ರಾಜ್ಯ

ಶಿರೂರು ಗುಡ್ಡ ಕುಸಿತ ದುರಂತ: 8 ದಿನಗಳ ಬಳಿಕ ಮಹಿಳೆ ಶವ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ

ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿತ್ತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ.

ಶಿರೂರು ಗುಡ್ಡ ಕುಸಿತ ದುರಂತ: 8 ದಿನಗಳ ಬಳಿಕ ಮಹಿಳೆ ಶವ ಪತ್ತೆ; ಮೃತರ ಸಂಖ್ಯೆ 8ಕ್ಕೆ ಏರಿಕೆ
ಮೃತ ಮಹಿಳೆ.
Published On :

ಶಿರೂರು [ಉತ್ತರ ಕನ್ನಡ]: ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ಶಿರೂರಿನಲ್ಲಿ ಭೂಕುಸಿತ ದುರಂತ ಸಂಭವಿಸಿ ಒಂದು ವಾರ ಕಳೆದಿದೆ. ಕಾರ್ಯಾಚರಣೆ ವೇಳೆ ಸೋಮವಾರ ಮತ್ತೊಂದು ಶವ ಸಿಕ್ಕಿದೆ.

ದುರಂತ ಸಂಭವಿಸಿದ ದಿನ ಸಣ್ಣಿ ಹನುಮಂತಗೌಡ ಅವರು ಮನೆಯಲ್ಲಿ ಒಬ್ಬರೇ ಇದ್ದರು. ಗುಡ್ಡ ಕುಸಿತದ ಪರಿಣಾಮ ನದಿಯಲ್ಲಿ ಕೊಚ್ಚಿಕೊಂಡು ಹೋಗಿದ್ದರು. ಘಟನೆ ಬಳಿಕ ಉಳ್ಳುವರೆ ಗ್ರಾಮಕ್ಕೆ ಸಚಿವ ಮಂಕಾಳ್ ವೈದ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಭೇಟಿ ನೀಡಿದ ಸಂದರ್ಭದಲ್ಲಿ ಮಹಿಳೆಯ ಪುತ್ರ ಮಂಜುನಾಥ ಹನುಮಂತಗೌಡ ಅವರು ತಾಯಿ ಹುಡುಕಿಕೊಡುವಂತೆ ಮನವಿ ಮಾಡಿಕೊಂಡಿದ್ದರು.

ನಿನ್ನೆ ನಡೆದ ಶೋಧ ಕಾರ್ಯಾಚರಣೆ ವೇಳೆ ಗಂಗಕೊಳ್ಳ ಎಂದು ಕರೆಯಲ್ಪಡುವ ಗಂಗಾವಳಿ ನದಿಯ 15 ಕಿಲೋಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಅದೇ ಸ್ಥಳದಲ್ಲಿ 4 ವರ್ಷದ ಬಾಲಕಿ ಆವಂತಿಕಾಳ ಶವ ಕೂಡ ಪತ್ತೆಯಾಗಿತ್ತು.

ಜುಲೈ 16ರ ಬೆಳಗ್ಗೆ ಉತ್ತರ ಕನ್ನಡ ಜಿಲ್ಲೆಯ ಶಿರೂರಿನ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡ ಕುಸಿತವಾಗಿತ್ತು. ಈ ದುರಂತದಲ್ಲಿ 11 ಮಂದಿ ಬಲಿಯಾಗಿದ್ದಾರೆ. ಈ ಪೈಕಿ ಈವರೆಗೆ 8 ಮೃತದೇಹಗಳು ಪತ್ತೆಯಾಗಿವೆ. ಉಳಿದವರಿಗಾಗಿ ಶೋಧಕಾರ್ಯ ನಡೆಯುತ್ತಿದೆ. ಕಾರ್ಯಾಚರಣೆಗೆ ಆಧುನಿಕ ತಂತ್ರಜ್ಞಾನದ ಮೊರೆಹೋಗಿರುವ ಜಿಲ್ಲಾಡಳಿತ ಇಸ್ರೋ ಜೊತೆಗೆ ಯೋಧರ ನೆರವು ಪಡೆದಿದೆ.

ಒಂದೆಡೆ ಬಿಟ್ಟು ಬಿಡದ ಮಳೆ, ಮತ್ತೊಂದೆಡೆ ಪದೇ ಪದೇ ನೆಲಕ್ಕುರುಳುತ್ತಿರುವ ಗುಡ್ಡದ ಮಣ್ಣು. ಇದರ ನಡುವೆ ಜೀವ ಪಣಕ್ಕಿಟ್ಟು ರಕ್ಷಣಾ ಪಡೆಗಳು ಕಾರ್ಯಾಚರಣೆ ನಡೆಸುತ್ತಿವೆ.

ಮಣ್ಣಿನ ಕುಸಿತದಿಂದ ನದಿಯಲ್ಲಿ ತೇಲಿಹೋದ ಗಂಗೆಕೊಳ್ಳದ ಲೋಕೇಶ್ ನಾಯ್ಕ, ಶಿರೂರಿನ ಜಗನ್ನಾಥ ಜಟ್ಟಿ, ಕೇರಳ ಮೂಲದ ಅರ್ಜುನ್ ಶವ ಪತ್ತೆಯಾಗಬೇಕಿದೆ.

ಶಂಕಿತ ಸ್ಥಳದಲ್ಲಿ ಶೋಧ ಕಾರ್ಯ ಮಾಡಿದರೂ ಟ್ರಕ್, ಟ್ಯಾಂಕರ್‌ಗಳು ಮಾತ್ರ ಪತ್ತೆಯಾಗಿಲ್ಲ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಆರ್ಮಿ ಕಮಾಂಡೋಗಳ ತಂಡದಿಂದ ಶೋಧ ಕಾರ್ಯ ಮುಂದುವರೆದಿದೆ.

ಗುಡ್ಡದ ಮಣ್ಣು ತೆರವಿಗೆ ಮಳೆಯ ಅಬ್ಬರದ ಅಡ್ಡಿ ಉಂಟು ಮಾಡಿದರೆ, ಮಳೆಯಿಂದ ಗುಡ್ಡದ ಭಾಗದಿಂದ ಬರುತ್ತಿರುವ ನೀರು ದೊಡ್ಡ ಕಂದಕವನ್ನೇ ಸೃಷ್ಟಿ ಮಾಡಿದೆ. ಇದರ ಜೊತೆಗೆ ಈ ಭಾಗದ ಮಣ್ಣನ್ನು ಪರೀಕ್ಷೆ ಮಾಡಿದ ಜಿಯಾಲಾಜಿಕಲ್ ಸರ್ವೆ ಆಫ್ ಇಂಡಿಯಾದ ಭೂ ವಿಜ್ಞಾನಿಗಳ ತಂಡ ಮತ್ತೆ ಈ ಭಾಗದಲ್ಲಿ ಗುಡ್ಡ ಕುಸಿಯುವ ಸಾಧ್ಯತೆ ವರದಿ ನೀಡಿದೆ. ಹೀಗಾಗಿ ಕಾರ್ಯಾಚರಣೆ ಮಾಡುವುದು ಸಹ ದೊಡ್ಡ ತೊಡಕಾಗಿದ್ದು, ಸಾರ್ವಜನಿಕರಿಗೆ ಮಣ್ಣು ತೆರವಾದ ರಸ್ತೆಯಲ್ಲಿ ಸಂಚಾರಕ್ಕೆ ನಿಷೇಧ ಹೇರಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.