರರಾದ ಪ್ರತಿವಾದಿಗಳಿಗೆ ಕಾಲಾವಕಾಶ ನೀಡಿದೆ.
ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ದೂರಿನ ಬೆನ್ನಲ್ಲೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದಾರೆ. ರಾಜ್ಯಪಾಲರ ಶೋಕಾಸ್ ನೋಟಿಸ್‌ಗೆ ಉತ್ತರ ನೀಡಲಾಗಿತ್ತು. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ದೂರುಗಳು ದುರುದ್ದೇಶಪೂರಿತ. ಹೀಗಾಗಿ ಶೋಕಾಸ್ ನೋಟಿಸ್ ಹಿಂಪಡೆಯುವಂತೆ ಕ್ಯಾಬಿನೆಟ್ ಸಲಹೆ ನೀಡಿತ್ತು. ಕ್ಯಾಬಿನೆಟ್ ಸಲಹೆ ಪರಿಗಣಿಸದೇ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಆದೇಶಿಸಿದ್ದಾರೆ. ನೂರು ಪುಟಗಳ ಕ್ಯಾಬಿನೆಟ್ ಸಲಹೆಗೆ ಎರಡು ಪುಟಗಳ ಉತ್ತರ ನೀಡಿದ್ದಾರೆ. ರಾಜ್ಯಪಾಲರು ಒಂದೇ ಒಂದು ಕಾನೂನಿನ ಅಂಶಕ್ಕೆ ಉತ್ತರಿಸಿಲ್ಲ. ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದೇಕೆಂದು ಕಾರಣ ನೀಡಿಲ್ಲ ಎಂದು ವಾದಿಸಿದರು.
ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪರ ವಕೀಲ, ಕೇಂದ್ರ ಸರ್ಕಾರದ ಸಾಲಿಸಿಟರ್ ಜನರಲ್ ಆಗಿರುವ ತುಷಾರ್ ಮೆಹ್ತಾ ಅವರು ರಾಜ್ಯಪಾಲರ ಮುಂದೆ ಅಭಿಯೋಜನಾ ಮಂಜೂರಾತಿ ಕೋರಿರುವ ಯಾವುದೇ ಅರ್ಜಿ ಬಾಕಿ ಉಳಿದಿಲ್ಲ. ಈ ಸಂಬಂಧ ಎಲ್ಲಾ ದಾಖಲೆಗಳು ಹಾಗೂ ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದ ನೋಟಿಂಗ್ ಮತ್ತು ಕಡತಗಳನ್ನು ಸಲ್ಲಿಸಲಾಗುವುದು. ಆರೋಪಿತ ಅಪರಾಧಗಳನ್ನು ತನಿಖೆ ನಡೆಸಲು ಅನುಮತಿಸಲಾಗಿದೆ. ಹೀಗಾಗಿ, ರಾಜ್ಯಪಾಲರ ಆದೇಶಕ್ಕೆ ತಡೆ ನೀಡಬಾರದು ಎಂದು ಕೋರಿದ್ದಾರೆ ಎಂದು ನ್ಯಾಯಾಲಯವು ಆದೇಶದಲ್ಲಿ ದಾಖಲಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



