ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು: ಕುತೂಹಲ ಮೂಡಿಸಿದ ಸಚಿವ ಡಾ ಜಿ ಪರಮೇಶ್ವರ್ ಹೇಳಿಕೆ
ಮೈಸೂರಿನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರಪ್ರಭಾ ಅರಸು ಅವರ ಜೊತೆ ಸಾಕಷ್ಟು ಬಾರಿ ಸಭೆ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನ ಕಟ್ಟಲು ಸಿಎಂ ಹೊರಟಿದ್ದಾರೆ.

ಮೈಸೂರು: ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲಾ. ರಾಜ್ಯ ರಾಜಕೀಯ ಪರಿಸ್ಥಿತಿ ಯಾವಾಗ ಬೇಕಾದರೂ ಬದಲಾಗಬಹುದು ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದು, ಈ ಹೇಳಿಕೆ ಹಲವರ ಹುಬ್ಬೇರುವಂತೆ ಮಾಡಿದೆ.
ಮೈಸೂರಿನಲ್ಲಿ ಕಾಂಗ್ರೆಸ್ ಕಚೇರಿ ಕಾರ್ಯಕ್ರಮವನ್ನು ಗುರುವಾರ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಮಾತನಾಡಿದ ಡಾ.ಜಿ.ಪರಮೇಶ್ವರ್ ಅವರು, ಮೈಸೂರಿನ ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ಸ್ಥಳ ಪಡೆಯಲು ನಾನು ಸಾಕಷ್ಟು ಹೋರಾಟ ಮಾಡಿದ್ದೇನೆ. ಚಂದ್ರಪ್ರಭಾ ಅರಸು ಅವರ ಜೊತೆ ಸಾಕಷ್ಟು ಬಾರಿ ಸಭೆ ಮಾಡಿದ್ದೇನೆ. ಈಗ ಶೀಘ್ರದಲ್ಲೇ 15 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಾಂಗ್ರೆಸ್ ಕಚೇರಿಯನ್ನ ಕಟ್ಟಲು ಸಿಎಂ ಹೊರಟಿದ್ದಾರೆ. ಆದಷ್ಟು ಬೇಗ ಕಚೇರಿ ಕಟ್ಟುಬಿಡಿ, ಮುಂದೆ ಏನಾಗುತ್ತೋ ಗೊತ್ತಾಗಲ್ಲ. ಇವತ್ತಿನ ರಾಜಕೀಯ ಬೆಳವಣಿಗೆ ನೋಡಿದರೆ ಏನೂ ಹೇಳಲಿಕ್ಕೆ ಆಗಲ್ಲ. ನಮ್ಮ ಸರ್ಕಾರ ಇರುವಾಗಲೇ ಬೇಗ ಶಂಕುಸ್ಥಾಪನೆ ನೆರವೇರಿಸಿ ಎಂದು ಹೇಳಿದರು. ಸಚಿವರ ಈ ಹೇಳಿಕೆ ಕಾಂಗ್ರೆಸ್ಸಿಗರು ಹಾಗೂ ಪಕ್ಷದ ಅಭಿಮಾನಿಗಳಲ್ಲಿ ಸರ್ಕಾರದ ಬಗ್ಗೆ ಅನುಮಾನ ಮೂಡುವಂತೆ ಮಾಡಿದೆ.
ಇದೇ ವೇಳೆ ಶಾಸಕರಿಗೆ ಆಮಿಷ ಒಡ್ಡುತ್ತಿರುವ ವಿಚಾರ ಕುರಿತು ಮಾತನಾಡಿ, ಕಾಂಗ್ರೆಸ್ ಸರ್ಕಾರ ಸ್ಥಿರವಾಗಿದ್ದು, 50 ಕೋಟಿ ಅಥವಾ 100 ಕೋಟಿ ನೀಡಿ ಸರ್ಕಾರ ಉರುಳಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.
ಏನೇ ಆರೋಪ ಮಾಡಿದರು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಗಟ್ಟಿಯಾಗುತ್ತಾರೆ. ಪ್ರತಿಪಕ್ಷಗಳು ಸರ್ಕಾರವನ್ನು ಬೀಳಿಸಲು ಸಾಧ್ಯವಿಲ್ಲ ಎಂದು ಹೇಳಿದರು.
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತರೆ. ಕೊಟ್ಟ ಮಾತಿನಿಂದ ನಮ್ಮ ಸರ್ಕಾರ ಹಿಂದೆ ಸರಿಯುವುದಿಲ್ಲ. ಈ ವಿಚಾರವನ್ನು ಕಾರ್ಯಕರ್ತರು ಜನರಿಗೆ ತಿಳಿಸಬೇಕು. ಜಾತಿ ಮತ್ತು ಸಾಮಾಜಿಕ-ಆರ್ಥಿಕ ಗಣತಿ ಕುರಿತು ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರದಲ್ಲೇ ಜನರ ಮುಂದಿಡಲಾಗುವುದು ಎಂದು ತಿಳಿಸಿದರು.
160 ಕೋಟಿ ವೆಚ್ಚದಲ್ಲಿ ಸರ್ಕಾರ ಸಮೀಕ್ಷೆ ನಡೆಸಿದ್ದು, ನೀತಿಗಳನ್ನು ರೂಪಿಸಲು ಜಾತಿವಾರು ಜನಸಂಖ್ಯೆಯನ್ನು ತಿಳಿಯಲು ಸಮೀಕ್ಷೆಯ ಅಗತ್ಯವಿದೆ ಎಂದು ತಿಳಿಸಿದರು. ಇದೇ ವೇಳೆ ಹಣಕಾಸಿನ ನಿರ್ವಹಣೆಗಾಗಿ ಸಿಎಂ ಸಿದ್ದರಾಮಯ್ಯ ಅವರನ್ನು ಶ್ಲಾಘಿಸಿದರು.
ನಿಗಮ-ಮಂಡಳಿಗಳಿಗೆ ಪಕ್ಷದ ಕಾರ್ಯಕರ್ತರ ನಾಮನಿರ್ದೇಶನ ಪಟ್ಟಿ ಸಿದ್ಧವಾಗಿದ್ದು, ಉಪಚುನಾವಣೆ ನಂತರ ಘೋಷಣೆ ಮಾಡಲಾಗುವುದು ಎಂದು ಭರವಸೆ ನೀಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



