204 ರೂ. ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣ: ಬೆಂಗಳೂರಿಗೆ ವರ್ಗಾವಣೆ ಕೋರಿ ಯತ್ನಾಳ್ ಮನವಿ, ಡಿಕೆಶಿಗೆ 'ಹೈ' ನೋಟಿಸ್
ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ರೂ.204 ಕೋಟಿ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಬೆಂಗಳೂರು ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮನವಿ ಮಾಡಿಕೊಂಡಿದ್ದು, ಈ ಸಂಬಂಧ ಹೈಕೋರ್ಟ್ ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದೆ.
ಬಸನಗೌಡ ಪಾಟೀಲ್ ಅವರು ಸಲ್ಲಿಸಿರುವ ಸಿವಿಲ್ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು. ರಾಮನಗರ ಜಿಲ್ಲೆಯ ಕನಕಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿಯಲ್ಲಿ ಬಾಕಿರುವ ಪ್ರಕರಣದ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಬೇಕು ಎಂದು ಮಧ್ಯಂತರ ಮನವಿ ಮಾಡಲಾಗಿದೆ.
ವಾದ ಆಲಿಸಿದ ಪೀಠವು ಪ್ರತಿವಾದಿ ಡಿ ಕೆ ಶಿವಕುಮಾರ್ ಅವರಿಗೆ ತುರ್ತು ನೋಟಿಸ್ ಜಾರಿ ಮಾಡಿದೆ. ಶಿವಕುಮಾರ್ ಹಾಗೂ ವಿಚಾರಣಾಧೀನ ನ್ಯಾಯಾಲಯದಲ್ಲಿ ಅವರ ಪರವಾಗಿ ಹಾಜರಾಗುವ ವಕೀಲರಿಗೆ ಹ್ಯಾಂಡ್ ಸಮನ್ಸ್ ಮೂಲಕ ನೋಟಿಸ್ ನೀಡಲು ಅನುಮತಿಸಿರುವ ಪೀಠವು, ವಿಚಾರಣೆಯನ್ನಯ ಮಾರ್ಚ್ 20ಕ್ಕೆ ಮುಂದೂಡಿದೆ.
ತಮಗೆ ಕಿರುಕುಳ ನೀಡುವ ಉದ್ದೇಶದಿಂದ ಡಿ ಕೆ ಶಿವಕುಮಾರ್ ಅವರು ಕನಕಪುರದ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿಯಲ್ಲಿ ದಾವೆ ಹೂಡಿದ್ದಾರೆ. ತಾನು ವಿಜಯಪುರದ ಶಾಸಕನಾಗಿದ್ದು, ವಿಜಯಪುರ- ಕನಕಪುರದ ನಡುವಿನ ಅಂತರ 565 ಕಿ ಮೀ. ಹೀಗಾಗಿ, ಪ್ರಕರಣವನ್ನು ಕನಕಪುರದಿಂದ ಬೆಂಗಳೂರಿಗೆ ವರ್ಗಾಯಿಸಬೇಕು. ತಾನು ಕನಕಪುರಕ್ಕೆ ಭೇಟಿ ನೀಡಿದರೆ ತನ್ನ ಮೇಲೆ ದಾಳಿಯಾಗುವ ಸಂಭವವಿದೆ. 2008ರಿಂದ ಡಿ ಕೆ ಶಿವಕುಮಾರ್ ಅವರು ಕನಕಪುರದ ಶಾಸಕರಾಗಿದ್ದು, ಸಾಕ್ಷಿ ತಿರುಚುವ ಸಾಧ್ಯತೆ ಇದೆ. ತಾನು ವಿಜಯಪುರದಲ್ಲಿ ಹೇಳಿಕೆ ನೀಡಿದ್ದು, ಕನಕಪುರದಲ್ಲಿ ದಾವೆ ಹೂಡಲಾಗಿದೆ. ಹೀಗಾಗಿ, ಪ್ರಕರಣವನ್ನು ಬೆಂಗಳೂರಿಗೆ ವರ್ಗಾಯಿಸಬೇಕು” ಎಂದು ಯತ್ನಾಳ್ ಕೋರಿದ್ದಾರೆ.
ಏನಿದು ಪ್ರಕರಣ?
ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರವಿದ್ದ ಸಂದರ್ಭದಲ್ಲಿ 2019ರ ಜೂನ್ 23ರಂದು ವಿಜಯಪುರದಲ್ಲಿ ಯತ್ನಾಳ್ ಅವರು ಡಿ ಕೆ ಶಿವಕುಮಾರ್ ಅವರು ನಮ್ಮ (ಬಿಜೆಪಿ) ನಾಯಕರನ್ನು ಭೇಟಿ ಮಾಡಿ ತಮ್ಮ ವಿರುದ್ಧದ ಆದಾಯ ತೆರಿಗೆ ಇಲಾಖೆ ಪ್ರಕರಣಗಳಿಂದ ರಕ್ಷಣೆ ಕೊಡಿಸುವಂತೆ ಕೋರಿದ್ದಾರೆ. ಈ ಸಂಬಂಧ ಡಿ ಕೆ ಶಿವಕುಮಾರ್ ಅವರು ನಮ್ಮ ಕೇಂದ್ರ ಸಚಿವರ ಮೂಲಕ ಲಾಬಿ ಮಾಡಿದ್ದಾರೆ. ವಿವಿಧ ಮೂಲಗಳ ಮೂಲಕ ನಮ್ಮ ರಾಷ್ಟ್ರೀಯ ಅಧ್ಯಕ್ಷರ ಮೇಲೆ ಒತ್ತಡ ಹೇರಲು ಡಿ ಕೆ ಶಿವಕುಮಾರ್ ಪ್ರಯತ್ನಿಸಿದ್ದಾರೆ ಎಂಬುದು ನನಗೆ ತಿಳಿದಿದೆ. ತಮ್ಮ ವಿರುದ್ಧದ ಜಾರಿ ನಿರ್ದೇಶನಾಲಯದ ಪ್ರಕರಣಗಳನ್ನು ಮುಕ್ತಾಯಗೊಳಿಸಿದರೆ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ರಚಿಸಲು ತಮ್ಮ ವಿರೋಧ ಇಲ್ಲ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ ಎಂಬುದು ನನಗೆ ಗೊತ್ತಿದೆ” ಎಂದು ಹೇಳಿದ್ದನ್ನು ಮಾಧ್ಯಮಗಳು ವ್ಯಾಪಕವಾಗಿ ಪ್ರಸಾರ ಮಾಡಿದ್ದವು.
ಈ ಹೇಳಿಕೆಯನ್ನು ಆಧರಿಸಿ ಡಿ ಕೆ ಶಿವಕುಮಾರ್ ಅವರು ರಾಮನಗರ ಜಿಲ್ಲೆಯ ಕನಕಪುರ ನ್ಯಾಯಾಲಯದಲ್ಲಿ ಯತ್ನಾಳ್ ವಿರುದ್ಧ ದಾವೆ ಹೂಡಿದ್ದು, ತಮ್ಮ ಘನತೆ ಮತ್ತು ವರ್ಚಸ್ಸಿಗೆ ಹಾನಿಯಾಗಿದೆ. ಇದಕ್ಕಾಗಿ ರೂ,204 ಕೋಟಿ ರೂಪಾಯಿ ಹಾನಿ ತುಂಬಿಕೊಡಲು ಯತ್ನಾಳ್‌ಗೆ ಆದೇಶಿಸಬೇಕು ಎಂದು ಕೋರಿದ್ದಾರೆ. ಈ ಪ್ರಕರಣವನ್ನು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಯತ್ನಾಳ್ ಕೋರಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



