ರಾಜ್ಯ

ಸಂಪೂರ್ಣ 5 ವರ್ಷಗಳವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ

5 ವರ್ಷಗಳ ಸಂಪೂರ್ಣ ಅವಧಿಯವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಸಂಪೂರ್ಣ 5 ವರ್ಷಗಳವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ: ಸಿಎಂ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Published On :

ಬೆಂಗಳೂರು: 5 ವರ್ಷಗಳ ಸಂಪೂರ್ಣ ಅವಧಿಯವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದರು.

ಮೈಸೂರು ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಶುಕ್ರವಾರ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಆಯೋಜಿಸಿದ್ದ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ನಾವು ಕೊಟ್ಟ ಮಾತಿನಂತೆ ಗ್ಯಾರಂಟಿ ಜಾರಿ ಮಾಡಿದ್ದೇವೆ. ಆದರೆ ಬಿಜೆಪಿಯವರು ಟೀಕೆ ಮಾಡಿದರು. ಆದರೆ ಅವರ ಟೀಕೆಗೆ ನಾವು ತಲೆ ಕೆಡಿಸಿಕೊಳ್ಳಲಿಲ್ಲ. ಗ್ಯಾರಂಟಿ ಬಗ್ಗೆ ಎಲ್ಲಾ ರೀತಿಯ ಆರೋಪ ಮಾಡಿದ್ದಾರೆ. ಗ್ಯಾರಂಟಿ ಯೋಜನೆ ಜಾರಿಯಾಗಲ್ಲ ಎಂದು ಅಪ್ಪಟ ಸುಳ್ಳು ಹೇಳಿದ್ದರು. ಆದರೆ, ನಾವು ಹೇಳಿದಂತೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದು ಹೇಳಿದರು.

ನಮ್ಮ ಗ್ಯಾರಂಟಿಗಳು ಬಿಜೆಪಿಯವರ ಮನೆ ಬಾಗಿಲಿಗೂ ಮುಟ್ಟಿದೆ. ಬಿಜೆಪಿ ಮತದಾರರೂ ಕಾಂಗ್ರೆಸ್ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ. ಇವರನ್ನು ಅವಮಾನಿಸಬೇಡಿ. ನಮ್ಮ ಗ್ಯಾರಂಟಿಗಳು ನಾಡಿನ‌ ಜನರ ಹಕ್ಕು. ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜಾರಿಯೇ ಆಗಲ್ಲ ಎಂದು ಮೋದಿ, ಬೊಮ್ಮಾಯಿ, ಆರ್.ಅಶೋಕ್, ವಿಜಯೇಂದ್ರ ಯಡಿಯೂರಪ್ಪ ಎಲ್ಲರೂ ಸುಳ್ಳಿನ ಮೇಲೆ ಸುಳ್ಳು ಹೇಳಿದ್ದರು.

ನಾವು ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಆಗ ಗ್ಯಾರಂಟಿಗಳಿಂದ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂಬ ಹೊಸ ಸುಳ್ಳು ಹಬ್ಬಿಸಿದರು. ಆದರೆ, ನಾವು ಬಜೆಟ್ ನಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹೊರತಾದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಹಣ ಮೀಸಲಿಟ್ಟೆವು. ಹೀಗಾಗಿ ಬಿಜೆಪಿಯ ಈ ಮಾತು ಕೂಡ ಸುಳ್ಳಾಯಿತು. ಹೀಗೆ ಬಿಜೆಪಿ ಮಂದಿ ಮೊದಲಿಗೆ ನಮ್ಮ ಗ್ಯಾರಂಟಿಗಳನ್ನು ಆಡಿಕೊಂಡು, ಸುಳ್ಳು ಹೇಳಿದರು. ಆದರೆ ನಮ್ಮ ಗ್ಯಾರಂಟಿಗಳು ಯಶಸ್ವಿಯಾಗಿ ಜಾರಿ ಆದ ಬಳಿಕ ನಮ್ಮದೇ ಗ್ಯಾರಂಟಿ ಸ್ಕೀಂಗಳನ್ನು ಕದ್ದು ಅದಕ್ಕೆ ಮೋದಿ ಗ್ಯಾರಂಟಿ ಎಂದು ಹೆಸರಿಟ್ಟಿದ್ದಾರೆ ಎಂದು ತಿಳಿಸಿದರು.

ನಾವು ನುಡಿದಂತೆ ನಡೆದಿದ್ದೇವೆ, ಬಿಜೆಪಿ ಸುಳ್ಳುಗಳನ್ನೇ ನುಡಿದಿದ್ದಾರೆ. ತಾವು ಅಧಿಕಾರಕ್ಕೆ ಬಂದರೆ ಪ್ರತಿಯೊಬ್ಬ ಭಾರತೀಯರ ಖಾತೆಗೆ 15 ಲಕ್ಷ ರೂ ಹಾಕುವುದಾಗಿ ಮೋದಿ ಘೋಷಿಸಿದ್ದರು. 15 ಲಕ್ಷ ಇರಲಿ, 15 ಪೈಸೆನಾದ್ರೂ ಯಾರಿಗಾದರೂ ಹಾಕಿದ್ದಾರಾ? ಬಿಜೆಪಿಯವರಾಗಲಿ, ಮೋದಿಯವರಾಗಲೀ ಚುನಾವಣೆಯಲ್ಲಿ ಕೊಟ್ಟ ಭರವಸೆಗಳಲ್ಲಿ ಒಂದನ್ನಾದರೂ ಈಡೇರಿಸಿದ್ದಾರಾ? ಆಸ್ಪತ್ರೆ, ಕಾಲೇಜು, ಮಾರುಕಟ್ಟೆ, ರಸ್ತೆ, ನೀರು ಸೇರಿ ಮೈಸೂರಿನ ಎಲ್ಲಾ ಪ್ರಗತಿ ಕಾರ್ಯಕ್ರಮಗಳಿಗೆ ನಮ್ಮ ಸರ್ಕಾರ ನಿರಂತರವಾಗಿ ಅನುದಾನ ನೀಡುತ್ತಲೇ ಬಂದಿದೆ. ಈ ಬಜೆಟ್ ನಲ್ಲೂ ಹಣ ಮೀಸಲಿಟ್ಟಿದ್ದೇವೆ. ಮೈಸೂರು ಜಿಲ್ಲೆಯ ಅಭಿವೃದ್ಧಿಗೆ ಮೈಸೂರು ಜನರ ಪ್ರಗತಿಗೆ ಬಿಜೆಪಿ ಇವತ್ತಿನವರೆಗೂ ಒಂದೇ ಒಂದು ಕಾರ್ಯಕ್ರಮವನ್ನೂ ಮಾಡಲೇ ಇಲ್ಲ ಏಕೆ? ಎಂದು ಪ್ರಶ್ನಿಸಿದರು.

ಗ್ಯಾರಂಟಿ ಯೋಜನೆಗಳು ಎಲ್ಲಾ ಜಾತಿಯ ಬಡವರು, ಎಲ್ಲಾ ಧರ್ಮದ ಬಡವರು ಅವರೆಲ್ಲರಿಗೂ ಕೂಡ ಈ ಯೋಜನೆಗಳು ತಲುಪುವ ಕೆಲಸ ಮಾಡುತ್ತೇವೆ. ಭಾರತೀಯ ಜನತಾ ಪಕ್ಷದ ಬಡವರಿಗೂ ಕೂಡ ಕೊಡುತ್ತಿದ್ದೇವೆ. ನಾವು ಯಾವುದೇ ಧರ್ಮ ಜಾತಿ ಪಕ್ಷ ಪಂಗಡ ಎಂದು ಬೇಧ ಮಾಡುವುದಿಲ್ಲ. ಎಲ್ಲಾ ಮಹಿಳೆಯರು ಎಲ್ಲಾ ಬಡವರು ಅವರಿಗೆ ಸಹಾಯ ಮಾಡಬೇಕೆಂಬುದೇ ನಮ್ಮ ಗ್ಯಾರಂಟಿ ಯೋಜನೆಗಳ ಪ್ರಮುಖ ಉದ್ದೇಶವಾಗಿದೆ ಎಂದರು.

ಈ ಸಂದರ್ಭದಲ್ಲಿ ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ, ಮಾಜಿ ಸಚಿವ ಶಾಸಕ ತನ್ವೀರ್ ಸೇಠ್, ಗ್ಯಾರಂಟಿ ಯೋಜನೆಗಳ ಜಾರಿ ಪ್ರಾಧಿಕಾರದ ಉಪಾಧ್ಯಕ್ಷೆ ಪುಷ್ಪ ಅಮರ್​ನಾಥ್, ಆಶ್ರಯ ಸಮಿತಿ ಅಧ್ಯಕ್ಷ ಡಾ.ಯತೀಂದ್ರ ಉಪಸ್ಥಿತರಿದ್ದರು. ಚಾಮರಾಜ ಕ್ಷೇತ್ರದ ಶಾಸಕ ಹರೀಶ್ ಗೌಡ ಅವರು ಅಧ್ಯಕ್ಷತೆ ವಹಿಸಿದ್ದ ಬೃಹತ್ ಸಮಾವೇಶದಲ್ಲಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಶಾಸಕರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.