ಶೇ.60ರಷ್ಟು ಕಡ್ಡಾಯ ಕನ್ನಡ ನಾಮಫಲಕ: 49 ಸಾವಿರ ಅಂಗಡಿಗಳಿಗೆ ಬಿಬಿಎಂಪಿ ನೋಟಿಸ್
ಸಿಲಿಕಾನ್ ಸಿಟಿ ಬೆಂಗಳೂರಿನ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿರುವ ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 49 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ವಾಣಿಜ್ಯ ಅಂಗಡಿಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಿರುವ ಬಿಬಿಎಂಪಿ, ನಿಯಮ ಪಾಲಿಸದ ಸುಮಾರು 49 ಸಾವಿರಕ್ಕೂ ಹೆಚ್ಚು ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.
ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಫೆಬ್ರವರಿಯೊಳಗೆ ಸರ್ವೇ ಕಾರ್ಯ ಪೂರ್ಣಗೊಳಿಸಬೇಕು. ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ತಿಳುವಳಿಕೆ ಪತ್ರ ನೀಡಬೇಕು.
ಆಯಾ ವಲಯ ವ್ಯಾಪ್ತಿಯಲ್ಲಿ ಯಾವುದೇ ಒತ್ತಡಕ್ಕೆ ಮಣಿಯದೆ ಕನ್ನಡ ಭಾಷೆಯನ್ನು ಬಳಸದ ಉದ್ದಿಮೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ಬಿಬಿಎಂಪಿಗೆ ಸೂಚಿಸಿತ್ತು. ಅದರಂತೆ ಕಾರ್ಯಾಚರಣೆ ನಡೆಸಿದ ಬಿಬಿಎಂಪಿ ಅಧಿಕಾರಿಗಳು, 49,241 ಅಂಗಡಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಅಳವಡಿಕೆ ಹಾಗೂ ಸಹಾಯ 2.0ರಲ್ಲಿ ಬಂದಂತಹ ದೂರುಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, “ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 49,241 ಮಳಿಗೆಗಳಿಗೆ ನೋಟಿಸ್ ನೀಡಲಾಗಿದ್ದು, 16,813 ಮಳಿಗೆಗಳು ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಿವೆ. 32,428 ಮಳಿಗೆಗಳಲ್ಲಿ ನಾಮಫಲಕಗಳನ್ನು ಅಳವಡಿಸಬೇಕಿದೆ. ಫೆಬ್ರುವರಿ ಅಂತ್ಯದೊಳಗಾಗಿ ಎಲ್ಲ ಮಳಿಗೆಗಳಲ್ಲಿ ಕನ್ನಡ ನಾಮಫಲಕವನ್ನು ಅಳವಡಿಸಿಕೊಂಡಿರಬೇಕು. ಅದಕ್ಕಾಗಿ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು” ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
“ನಗರದ ಆರ್ಟಿರಿಯಲ್, ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳಲ್ಲಿ ಆದ್ಯತೆ ಮೇರೆಗೆ ಕನ್ನಡ ನಾಮಫಲಕಗಳನ್ನು ಅಳವಡಿಸಬೇಕು. ಮಳಿಗೆಗಳಿಗೆ ತಿಳಿವಳಿಕೆ ಪತ್ರ ನೀಡಿದ ಬಳಿಕ 7 ದಿನ ಕಾಲಾವಕಾಶ ನೀಡಿದ ಬಳಿಕವೂ ಕನ್ನಡ ನಾಮಫಲಕ ಅಳವಡಿಸದಿದ್ದಲ್ಲಿ ಅಂತಹ ಮಳಿಗೆಯ ಮೇಲೆ ಶಿಸ್ತು ಕ್ರಮ ಜರುಗಿಸಿ ಕೂಡಲೇ ನಾಮಫಲಕ ಅಳವಡಿಸುವಂತೆ ಮಾಡಬೇಕು” ಎಂದು ಸೂಚಿಸಿದರು.
“ಪಾಲಿಕೆಯ ಸಹಾಯ 2.0ರಲ್ಲಿ ಬರುವ ದೂರುಗಳನ್ನು ನಿಗದಿತ ಸಮಯದಲ್ಲಿ ಇತ್ಯರ್ಥಪಡಿಸಬೇಕು. ದೂರುಗಳು ಬಂದ ತಕ್ಷಣ ಬಗೆಹರಿಸಬಹುದಾದ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಬೇಕು” ಎಂದು ವಲಯ ಆಯುಕ್ತರಿಗೆ ಸೂಚನೆ ನೀಡಿದರು.
ಇದನ್ನೂ ಓದಿ: ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯ: ಜ.15ರೊಳಗೆ ಸಮೀಕ್ಷೆ ಪೂರ್ಣಗೊಳಿಸಿ; ಅಧಿಕಾರಿಗಳಿಗೆ ಬಿಬಿಎಂಪಿ ಸೂಚನೆ
“ಆಯಾ ವಲಯ ವ್ಯಾಪ್ತಿಯಲ್ಲಿ ಪ್ರಮುಖವಾಗಿ ಕಸದ ಸಮಸ್ಯೆ, ಬೀದಿ ದೀಪಗಳ ಅಳವಡಿಕೆ ಹಾಗೂ ರಸ್ತೆ ಗುಂಡಿ ಸಮಸ್ಯೆಗಳ ಕುರಿತು ದೂರುಗಳು ಬರುತ್ತವೆ. ಬರುವಂತಹ ದೂರುಗಳನ್ನು ಆದ್ಯತೆ ಮೇರೆಗೆ ತ್ವರಿತಗತಿಯಲ್ಲಿ ಇತ್ಯರ್ಥಪಡಿಸಬೇಕು” ಎಂದು ಹೇಳಿದರು.
ತೆರಿಗೆ ವಿಚಾರ ಕುರಿತು ಮಾತನಾಡಿ, ಆಸ್ತಿ ತೆರಿಗೆ ಸಂಗ್ರಹ ಪಾಲಿಕೆಗೆ ಪ್ರಮುಖ ಆದಾಯ ಮೂಲವಾಗಿದ್ದು, ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ. ಆಸ್ತಿ ತೆರಿಗೆ ಪಾವತಿಸದವರಿಗೆ ನೋಟಿಸ್ ನೀಡಲಾಗುತ್ತಿದೆ. ತೆರಿಗೆ ಪಾವತಿಸಲು ಜ್ಞಾಪನೆಯಾಗಿ ನಾಗರಿಕರ ಮೊಬೈಲ್‌ಗಳಿಗೆ ಸಂದೇಶಗಳನ್ನು ಕಳುಹಿಸಲಾಗುತ್ತಿದೆ ಎಂದು ತಿಳಿಸಿದರು.
ಕೆ.ಆರ್.ಮಾರುಕಟ್ಟೆಯಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲಾಗುವುದು. ವ್ಯಾಪಾರ ಚಟುವಟಿಕೆಗಳ ಕೇಂದ್ರವಾಗಿರುವ ಪೀಣ್ಯ ಕೈಗಾರಿಕಾ ಪ್ರದೇಶ, ಎಸ್‌ಪಿ ರಸ್ತೆ, ಮಾಮೂಲ್‌ಪೇಟೆ, ಸುಲ್ತಾನ್‌ಪೇಟೆ ಮತ್ತಿತರ ರಸ್ತೆಗಳ ಅಭಿವೃದ್ಧಿ ಕಾಮಗಾರಿಯನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಇದೇ ವೇಳೆ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


