ರಾಜ್ಯ ಪೊಲೀಸ್ ಇಲಾಖೆ ಸುವರ್ಣ ಮಹೋತ್ಸವ: ಮಾದಕ ದ್ರವ್ಯ ಮುಕ್ತ ಕರ್ನಾಟಕಕ್ಕೆ ಪೊಲೀಸ್ ರನ್ ಕಾರ್ಯಕ್ರಮ
ಯುವಜನತೆ ನಮ್ಮ ದೇಶದ ಭವಿಷ್ಯದ ಸಂಪತ್ತು, ಅವರೇ ಮಾದಕ ದ್ರವ್ಯಗಳ ವ್ಯಸನಕ್ಕೆ ದಾಸರಾಗುತ್ತಿರುವುದು ದುಃಖಕರ ಸಂಗತಿಯಾಗಿದೆ ಎಂದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಸುವರ್ಣ ಮಹೋತ್ಸವ ಅಂಗವಾಗಿ ಆಯೋಜಿಸಿದ್ದ ಮಾದಕ ದ್ರವ್ಯ ಮುಕ್ತ ಕರ್ನಾಟಕ ಪೊಲೀಸ್ ರನ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಗೃಹ ಸಚಿವ ಡಾ.ಜಿ. ಪರಮೇಶ್ವರ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿಗಳಾದ ಕೆ ಗೋವಿಂದರಾಜು ಹಾಗೂ ನಸೀರ್ ಅಹ್ಮದ್,ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್, ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯುವಜನತೆ ನಮ್ಮ ದೇಶದ ಭವಿಷ್ಯದ ಸಂಪತ್ತು, ಅವರೇ ಮಾದಕ ದ್ರವ್ಯಗಳ ವ್ಯಸನಕ್ಕೆ ದಾಸರಾಗುತ್ತಿರುವುದು ದುಃಖಕರ ಸಂಗತಿಯಾಗಿದೆ. ಯುವಜನತೆಯಲ್ಲಿ ಮತ್ತು ಸಾರ್ವಜನಿಕರಲ್ಲಿ ಈ ಬಗ್ಗೆ ಜಾಗೃತಿ ಬರಬೇಕು. ಸರ್ಕಾರದ ಜೊತೆ ಸಾರ್ವಜನಿಕರು ಕೈಜೋಡಿಸಿದರೆ ಕರ್ನಾಟಕವನ್ನು ವ್ಯಸನಮುಕ್ತ ರಾಜ್ಯವನ್ನಾಗಿ ಮಾಡಲು ಸಾಧ್ಯವಾಗುತ್ತದೆ ಎಂದರು.
ಕೇವಲ ರಾಜಧಾನಿ ಬೆಂಗಳೂರಿನಲ್ಲಿ ಮಾತ್ರವಲ್ಲದೆ ರಾಜ್ಯಾದ್ಯಂತ ಕೂಡ ಪೊಲೀಸ್ ರನ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಕರ್ನಾಟಕ ರಾಜ್ಯ ಪೊಲೀಸ್ ಸುವರ್ಣ ಮಹೋತ್ಸವ ಅಂಗವಾಗಿ ಕರ್ನಾಟಕ ಪೊಲೀಸ್ ರನ್-2024 ಕಾರ್ಯಕ್ರಮಕ್ಕೆ ಇಂದು ಪುತ್ತೂರಿನ ದರ್ಬೆ ಬೈಪಾಸ್ ವೃತ್ತದಿಂದ ನಗರ ಪೊಲೀಸ್ ಠಾಣೆಯ ತನಕ ಪೊಲೀಸ್ ರನ್ ಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ ಬಿ ರಿಷ್ಯಂತ್ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಮಾದಕ ದ್ರವ್ಯ ದುಷ್ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಯುವ ಪೊಲೀಸ್ ರನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಪೊಲೀಸ್ ಸಿಬ್ಬಂದಿ ಪಾಲ್ಗೊಂಡರು. ಕೋಲಾರದಲ್ಲಿ ಕೂಡ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


