ವಕ್ಫ್ ವಿವಾದ, BPL ಕಾರ್ಡ್ ರದ್ದು ಮತ್ತಿತರ ವಿಷಯಗಳ ಕುರಿತು ಸದನದಲ್ಲಿ ಪ್ರಸ್ತಾಪ: ಸರ್ಕಾರದ ವಿರುದ್ಧ ಮುಗಿಬೀಳಲು ವಿಪಕ್ಷಗಳು ಸಜ್ಜು
ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಾರಿ ರಾಜ್ಯ ಸರ್ಕಾರ ಕೇವಲ ಎರಡು ವಾರಗಳ ಅಧಿವೇಶನವನ್ನು ನಿಗದಿಪಡಿಸಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ ಮಾಡಲಾಗುವುದು.

ಬೆಂಗಳೂರು: ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಡಿ.9ರಿಂದ ಆರಂಭಗೊಳ್ಳಲಿದ್ದು, ಅಧಿವೇಶನ ಹಿನ್ನೆಲೆಯಲ್ಲಿ ವಕ್ಫ್ ವಿವಾದ, ಬಿಪಿಎಲ್ ಕಾರ್ಡ್ ರದ್ದು ಮತ್ತಿತರ ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರದ ವಿರುದ್ದ ಮುಗಿಬೀಳಲು ಸಜ್ಜಾಗಿವೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, ಮುಂದಿನ ತಿಂಗಳು ಬೆಳಗಾವಿಯಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದೆ. ಈ ಬಾರಿ ರಾಜ್ಯ ಸರ್ಕಾರ ಕೇವಲ ಎರಡು ವಾರಗಳ ಅಧಿವೇಶನವನ್ನು ನಿಗದಿಪಡಿಸಿದೆ. ಇನ್ನೂ ಹೆಚ್ಚು ದಿನ ಅಧಿವೇಶನ ನಡೆಸಲು ಮನವಿ ಮಾಡಲಾಗುವುದು ಎಂದು ಹೇಳಿದರು.
ವಕ್ಫ್ ಮಂಡಳಿಯಿಂದ ಆಗುತ್ತಿರುವ ಭೂ ಕಬಳಿಕೆ ಜ್ವಲಂತ ಸಮಸ್ಯೆಯಾಗಿದೆ. ಬಡವರ ರೇಷನ್ ಕಾರ್ಡ್ ರದ್ದು ಮಾಡಿ ಗ್ಯಾರಂಟಿಗಾಗಿ ಹಣ ಉಳಿಸಲಾಗುತ್ತಿದೆ. ಈ ಸಮಸ್ಯೆಯ ವಿರುದ್ಧ ಅಧಿವೇಶನದಲ್ಲಿ ಹೋರಾಟ ಮಾಡಲಾಗುವುದು. ಅಬಕಾರಿ ಇಲಾಖೆಯ ಹಗರಣ, ಬೆಳೆನಾಶಕ್ಕೆ ಪರಿಹಾರ ಮೊದಲಾದ ಸಮಸ್ಯೆಯ ವಿರುದ್ಧವೂ ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.
ಇದಲ್ಲದೆ, ಸಿದ್ದರಾಮಯ್ಯ ನೇತೃತ್ವದ ಸರ್ಕಾರವು ವಾರಕ್ಕೊಮ್ಮೆ ಎಲ್ಲಾ ಸಚಿವರು ಮತ್ತು ಅಧಿಕಾರಿಗಳು ಭೇಟಿಯಾಗುತ್ತಿದ್ದು, ಇದೊಂದು ರೀತಿ ಗುರುವಾರದ ಸರ್ಕಾರವಾಗಿ ಹೋಗಿದೆ. ಕೇವಲ ಒಂದು ದಿನ ಮಾತ್ರ ಇಲ್ಲಿ ಸಚಿವರು, ಅಧಿಕಾರಿಗಳು ಸಭೆ ಮಾಡುತ್ತಾರೆ. ಉತ್ತರ ಕರ್ನಾಟಕದ ಜಿಲ್ಲೆಗಳ ಸಮಸ್ಯೆ ಬಗ್ಗೆ ಚರ್ಚಿಸಲು ನಾನು ಸಭೆ ನಡೆಸಲಿದ್ದೇನೆ. ಈ ಹಿಂದೆ ಕಲ್ಯಾಣ ಕರ್ನಾಟಕ ಕುರಿತು ಸರ್ಕಾರದಿಂದ ಸಭೆ ನಡೆದಿದೆ. ಆ ಬಳಿಕ ಯಾವುದೇ ಸುದ್ದಿ ಇಲ್ಲ. ಬ್ರ್ಯಾಂಡ್ ಬೆಂಗಳೂರು ಎಂದು ಹೇಳಿ, ಮಳೆ ಬಂದು ಮುಳುಗುವ ಬೆಂಗಳೂರು ಸೃಷ್ಟಿಯಾಗಿದೆ. ಮಳೆಯಿಂದಾಗಿ ರಸ್ತೆ ಗುಂಡಿ ಉಂಟಾಗಿ ವಾಹನ ಚಾಲಕರಿಗೆ ಬೆನ್ನು ನೋವು ಉಂಟಾಗಿದೆ. ಜಯನಗರ ಶಾಸಕರು ಸೇರಿದಂತೆ ಅನೇಕ ಶಾಸಕರಿಗೆ ಅನುದಾನ ಕಡಿತವಾಗಿದೆ.
ರಾಜ್ಯದಲ್ಲಿ ಅಧಿಕಾರಿಗಳಿಗೆ ನೇಣಿನ ಭಾಗ್ಯ ನೀಡಲಾಗಿದೆ. ಅಧಿಕಾರಿಗಳು ಒಂದೋ ವರ್ಗಾವಣೆಯಾಗಬೇಕು ಅಥವಾ ನೇಣು ಹಾಕಿಕೊಳ್ಳಬೇಕು ಎಂಬ ಸ್ಥಿತಿ ಇದೆ. ರೌಡಿಗಳನ್ನು ಜೈಲಿಗೆ ಹಾಕುವ ಬದಲು ಪ್ರಕರಣ ಹಿಂಪಡೆಯಲಾಗಿದೆ.ಈ ಎಲ್ಲಾ ವಿಷಯಗಳ ಬಗ್ಗೆ ಸದನದಲ್ಲಿ ಪ್ರಶ್ನಿಸಲಾಗುವುದು ಎಂದು ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



