CSB ರಚನೆ ಕೋರಿ ಪಿಐಎಲ್: ರಾಜ್ಯ ಸರ್ಕಾರಕ್ಕೆ ಹೈ ಕೋರ್ಟ್ ನೋಟಿಸ್
ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಸಿಎಸ್‌ಬಿ ರಚನೆ ಆಗಿದೆ. ಕರ್ನಾಟಕದಲ್ಲಿ 2014ರಲ್ಲಿ ಮಂಡಳಿ ರಚಿಸಿ ನಂತರ ಅದನ್ನು ಅಮಾನತಿನಲ್ಲಿ ಇರಿಸಲಾಗಿದೆ. ನಂತರ ಮಂಡಳಿ ರಚನೆ ಸಂಬಂಧ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ 2021ರಲ್ಲಿ ಆದೇಶ ನೀಡಿದೆ. ಆದಾಗ್ಯೂ, ರಾಜ್ಯದಲ್ಲಿ ಈವರೆಗೆ ನಾಗರಿಕ ಸೇವಾ ಮಂಡಳಿ ರಚನೆ ಆಗಿಲ್ಲ.

ಬೆಂಗಳೂರು: ಭಾರತೀಯ ಆಡಳಿತ ಸೇವೆ ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಒಂದು ನಿರ್ದಿಷ್ಟ ಸ್ಥಳ ಮತ್ತು ಹುದ್ದೆಯಲ್ಲಿ ಕರ್ತವ್ಯ ನಿರ್ವಹಿಸುವ ಕನಿಷ್ಠ ಸೇವಾವಧಿ ನಿಗದಿಪಡಿಸುವ, ಕರ್ತವ್ಯ ನಿರ್ವಹಣೆ ವೇಳೆ ಅವರ ಹಿತಕಾಯುವ ಉದ್ದೇಶ ಹೊಂದಿರುವ ‘ನಾಗರಿಕ ಸೇವಾ ಮಂಡಳಿ’ (ಸಿಎಸ್‌ಬಿ) ರಚನೆ ಮಾಡುವಂತೆ ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ನಾಗರಿಕ ಸೇವಾ ಮಂಡಳಿ ರಚಿಸಬೇಕು ಮತ್ತು ನಾಗರಿಕ ಸೇವಕ ಅಧಿಕಾರಿಗಳ ಕನಿಷ್ಠ ಸೇವಾವಧಿ ನಿಗದಿಪಡಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ರಿಷಬ್ ಟ್ರಾಕ್ರೂ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲೆ ಎಸ್.ಸುಶೀಲಾ ಅವರು, ಈಗಾಗಲೇ ದೇಶದ 20 ರಾಜ್ಯಗಳಲ್ಲಿ ಸಿಎಸ್‌ಬಿ ರಚನೆ ಆಗಿದೆ. ಕರ್ನಾಟಕದಲ್ಲಿ 2014ರಲ್ಲಿ ಮಂಡಳಿ ರಚಿಸಿ ನಂತರ ಅದನ್ನು ಅಮಾನತಿನಲ್ಲಿ ಇರಿಸಲಾಗಿದೆ. ನಂತರ ಮಂಡಳಿ ರಚನೆ ಸಂಬಂಧ ಹೈಕೋರ್ಟ್‌ನ ವಿಭಾಗೀಯ ನ್ಯಾಯಪೀಠ 2021ರಲ್ಲಿ ಆದೇಶ ನೀಡಿದೆ. ಆದಾಗ್ಯೂ, ರಾಜ್ಯದಲ್ಲಿ ಈವರೆಗೆ ನಾಗರಿಕ ಸೇವಾ ಮಂಡಳಿ ರಚನೆ ಆಗಿಲ್ಲ ಎಂಬ ವಿಚಾರವನ್ನು ನ್ಯಾಯಪೀಠದ ಗಮನಕ್ಕೆ ತಂದರು.
ಇದಕ್ಕೆ ಉತ್ತರಿಸಿದ ಸರ್ಕಾರದ ಪರ ವಕೀಲರು, ಅರ್ಜಿದಾರರು ಜುಲೈ 2024ರ 11ರಂದು ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಆದರೆ, ಆತುರಾತುರವಾಗಿ ಮನವಿ ಪರಿಶೀಲನೆಗೂ ಮುನ್ನವೇ ಜುಲೈ 18ರಂದು ಹೈಕೋರ್ಟ್‌ಗೆ ಈ ಅರ್ಜಿ ಸಲ್ಲಿಸಿದ್ದಾರೆ. ಅಂತೆಯೇ, ನ್ಯಾಯಾಲಯದ ಮುಂದೆ ಮಂಡಿಸಿರುವ ವಿವರಗಳನ್ನು ಸರ್ಕಾರಕ್ಕೆ ಸಲ್ಲಿಸಿರುವ ಮನವಿಯಲ್ಲಿ ಅಡಕಗೊಳಿಸಿಲ್ಲ. ಪರಿಷ್ಕೃತ ಮನವಿ ಸಲ್ಲಿಸಿದರೆ, ಅದನ್ನು ಪರಿಶೀಲಿಸಿ ಸರ್ಕಾರ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಈ ವಿಷಯದಲ್ಲಿ ಸರ್ಕಾರದ ಕ್ರಮ ನ್ಯಾಯಾಂಗ ನಿಂದನೆಗೆ ಸಮಾನವಾಗಿದೆ ಎಂದು ಅಸಮಾಧಆನ ವ್ಯಕ್ತಪಡಿಸಿದರು. ಅಲ್ಲದೆ, ಈ ಸಂಬಂಧ ಸರ್ಕಾರದ ನಿಲುವೇನು ಎಂಬುದನ್ನು ವಿವರಿಸಿ ಎಂದು ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



