ರಾಜ್ಯ

ಬೆಂಗಳೂರು: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ

ನಗರದಲ್ಲಿ ಭಾನುವಾರ ಮಧ್ಯಾಹ್ನದಿಂದ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಬೆಂಗಳೂರು: ಪ್ರತ್ಯೇಕ ರಸ್ತೆ ಅಪಘಾತದಲ್ಲಿ ನಾಲ್ವರು ದುರ್ಮರಣ
ಸಾಂದರ್ಭಿಕ ಚಿತ್ರ
Published On :

ಬೆಂಗಳೂರು: ನಗರದಲ್ಲಿ ಭಾನುವಾರ ಮಧ್ಯಾಹ್ನದಿಂದ ನಡೆದ ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಆಟೋವೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 48 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ.

ಮಾರುತಿ ನಗರದ ಮಹದೇಶ್ವರನಗರದ ನಿವಾಸಿ ಚಂದ್ರಶೇಖರ್  ತನ್ನ 13 ಮತ್ತು 9 ವರ್ಷದ ಮಕ್ಕಳನ್ನು ಕರೆದುಕೊಂಡು ಪೀಣ್ಯ 2ನೇ ಹಂತದಿಂದ ಹೆಗ್ಗನಹಳ್ಳಿ ಮುಖ್ಯರಸ್ತೆ ಕಡೆಗೆ ಹೋಗುತ್ತಿದ್ದಾಗ ಅಪಘಾತ ಸಂಭವಿಸಿದೆ. ರಸ್ತೆಗೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಚಂದ್ರಶೇಖರ್ ಅವರನ್ನು ಕೂಡಲೇ  ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮಕ್ಕಳಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೀಣ್ಯ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೇವನಹಳ್ಳಿ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಅಪಘಾತದಲ್ಲಿ, ಮಹಾರಾಷ್ಟ್ರದ ನಾಂದೇಡ್ ಮೂಲದ ಕೂಲಿ ಕಾರ್ಮಿಕ ನಾಗೇಶ್ (20) ಭಾನುವಾರ ರಾತ್ರಿ 9.15 ರ ಸುಮಾರಿಗೆ ಬಳ್ಳಾರಿ ರಸ್ತೆಯಲ್ಲಿ ತಮ್ಮ ಸ್ನೇಹಿತರೊಂದಿಗೆ ಚಹಾ ಕುಡಿಯಲು ಹೋಗುತ್ತಿದ್ದಾಗ ಬೈಕ್ ಡಿಕ್ಕಿ ಹೊಡೆದಿದೆ. ತೀವ್ರವಾಗಿ ಗಾಯಗೊಂಡ ನಾಗೇಶ್ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು  ಮೃತಪಟ್ಟಿದ್ದಾರೆ.

ಬಾಣಸವಾಡಿ ಟ್ರಾಫಿಕ್ ಪೊಲೀಸ್ ವ್ಯಾಪ್ತಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್ ಮೆಲ್ವಿನ್ ಜೋಶುವಾ (25) ಕಾರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ಸೋಮವಾರ ನಸುಕಿನ 2 ಗಂಟೆ ಸುಮಾರಿಗೆ ಸಿಎಂಆರ್ ರಸ್ತೆಯ ಗೇಟ್‌ಗೆ ಡಿಕ್ಕಿ ಹೊಡೆದ ಕಾರು ಕಾರು ನಿಯಂತ್ರಣ ಕಳೆದುಕೊಂಡಿತ್ತು. ಇದಕ್ಕೂ ಮುನ್ನಾ ಕಾರು ಮತ್ತು ಮರವೊಂದಕ್ಕೆ ಡಿಕ್ಕಿ ಹೊಡೆದಿತ್ತು ಎಂದು  ಪೊಲೀಸರು ತಿಳಿಸಿದ್ದಾರೆ. ತಲೆಗೆ ಗಾಯವಾಗಿದ್ದ ಮೆಲ್ವಿನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅಲ್ಲಿ ಅವರು ಮೃತಪಟ್ಟಿರುವುದಾಗಿ ವರದಿಯಾಗಿದೆ. 

ಮತ್ತೊಂದು ಅಪಘಾತದಲ್ಲಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಬೆಳ್ಳಂದೂರು ನಿವಾಸಿ ಉಮಂಗ್ ಬೋಹ್ರಾ (22) ಸೋಮವಾರ ನಸುಕಿನ ವೇಳೆಯಲ್ಲಿ ಬೈಕ್ ನಿಯಂತ್ರಣ ತಪ್ಪಿ ಬೇಗೂರು-ಎಲೆಕ್ಟ್ರಾನಿಕ್ಸ್ ಸಿಟಿ ರಸ್ತೆಯಲ್ಲಿ ಬಿದ್ದು ಸಾವನ್ನಪ್ಪಿದ್ದಾರೆ. ಈ ಸಂಬಂಧ ಹುಳಿಮಾವು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.