ಬೆಳಗಾವಿಯಲ್ಲಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ; ಗಾಂಧೀಜಿ ಪ್ರತಿಮೆ ಅನಾವರಣ, ಪಕ್ಷಾತೀತ ಆಹ್ವಾನಕ್ಕೆ ಸರ್ಕಾರ ನಿರ್ಧಾರ
ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.

ಬೆಂಗಳೂರು: ಡಿಸೆಂಬರ್ 26 ರಂದು ಬೆಳಗಾವಿಯಲ್ಲಿ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಇಲ್ಲಿ ತಮ್ಮ ಸಂಪುಟ ಸಹೋದ್ಯೋಗಿಗಳು ಮತ್ತು ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದರು.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ.ಶಿವಕುಮಾರ್ ಅವರು, ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದ ಬೆಳಗಾವಿ ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ಮಾಡುತ್ತಿದ್ದೇವೆ. ಇದೇ ತಿಂಗಳು 26 ಹಾಗೂ 27ರಂದು ನಡೆಯಲಿರುವ ಐತಿಹಾಸಿಕ ಕಾರ್ಯಕ್ರಮದ ಪೂರ್ವಭಾವಿ ಸಿದ್ಧತೆಗಳ ಕುರಿತು ಮುಖ್ಯಮಂತ್ರಿಗಳು ಇಂದು ಸಭೆ ನಡೆಸಿದ್ದಾರೆ, ಸುವರ್ಣಸೌಧದ ಆವರಣದಲ್ಲಿ ಮಹಾತ್ಮಾ ಗಾಂಧಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪಕ್ಷಾತೀತವಾಗಿ ಎಲ್ಲಾ ಶಾಸಕರಿಗೆ ಆಹ್ವಾನ ನೀಡಲಾಗುವುದು. ಡಿ.26ರಂದು ಮಧ್ಯಾಹ್ನ 3 ಗಂಟೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಡೆಯಲಿದೆ. ಕಾರ್ಯಕಾರಿ ಸಮಿತಿಯ ಎಲ್ಲಾ ಸದಸ್ಯರು, ಎಲ್ಲಾ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರುಗಳು, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಸೇರಿದಂತೆ ಎಲ್ಲಾ ಪದಾಧಿಕಾರಿಗಳು, 150 ಸಂಸದರು ಸಭೆಯಲ್ಲಿ ಭಾಗವಹಿಸುತ್ತಿದ್ದಾರೆಂದು ಹೇಳಿದರು.
ಡಿ.27ರಂದು ಬೆಳಗ್ಗೆ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಬೃಹತ್ ಸಾರ್ವಜನಿಕ ಸಮಾವೇಶ ನಡೆಯಲಿದ್ದು, ಅನೇಕ ರಾಷ್ಟ್ರೀಯ ನಾಯಕರು ಮಾತನಾಡಲಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಕಾರ್ಯಕರ್ತರು, ಮುಖಂಡರು ಸ್ವಇಚ್ಛೆಯಿಂದ ಭಾಗವಹಿಸಲಿದ್ದಾರೆ. ಇದಕ್ಕೂ ಮುನ್ನ ಡಿ.27ರಂದು ಬೆಳಗ್ಗೆ ಸುವರ್ಣಸೌಧದಲ್ಲಿ ಮಹಾತ್ಮಾ ಗಾಂಧೀಜಿ ಅವರ ಪ್ರತಿಮೆ ಅನಾವರಣ ಮಾಡಲಾಗುವುದು. ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಪ್ರತಿಮೆ ಅನಾವರಣ ಮಾಡಲಿದ್ದಾರೆ. ಉಭಯ ಸದನಗಳ ಸ್ಪೀಕರ್ ಹಾಗೂ ಸಭಾಪತಿಗಳು, ವಿರೋಧ ಪಕ್ಷಗಳ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕೇವಲ ಶಾಸಕರು, ಸಂಸದರು ಹಾಗೂ ಅತಿಥಿಗಳಿಗೆ ಮಾತ್ರ ಅವಕಾಶವಿದ್ದು, ಭದ್ರತೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅವಕಾಶವಿಲ್ಲ ಎಂದು ತಿಳಿಸಿದರು.
ಕಾರ್ಯಕಾರಿ ಸಮಿತಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗುವುದೇ ಎಂಬ ಪ್ರಶ್ನೆಗೆ ಉತ್ತರಿಸಿ, ಈ ವಿಚಾರವಾಗಿ ಎಐಸಿಸಿ ತೀರ್ಮಾನ ಮಾಡಲಿದೆ. ಕೆಲವು ಅಜೆಂಡಾಗಳಿವೆ. 1924ರಲ್ಲಿ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧಿವೇಶನದ ಅಧ್ಯಕ್ಷರಾದಾಗ ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗು ಜವಾಹರಲಾಲ್ ನೆಹರೂ ಅವರು ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಆ ಅಧಿವೇಶನದಲ್ಲಿ ಹಲವು ತೀರ್ಮಾನಗಳನ್ನು ಮಾಡಲಾಗಿತ್ತು. ಇಂದಿನ ಕಾಲಘಟ್ಟಕ್ಕೆ ಅನುಗುಣವಾಗಿ ಪಕ್ಷ ಅನೇಕ ತೀರ್ಮಾನಗಳನ್ನು ಮಾಡಲಿದೆ ಎಂದು ಮಾಹಿತಿ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



