ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣ; BSY ಕೆಣಕಲು ಹೋದರೆ ಕಾಂಗ್ರೆಸ್ ನಿರ್ನಾಮ: ಬಿಜೆಪಿ
ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.

ಬೆಂಗಳೂರು: ಚುನಾವಣೆಯ ಹೀನಾಯ ಸೋಲಿನಿಂದ ಕಂಗೆಟ್ಟಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ಒಂದಿಲ್ಲೊಂದು ಷಡ್ಯಂತ್ರ ರೂಪಿಸುವಲ್ಲಿ ತಲ್ಲೀನರಾಗಿದ್ದಾರೆ ಎಂದು ರಾಜ್ಯ ಬಿಜೆಪಿ ಘಟಕ ಆರೋಪಿಸಿದೆ.
ಈ ಸಂಬಂಧ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಬಿಜೆಪಿ, ತಮ್ಮ ಪಕ್ಷದ ವಿರುದ್ಧ ಅಪಪ್ರಚಾರ ಮಾಡಿದ್ದ ರಾಹುಲ್ ಗಾಂಧಿ ಅವರನ್ನು ಕೋರ್ಟ್ ಮೆಟ್ಟಿಲು ಹತ್ತಿಸಿದ್ದಕ್ಕಾಗಿ ದ್ವೇಷ ರಾಜಕಾರಣ ಮಾಡಲು ಹೊರಟಿರುವ ಕಾಂಗ್ರೆಸ್ ಸರ್ಕಾರ ಮಾನಸಿಕ ಅಸ್ವಸ್ಥೆ ನೀಡಿದ್ದ ದೂರನ್ನು ಆಧರಿಸಿ ರೈತ ನಾಯಕ ಮಾನ್ಯ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸಲು ಹವಣಿಸುತ್ತಿದೆ ಎಂದು ದೂರಿದೆ.
ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಾದ ಭ್ರಷ್ಟಾಚಾರ ಪ್ರಕರಣದಲ್ಲಿ ಸಚಿವ ಬಿ. ನಾಗೇಂದ್ರ ತಲೆದಂಡ ಹಾಗೂ ಸ್ವತಃ ಸರ್ಕಾರದ ಮೇಲೆ ಆರೋಪ ಬಂದಿರುವ ಬೆನ್ನಲ್ಲೇ ಭ್ರಷ್ಟಾಚಾರ ಪ್ರಕರಣದ ದಿಕ್ಕು ತಪ್ಪಿಸುವ ಉದ್ದೇಶದಿಂದ ಯಡಿಯೂರಪ್ಪನವರ ಮೇಲೆ ಅಪಪ್ರಚಾರದ ಷಡ್ಯಂತ್ರ ರೂಪಿಸಿದ್ದಾರೆ.
ಈ ಹಿಂದೆ ಸ್ವತಃ ಗೃಹ ಸಚಿವ ಡಾ. ಪರಮೇಶ್ವರ್ ಅವರೇ ಮಾನಸಿಕ ಅಸ್ವಸ್ಥೆ ದುರುದ್ದೇಶಪೂರಿತವಾಗಿ ದೂರು ನೀಡಿದ್ದಾಳೆಂದು ಹೇಳಿಕೆ ನೀಡಿ ಈ ಪ್ರಕರಣದಲ್ಲಿ ಯಾವುದೇ ಹುರುಳಿಲ್ಲ ಎಂಬುದು ಜಗಜ್ಜಾಹೀರಾಗಿತ್ತು. 3 ತಿಂಗಳ ನಂತರ ಈ ಪ್ರಕರಣಕ್ಕೆ ಮರುಜೀವ ತುಂಬಲು ಹೊರಟಿರುವುದು ವಿಪರ್ಯಾಸ.
ಮಾನಸಿಕ ಅಸ್ವಸ್ಥೆ ಸ್ವತಃ ತನ್ನ ಮಕ್ಕಳು ಹಾಗೂ ಗಂಡನ ವಿರುದ್ಧವೇ ದೂರು ನೀಡಿರುವುದೂ ಸೇರಿದಂತೆ 53 ಜನರ ವಿರುದ್ಧದ ದೂರುಗಳಲ್ಲಿ ಯಡಿಯೂರಪ್ಪನವರ ಪ್ರಕರಣಕ್ಕೇ ಸರ್ಕಾರ ವಿಶೇಷ ಒತ್ತು ನೀಡಿದ್ದು ಏಕೆ? ಪ್ರಕರಣ ದಾಖಲಾಗಿ 3 ತಿಂಗಳಾದ ಮೇಲೆ ದಿಢೀರ್ ಬಂಧನ ಮಾಡುವ ಸಂಚು ರೂಪಿಸಿದ್ದು ಏಕೆ? ಎಂದು ಬಿಜೆಪಿ ಪ್ರಶ್ನಿಸಿದೆ.
ಕಾಂಗ್ರೆಸ್ಸಿನ ದೆಹಲಿ ನಾಯಕರ ನೀಚ ದ್ವೇಷ ರಾಜಕಾರಣಕ್ಕೆ ಕಟ್ಟುಬಿದ್ದು ಯಡಿಯೂರಪ್ಪನವರನ್ನು ಕೆಣಕಲು ಹೋದರೆ ಕರ್ನಾಟಕದಲ್ಲಿ ಕಾಂಗ್ರೆಸ್ ನಿರ್ನಾಮವಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಬಿಜೆಪಿ ಕಿಡಿ ಕಾರಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



