ರಾಜ್ಯ

ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ​ ಸ್ವಾಮೀಜಿ ಪತ್ರ

ಇಂದು ವಿಚಾರಣೆಗೆ ಹಾಜರಾಗುವ ಬದಲು ಪೊಲೀಸರಿಗೆ ಪತ್ರ ಬರೆದಿರುವ ಸ್ವಾಮೀಜಿ, ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ​ ಸ್ವಾಮೀಜಿ ಪತ್ರ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ
Published On :

ಬೆಂಗಳೂರು: 'ಮುಸ್ಲಿಮರಿಗೆ ಮತದಾನದ ಹಕ್ಕು ನೀಡಬಾರದು ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ಅವರ ವಿರುದ್ಧ ಎಫ್​ಐಆರ್​ ದಾಖಲಾಗಿದ್ದು, ಡಿಸೆಂಬರ್ 2ರಂದು ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಉಪ್ಪಾರಪೇಟೆ ಠಾಣೆ ಪೊಲೀಸರು ನೋಟಿಸ್ ನೀಡಿದ್ದರು.

ಇಂದು ವಿಚಾರಣೆಗೆ ಹಾಜರಾಗುವ ಬದಲು ಪೊಲೀಸರಿಗೆ ಪತ್ರ ಬರೆದಿರುವ ಸ್ವಾಮೀಜಿ, ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

ನಾನು 81 ವರ್ಷದ ವೃದ್ಧ. ಮಾರಕ ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದೇನೆ. ವೈದ್ಯರು ಸುಮಾರು ಹತ್ತು ದಿನಗಳ ಕಾಲ ವಿಶ್ರಾಂತಿ ಪಡೆಯಲು ತಿಳಿಸಿದ್ದಾರೆ. ಆದ ಕಾರಣ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಒಂದು ವೇಳೆ ಗುಣಮುಖನಾದರೆ ಇದೇ ತಿಂಗಳು 18ರಂದು ಮಧ್ಯಾಹ್ನ 3 ಗಂಟೆಗೆ ಹಾಜರಾಗುತ್ತೇನೆ. ಅನಾನುಕೂಲವಾದಲ್ಲಿ ತನಿಖಾಧಿಕಾರಿಗಳೇ ಮಠಕ್ಕೆ ಬಂದು ಹೇಳಿಕೆ ದಾಖಲಿಸಬಹುದು. ಈ ಬಗ್ಗೆ ನಮ್ಮ ಕಡೆಯಿಂದ ಯಾವುದೇ ಅಭ್ಯಂತರವಿಲ್ಲ ಎಂದು ಉಪ್ಪಾರಪೇಟೆ ಪೊಲೀಸ್ ಉಪ‌ ನಿರೀಕ್ಷಕರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.

ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿ ''ಬಾಯಿತಪ್ಪಿನಿಂದಾಗಿ ನೀಡಿದ್ದ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ್ದು, ಸ್ಪಷ್ಟಿಕರಣ ನೀಡಿರುವುದು ಎಲ್ಲಾ ಪತ್ರಿಕಾ ಮಾಧ್ಯಮ ಹಾಗೂ ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿರುತ್ತದೆ.'' ಆದ್ದರಿಂದ ಸಮಾಜದ ಸ್ವಾಸ್ಥ್ಯ ಹಾಗೂ ಶಾಂತಿಯ ದೃಷ್ಟಿಯಿಂದ ಈ ಪ್ರಕರಣವನ್ನು ಬೆಳೆಸದೇ ಇಲ್ಲಿಗೇ ಮುಕ್ತಾಯಗೊಳಿಸಬೇಕೆಂದು ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತೇವೆ ಎಂದು ಸ್ವಾಮೀಜಿ ಮನವಿ ಮಾಡಿದ್ದಾರೆ.

ನವೆಂಬರ್ 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಸ್ವಾಮೀಜಿ, 'ರೈತರ ಜಮೀನು ಉಳಿಸಲು ಎಲ್ಲರೂ ಒಂದಾಗಿ ಹೋರಾಟ ನಡೆಸುವ ತುರ್ತು ಸಂದರ್ಭ ಎದುರಾಗಿದೆ. ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ನಿರಾಕರಿಸುವ ಕಾನೂನು ತರಬೇಕು. ಬೇರೆಯವರ ಭೂಮಿಯನ್ನು ಕಸಿದುಕೊಳ್ಳುವುದು ಧರ್ಮವಲ್ಲ. ಮೊದಲು ವಕ್ಫ್ ಬೋರ್ಡ್ ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಹೇಳಿದ್ದರು.

ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸೈಯ್ಯದ್ ಅಬ್ಬಾಸ್ ಅವರು ನೀಡಿದ ದೂರಿನ ಆಧಾರದ ಮೇಲೆ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಬಿಎನ್​​ಎಸ್ ಸೆಕ್ಷನ್ 299 ರ ಅಡಿಯಲ್ಲಿ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.