ಕಲಬುರಗಿಯಲ್ಲಿ ನಿಮ್ಹಾನ್ಸ್, ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ
ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದೆ.

ಕಲಬುರಗಿ: ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ತಿಳಿಸಿದ್ದಾರೆ.
ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಕಟ್ಟಡದ ಲೋಕಾರ್ಪಣೆ ಮಾಡಿ ಮಾತನಾಡಿದ ಮುಖ್ಯಮಂತ್ರಿ, ಕಲಬುರಗಿಯಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆ ಬೇಗ ತೀರ್ಮಾನ ತೆಗೆದುಕೊಳ್ಳುವಂತೆ ವೈದ್ಯಕೀಯ ಶಿಕ್ಷಣ ಸಚಿವ ಶರಣಪ್ರಕಾಶ್ ಪಾಟೀಲ್ ಅವರಿಗೆ ಸೂಚಿಸಲಾಗುವುದು, ಮೈಸೂರಿಗೂ ನಿಮ್ಹಾನ್ಸ್ ಘಟಕದ ಅಗತ್ಯವಿದ್ದು ಅದನ್ನು ಪೂರೈಸುವ ಕಡೆ ಗಮನ ಹರಿಸಬೇಕು ಎಂದರು.
ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ ಅತ್ಯುನ್ನತ ಆರೋಗ್ಯ ಸೌಕರ್ಯಗಳಿರುವ ಜಯದೇವ ಹೃದ್ರೋಗ ಆಸ್ಪತ್ರೆ ಲೋಕಾರ್ಪಣೆಯಾಗಿದೆ ಬೆಂಗಳೂರು, ಮೈಸೂರಿನಲ್ಲಿರುವ ಜಯದೇವ ಹೃದ್ರೋಗ ಆಸ್ಪತ್ರೆ ಶುಚಿತ್ವ ಮತ್ತು ನಿರ್ವಹಣೆಯಲ್ಲಿ ಉತ್ತಮ ಗುಣಮಟ್ಟ ಕಾಯ್ದುಕೊಂಡಿದೆ. ಕಲಬುರಗಿಯ ಜಯದೇವ ಇವೆರಡೂ ಆಸ್ಪತ್ರೆಗಳಿಗಿಂತ ಇನ್ನೂ ಹೆಚ್ಚಿನ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿರುವ ಜನತೆ ಹೃದ್ರೋಗ ಸಮಸ್ಯೆಗಳಿಗೆ ಈಗ ಬೆಂಗಳೂರಿಗೆ ಬರುವ ಅಗತ್ಯವೇ ಇಲ್ಲ ಎಂದು ತಿಳಿಸಿದರು.
371 ಜೆ ಜಾರಿಯಿಂದ ಈ ಭಾಗದ ಸಹಸ್ರಾರು ವಿದ್ಯಾವಂತರು ಉತ್ತಮ ಹುದ್ದೆಗಳನ್ನು ಪಡೆಯಲು ಸಾಧ್ಯವಾಗಿದೆ. ನಮ್ಮ ಸರ್ಕಾರ ಉತ್ತರ ಕರ್ನಾಟಕ ಸೇರಿದಂತೆ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ನೀಲನಕ್ಷೆ ಸಿದ್ದಪಡಿಸಿಕೊಂಡಿದ್ದೇವೆ. ಇದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು. ಇಲ್ಲಿನ ವಿಶ್ವ ವಿದ್ಯಾಲಯಗಳಲ್ಲಿ ನೂತನ ಹೊಸ ಕೋರ್ಸ್ ಗಳನ್ನು ಆರಂಭಿಸಲಾಗುವುದು, ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಹೇಳಿದರು.
ತೊಗರಿ ಬೆಳೆ ಪ್ಯಾಕೇಜ್ ಬಗ್ಗೆ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಅಜಯ್ ಸಿಂಗ್ ಮತ್ತು ಇಲ್ಲಿನ ಶಾಸಕರು, ಸಚಿವರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ವರದಿ ಕೇಳಿದ್ದೇನೆ. ವರದಿ ಬಂದ ಕೂಡಲೇ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು. ಈಗಾಗಲೇ ಅನುಭವ ಮಂಟಪ ನಿರ್ಮಾಣ ಅರ್ಧ ಮುಗಿದಿದೆ. ಪೂರ್ಣಗೊಳಿಸಲು ಅಗತ್ಯ ಹಣ ನೀಡಲಾಗಿದೆ. ಇನ್ನೂ ಅಗತ್ಯಬಿದ್ದರೆ ಹಣ ನೀಡಲಾಗುವುದು. ಹಣಕ್ಕೆ ಯಾವುದೇ ಸಮಸ್ಯೆ ಇಲ್ಲ ಎಂದು ಮುಖ್ಯಮಂತ್ರಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



