ಬಾಣಂತಿಯರ ಸಾವು: ವರದಿ ಆಧಾರದ ಮೇಲೆ ತಪಿತಸ್ಥರ ವಿರುದ್ಧ ಕ್ರಮ- ಸಿಎಂ ಸಿದ್ದರಾಮಯ್ಯ ಭರವಸೆ
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ.

ಚಾಮರಾಜನಗರ: ಬಳ್ಳಾರಿ ಜಿಲ್ಲೆಯಲ್ಲಿ ಬಾಣಂತಿಯರ ಸಾವಿನ ಸಂಖ್ಯೆ 5ಕ್ಕೆ ಹೆಚ್ಚಾಗುತ್ತಿದ್ದಂತೆಯೇ, ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ರಚಿಸಲಾಗಿರುವ ತಜ್ಞರ ಸಮಿತಿ ನೀಡುವ ವರದಿ ಆಧಾರದ ಮೇಲೆ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಭರವಸೆ ನೀಡಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ತಿಂಗಳು ನಾಲ್ವರು ಸಾವನ್ನಪ್ಪಿದ್ದರು. ಬಳ್ಳಾರಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮತ್ತೋರ್ವರು ಗುರುವಾರ ರಾತ್ರಿ ಸಾವನ್ನಪ್ಪಿದ್ದಾರೆ. ಇದರೊಂದಿಗೆ ಅಲ್ಲಿ ಮೃತಪಟ್ಟವರ ಸಂಖ್ಯೆ ಈಗ 5ಕ್ಕೆ ಏರಿಕೆಯಾಗಿದೆ.
ಈ ಕುರಿತ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ, ನಾಲ್ವರು ಬಾಣಂತಿಯರು ಸಾವನ್ನಪ್ಪಿದ್ದಾಗ ಸಭೆ ನಡೆಸಿದ್ದೆ. ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲೂ ಇದರ ಬಗ್ಗೆ ಚರ್ಚಿಸಿದ್ದೇವೆ. ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳು ಇಂದು ಬಳ್ಳಾರಿಗೆ ಭೇಟಿ ನೀಡುತ್ತಿದ್ದಾರೆ ಎಂದು ತಿಳಿಸಿದರು.
ಗುಣಮಟ್ಟವಲ್ಲದ ರಿಂಗರ್ ಲ್ಯಾಕ್ಟೇಟ್ ಸಲ್ಯೂಷನ್ ನಿಂದ ಬಾಣಂತಿಯರು ಸಾವನ್ನಪ್ಪಿರಬಹುದು. ಸರ್ಕಾರ ಈಗಾಗಲೇ ಔಷಧ ನಿಯಂತ್ರಕರನ್ನು ಅಮಾನತು ಮಾಡಿದ್ದು, ಸಲ್ಯೂಷನ್ ಪೂರೈಕೆ ಮಾಡಿದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ. ಇದರ ತನಿಖೆಗಾಗಿ ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ವರದಿ ನೀಡಿದ ಬಳಿಕ ತಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು, ಈಗಾಗಲೇ ಕೆಲ ಕ್ರಮ ತೆಗೆದುಕೊಳ್ಳಲಾಗಿದೆ. ವರದಿ ಆಧಾರದ ಮೇಲೆ ಮತ್ತಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.
ಬಳ್ಳಾರಿಯಲ್ಲಿನ ಇತ್ತೀಚಿನ ಸಾವಿಗೆ ಸಂಬಂಧಿಸಿದಂತೆ ನವೆಂಬರ್ 30 ರಂದು ಉನ್ನತ ಮಟ್ಟದ ಸಭೆ ನಡೆಸಿದ್ದ ಮುಖ್ಯಮಂತ್ರಿ, ಮೃತ ಬಾಣಂತಿಯರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಿಸುವುದರೊಂದಿಗೆ ಸಾವು ಪ್ರಕರಣ ಕುರಿತು ತನಿಖೆಗೆ ಆದೇಶಿಸಿದ್ದರು.
ಈ ಮಧ್ಯೆ ಬಳ್ಳಾರಿಯಲ್ಲಿ ಬಿಜೆಪಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬಾಣಂತಿಯರ ಸಾವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಆರೋಪಿಸಿದ ಮಾಜಿ ಸಚಿವ ಬಿ ಶ್ರೀರಾಮುಲು, ಮೃತರ ಕುಟುಂಬಕ್ಕೆ ಘೋಷಿಸಲಾಗಿರುವ ರೂ. 2 ಲಕ್ಷ ಯಾವುದಕ್ಕೂ ಸಾಕಾಗುವುದಿಲ್ಲ, ಅವರಿಗೆ ತಲಾ ರೂ.1 ಕೋಟಿ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



