News Headlines 23-12-24 | ಯಾವುದೇ ಕಾರಣಕ್ಕೂ ಸಿಟಿ ರವಿನ ಕ್ಷಮಿಸಲ್ಲ- ಲಕ್ಷ್ಮೀ ಹೆಬ್ಬಾಳ್ಕರ್; ಅಶ್ಲೀಲ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ- ಹೊರಟ್ಟಿ; ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ!

1. ಯಾವುದೇ ಕಾರಣಕ್ಕೂ ಕ್ಷಮಿಸಲ್ಲ: CT Ravi ಅಶ್ಲೀಲ ಪದ ಬಳಕೆ ವಿಡಿಯೋ ಬಹಿರಂಗಪಡಿಸಿದ Laxmi
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜ್ಯ ವಿಧಾನ ಪರಿಷತ್ ನಲ್ಲಿ ಬಿಜೆಪಿ MLC ಸಿಟಿ ರವಿ ತಮ್ಮ ವಿರುದ್ಧ ಬಳಸಿದ್ದಾರೆ ಎನ್ನಲಾದ ಅಶ್ಲೀಲ ಪದಕ್ಕೆ ಸಂಬಂಧಿಸಿದ ವಿಡಿಯೋವನ್ನು ಬಿಡುಗಡೆ ಮಾಡಿದ್ದಾರೆ. ನಂತರ ಮಾತನಾಡಿದ ಹೆಬ್ಬಾಳ್ಕರ್ ಅವರು, ಸಿಟಿ ರವಿ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇನೆ. ಈ ಸಂಬಂಧ ಶೀಘ್ರ ಕ್ರಮಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಆಗ್ರಹಿಸಿದರು. ಯಾವುದೇ ಕಾರಣಕ್ಕೂ ಸಿಟಿ ರವಿಯನ್ನು ಕ್ಷಮಿಸಲ್ಲ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ.
2. ಅಶ್ಲೀಲ ಪದ ಬಳಕೆ ಪ್ರಕರಣ ಮುಗಿದ ಅಧ್ಯಾಯ!
ಬಿಜೆಪಿ ಎಂಎಲ್‌ಸಿ ಸಿಟಿ ರವಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಈ ಪ್ರಕರಣದಲ್ಲಿ ಪೊಲೀಸರ ಹಸ್ತಕ್ಷೇಪ ಒಪ್ಪಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ನಡೆದ ಘಟನೆಯನ್ನು ಕೂಲಂಕಷವಾಗಿ ಚರ್ಚಿಸಲಾಗಿದೆ. ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದ ನಂತರ ಬಿಜೆಪಿ ಎಂಎಲ್‌ಸಿ ಸಿಟಿ ರವಿ ಅವರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಬಂಧಿಸಲಾಗಿದೆ. ಸದ್ಯ, ನಾವು ಎರಡೂ ಕಡೆಯಿಂದ ಯಾವುದೇ ದೂರುಗಳನ್ನು ಸ್ವೀಕರಿಸಿಲ್ಲ. ಈ ಬಗ್ಗೆ ದೂರು ನೀಡಿದರೆ, ನಾವು ಕ್ರಮ ಕೈಗೊಳ್ಳುತ್ತೇವೆ. ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮಕೈಗೊಳ್ಳಲು ಅಧಿಕಾರವಿಲ್ಲ ಎಂದರು. ಘಟನೆಗೆ ಸಂಬಂಧಿಸಿದಂತೆ ನಮ್ಮ ಬಳಿ ವಿಡಿಯೋ ಮತ್ತು ಆಡಿಯೋ ರೆಕಾರ್ಡಿಂಗ್ ಲಭ್ಯವಿದ್ದರೆ ಈ ವಿಷಯವನ್ನು ಪರಿಗಣಿಸಲಾಗುವುದು. ಬೇರೆ ಯಾವುದೇ ಪಕ್ಷವು ವಿಡಿಯೋ ಅಥವಾ ಆಡಿಯೋ ಒದಗಿಸಿದರೆ, ನಾವು ಅದನ್ನು ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸುತ್ತೇವೆ. ಆ ದಿನ ಅಧಿವೇಶನ ಮುಗಿದ ನಂತರ ಯಾವುದೇ ವಿಡಿಯೋ ರೆಕಾರ್ಡಿಂಗ್ ಮಾಡಿಲ್ಲ' ಎಂದು ಹೇಳಿದರು.
3. ಸಿಟಿ ರವಿ ಮೇಲೆ ಹಲ್ಲೆ ಪ್ರಕರಣ: ದೂರು ದಾಖಲು
ಬೆಳಗಾವಿ ಸುವರ್ಣಸೌಧದಲ್ಲಿ ಡಿಸೆಂಬರ್ 19ರಂದು ಬಿಜೆಪಿ ಎಂಎಲ್‌ಸಿ ಸಿಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಟಿ ರವಿಗೆ ಜೀವ ಬೆದರಿಕೆ ಹಾಕಲಾಗಿದ್ದು, ಹತ್ಯೆ ಮಾಡುವ ಉದ್ದೇಶ ಹೊಂದಿದ್ದರು ಎಂದು ಆರೋಪಿಸಿ ಬೆಳಗಾವಿಯ ಹಿರೇಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಿಧಾನ ಪರಿಷತ್ತಿನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಸಿಟಿ ರವಿ ಆಕ್ಷೇಪಾರ್ಹ ಹೇಳಿಕೆ ಬೆನ್ನಲ್ಲೇ ಈ ಘಟನೆ ನಡೆದಿತ್ತು. ಮೊದಲಿಗೆ ಸಿಟಿ ರವಿ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಬಿಜೆಪಿ MLC ಡಿಎಸ್ ಅರುಣ್, ಪ್ರೊ. ಎಸ್‌ವಿ ಸಂಕನೂರ ಅವರು ಗೃಹ ಇಲಾಖೆ ಕಾರ್ಯದರ್ಶಿಗೆ ದೂರು ನೀಡಿದ್ದರು. ಅಂತಿಮವಾಗಿ ಕಿಶೋರ ಬಿಆರ್ ನೀಡಿರುವ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
4. ಸಿಲಿಂಡರ್ ಸ್ಫೋಟ: 9 ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳಿಗೆ ಗಂಭೀರ ಗಾಯ
LPG ಸಿಲಿಂಡರ್ ಸ್ಫೋಟಗೊಂಡ ಪರಿಣಾಮ 9 ಮಂದಿ ಅಯ್ಯಪ್ಪ ಸ್ವಾಮಿ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಸಾಯಿನಗರದ ಅಚ್ಚವ್ವನ ಕಾಲೊನಿಯ ಈಶ್ವರ ದೇವಸ್ಥಾನದಲ್ಲಿ ಈ ಘಟನೆ ನಡೆದಿದೆ. ನಿನ್ನೆ ತಡರಾತ್ರಿ 1.30ರ ವೇಳೆ ಈ ಘಟನೆ ನಡೆದಿದ್ದು, ಗಾಯಗೊಂಡ ಮಾಲಾಧಾರಿಗಳನ್ನು ಕೆಎಂಸಿ-ಆರ್‌ಐಗೆ ದಾಖಲಿಸಲಾಗಿದೆ. ರಾತ್ರಿ ಮಲಗಿದ್ದಾಗ ಮಾಲಾಧಾರಿಯೊಬ್ಬರ ಕಾಲು ಸಿಲಿಂಡರ್‌ಗೆ ತಾಗಿ ಅದು ಉರುಳಿದೆ. ಈ ವೇಳೆ ರೆಗ್ಯೂಲೇಟರ್ ಸಡಿಲಗೊಂಡು ಗ್ಯಾಸ್ ಸೋರಿಕೆಯಾಗಿದೆ. ಇದೇ ವೇಳೆ ದೇವಸ್ಥಾನದಲ್ಲಿ ಹಚ್ಚಿದ್ದ ದೀಪಕ್ಕೆ ಗ್ಯಾಸ್ ತಾಗಿ ಬೆಂಕಿ ಹೊತ್ತುಕೊಂಡು ಸಿಲಿಂಡರ್ ಸ್ಫೋಟವಾಗಿದೆ.
5. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ
ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತಿ ಸೋಮಶೇಖರ್ ಎಂಬುವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಲ್ಲಿ ನಡೆದಿದೆ. ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸ್ವಾಮಿ ಪತ್ನಿ ಪವಿತ್ರಾ ಎರಡು ವರ್ಷಗಳ ಹಿಂದೆ ಗುತ್ತಿಗೆ ಮೇಲೆ ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಅಲ್ಲಿ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿದ್ದ ಮೈಲಾರಪ್ಪ ಎಂಬುವರ ಜೊತೆ ಸಂಬಂಧ ಹೊಂದಿದ್ದರು ಎಂದು ಆರೋಪಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


