10 ಪಾಲಿಕೆಯಾಗಿ BBMP ವಿಂಗಡನೆಗೆ ಸಂಪುಟ ಅಸ್ತು: ಶೀಘ್ರದಲ್ಲೇ 'ಗ್ರೇಟರ್ ಬೆಂಗಳೂರು' ರಚನೆ!
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ (ಎಲೆಕ್ಟ್ರಾನಿಕ್ ಸಿಟಿ, ಬಿಡದಿ, ಆನೇಕಲ್ ಸೇರಿ) ಎರಡೂ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿ ಗ್ರೇಟರ್ ಬೆಂಗಳೂರು ರಚಿಸಲು ತೀರ್ಮಾನಿಸಲಾಗಿದೆ.

ಬೆಂಗಳೂರು: ಬೃಹತ್ ಬೆಂಗಳೂರನ್ನು ವಿಭಜಿಸುವ ವರದಿಗೆ ರಾಜ್ಯ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ.
ಬಿಬಿಎಂಪಿ ಸುಧಾರಣಾ ಸಮಿತಿ ಅಧ್ಯಕ್ಷ ಬಿ.ಎಸ್. ಪಾಟೀಲ್ ಸಮಿತಿ ನೀಡಿದ್ದ ವರದಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.
ಬೆಂಗಳೂರನ್ನು 10 ಪಾಲಿಕೆಗಳಾಗಿ ವಿಭಜಿಸಿ, ಬಿಬಿಎಂಪಿಯನ್ನು ರದ್ದುಗೊಳಿಸಲು ಈ ಸಮಿತಿ ಶಿಫಾರಸ್ಸು ಮಾಡಿತ್ತು. ಇದೀಗ ಈ ಸಮಿತಿಯ ಸಲಹೆಯಂತೆ ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡುವ ನಿರ್ಧಾರಕ್ಕೆ ಸಂಪುಟ ಅಸ್ತು ಎಂದಿದೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಮಹಾನಗರ ಪ್ರದೇಶಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಹೊಸಕೋಟೆ, ನೆಲಮಂಗಲ, ದೇವನಹಳ್ಳಿ, ದೊಡ್ಡಬಳ್ಳಾಪುರ (ಎಲೆಕ್ಟ್ರಾನಿಕ್ ಸಿಟಿ, ಬಿಡದಿ, ಆನೇಕಲ್ ಸೇರಿ) ಎರಡೂ ಜಿಲ್ಲೆ ಹಾಗೂ ಸುತ್ತಮುತ್ತಲ ಪ್ರದೇಶಗಳನ್ನು ಸೇರಿಸಿ ಗ್ರೇಟರ್ ಬೆಂಗಳೂರು ರಚಿಸಲು ತೀರ್ಮಾನಿಸಲಾಗಿದೆ.
ಸಂಪುಟದ ಅನುಮೋದನೆಯೊಂದಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ 5ರಿಂದ 10 ಭಾಗಗಳಾಗುವ ಸಾಧ್ಯತೆ ಇದೆ. ಈ ವರದಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಗೆ ಶಿಫಾರಸು ಮಾಡಲಾಗಿತ್ತು. ಇದರಂತೆ ಗ್ರೇಟರ್ ಬೆಂಗಳೂರು ಅಥಾರಿಟಿ ಶೀಘ್ರದಲ್ಲೇ ಜಾರಿಗೆ ಬರಲಿದೆ. ಇದಕ್ಕೆ ಸಿಎಂ ಅಧ್ಯಕ್ಷರಾಗಿ ಇರಲಿದ್ದಾರೆ. ಬೆಂಗಳೂರು ನಗರ ಉಸ್ತುವಾರಿ ಸಚಿವರು ಉಪಾಧ್ಯಕ್ಷರಾಗಿರುತ್ತಾರೆ. ಅವರೊಂದಿಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರು ಉಪಾಧ್ಯಕ್ಷರಾಗಿ ಕೆಲ ಮಾಡಲಿದ್ದಾರೆ. ಹಾಗೆಯೇ, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮುಖ್ಯ ಆಯುಕ್ತರು ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಲಿದ್ದಾರೆ.
ಪ್ರತಿ ನಗರ ಪಾಲಿಕೆಯಲ್ಲಿ 6 ಸ್ಥಾಯಿ ಸಮಿತಿ ರಚಿಸಲಾಗುತ್ತಿದ್ದು, ಆಡಳಿತ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ಕಂದಾಯ, ಆದಾಯ ಮತ್ತು ಲೆಕ್ಕಪತ್ರ ಸ್ಥಾಯಿ ಸಮಿತಿ, ಸಾರ್ವಜನಿಕ ಕಾಮಗಾರಿ ಮತ್ತು ಎಂಜಿನಿಯರಿಂಗ್ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ ಮತ್ತು ನೈಸರ್ಗಿಕ ವಿಕೋಪ ನಿರ್ವಹಣಾ ಸ್ಥಾಯಿ ಸಮಿತಿ, ಅರಣ್ಯ, ಪರಿಸರ, ಕೆರೆ ಮತ್ತು ತೋಟಗಾರಿಕೆ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಮೂಲಸೌಕರ್ಯ ಸ್ಥಾಯಿ ಸಮಿತಿಗಳನ್ನು ರಚಿಸಲಾಗುತ್ತಿದೆ. ಪ್ರತಿ ಸ್ಥಾಯಿ ಸಮಿತಿಯೂ 5 ಸದಸ್ಯರಿರಲಿದ್ದು, ಅವರನ್ನು ನಗರ ಪಾಲಿಕೆ ಸಭೆಯಲ್ಲಿ ಕೌನ್ಸಿಲರ್ ಗಳು ಆಯ್ಕೆ ಮಾಡಲಿದ್ದಾರೆ. ಅಲ್ಲದೆ, ಆ ಐವರಲ್ಲಿ ಒಬ್ಬರನ್ನು ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗುತ್ತದೆ. ಈ ಸ್ಥಾಯಿ ಸಮಿತಿಗಳಿಗೆ ಆಯ್ಕೆಯಾದ ಸದಸ್ಯರ ಅವಧಿ 30 ತಿಂಗಳವರೆಗೆ ಇರಲಿದೆ ಎಂದು ವಿಧೇಯಕದಲ್ಲಿ ಉಲ್ಲೇಖಿಸಲಾಗಿದೆ.
ಬೃಹತ್ ಬೆಂಗಳೂರು ಆಡಳಿತ ಮಸೂದೆ-2024 ಅನ್ನು ಸರ್ಕಾರ ಮಂಗಳವಾರ ವಿಧಾನಸಭೆಯಲ್ಲಿ ಮಂಡಿಸುವ ಸಾಧ್ಯತೆ ಇದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



