ವಯನಾಡು ಭೂಕುಸಿತ: ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ- ಹೆಚ್.ಡಿ ಕುಮಾರಸ್ವಾಮಿ
ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ.

ಬೆಂಗಳೂರು: ಕೇರಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಮತ್ತು ಪ್ರವಾಹದ ಭೀತಿ ಹೆಚ್ಚಿದೆ, ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ ಎಂದು ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ನೆರೆಯ ಕೇರಳದಲ್ಲಿ ಸಂಭವಿಸಿರುವ ಭಾರೀ ಭೂ ಕುಸಿತದಿಂದ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸುವ ತುರ್ತು ಅಗತ್ಯವಿದೆ. ಕೊಡಗು ಜಿಲ್ಲೆಯು ದುರಂತ ಸ್ಥಳ ವಯನಾಡಿನ ಪಕ್ಕದಲ್ಲೇ ಇದೆ. ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿ ಅಪಾಯದ ಸ್ಥಿತಿ ಇದೆ. ಅನೇಕ ಕಡೆ ರೆಟ್ ಅಲರ್ಟ್ ಘೋಷಿಸಲಾಗಿದ್ದು, ಭಾರೀ ಮಳೆಯ ಮುನ್ಸೂಚನೆ ಇದೆ.
ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ ಸೇರಿ ಕೆಲ ಜಿಲ್ಲೆಗಳಲ್ಲಿ ನಿರಂತರವಾಗಿ ಭೂ ಕುಸಿತ ಸಂಭವಿಸುತ್ತಿದೆ. ನೆರೆ ರಾಜ್ಯಗಳಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಅಲ್ಲಿನ ಅಣೆಕಟ್ಟೆಗಳಿಂದ ಭಾರೀ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ರಾಜ್ಯಕ್ಕೆ ಅಪಾರ ನೆರೆ ನೀರು ಹರಿದು ಬರುತ್ತಿದೆ. ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪ್ರವಾಹ ಅಪಾಯದ ಮಟ್ಟ ಮೀರಿ ನೂರಾರು ಗ್ರಾಮಗಳಿಗೆ ನುಗ್ಗಿದೆ, ಅಪಾರ ಬೆಳೆ ನಾಶವಾಗಿದೆ. ಈ ಕಷ್ಟದ ಸಮಯದಲ್ಲಿ ನಾವೆಲ್ಲರೂ ಜನರ ಜತೆಯಲ್ಲಿರಬೇಕು.
ಸರಕಾರ, ಸಚಿವರು, ಶಾಸಕರು, ಅಧಿಕಾರಿಗಳಿಗೆ ನನ್ನ ಕಳಕಳಿಯ ಸಲಹೆ ಇಷ್ಟೇ. ಇಂಥ ದುರಿತ ಪರಿಸ್ಥಿತಿಯಲ್ಲಿ ಇಡೀ ಆಡಳಿತ ವ್ಯವಸ್ಥೆ ಜನರ ಹತ್ತಿರದಲ್ಲಿರಬೇಕು. ರೈತರೊಂದಿಗೆ ನೇರ ಸಂಪರ್ಕದಲ್ಲಿದ್ದು ಪರಿಸ್ಥಿತಿಯನ್ನು ಅವಲೋಕಿಸುತ್ತಿರಬೇಕು. ಪ್ರಕೃತಿ ವಿಕೋಪ ಯಾವುದೇ ಕ್ಷಣದಲ್ಲಿ ಬಂದೆರಗುವ ಅಪಾಯವನ್ನು ನಿರ್ಲಕ್ಷಿಸಬಾರದು.
ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡಲೇ ಎಲ್ಲಾ ಉಸ್ತುವಾರಿ ಸಚಿವರನ್ನು ಜಿಲ್ಲಾ ಕೇಂದ್ರಗಳಲ್ಲಿ ಮೊಕ್ಕಂ ಹೂಡಲು ನಿರ್ದೇಶಿಸಬೇಕು. ಜಿಲ್ಲಾಧಿಕಾರಿಗಳು ಸೇರಿ ಎಲ್ಲಾ ಅಧಿಕಾರಿಗಳು, ರಕ್ಷಣಾ ಸಿಬ್ಬಂದಿ 24/7 ಸನ್ನದ್ಧವಾಗಿರಬೇಕು. ಅಪಾಯದ ಸ್ಥಳಗಳಿಂದ ಜನರನ್ನು ತಕ್ಷಣವೇ ಸುರಕ್ಷತ ಸ್ಥಳಗಳಿಗೆ ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



