Muda ಕೇಸ್ ತನಿಖೆ ಮತ್ತಷ್ಟು ಚುರುಕು: ಸಿಎಂ ಸಂಬಂಧಿಕರಿಗೆ ಲೋಕಾಯುಕ್ತ ನೋಟಿಸ್, ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಪ್ರಕರಣದಲ್ಲಿ ಆರೋಪಿ.ನಂ.3 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಆರೋಪಿ ನಂ.4 ಆಗಿರುವ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.

ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಮಯ್ಯ ಸಂಬಂಧಿಕರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಪ್ರಕರಣದಲ್ಲಿ ಆರೋಪಿ.ನಂ.3 ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಆರೋಪಿ ನಂ.4 ಆಗಿರುವ ದೇವರಾಜು ಅವರಿಗೆ ಲೋಕಾಯುಕ್ತ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಗುರುವಾರ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆಂದು ಲೋಕಾಯುಕ್ತ ಕಚೇರಿಯ ಮೂಲಗಳಉ ಮಾಹಿತಿ ನೀಡಿದೆ.
ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶದ ಮೇರೆಗೆ ಮೈಸೂರು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
ಎಫ್‌ಐಆರ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಮೊದಲನೇ ಆರೋಪಿಯಾಗಿ, ಅವರ ಪತ್ನಿ ಪಾರ್ವತಿಯನ್ನು 2ನೇ ಆರೋಪಿಯಾಗಿ, ಪಾರ್ವತಿಯವರ ಸಹೋದರರಾಗಿರುವ ಮಲ್ಲಿಕಾರ್ಜುನ ಸ್ವಾಮಿ ಅವರನ್ನು 3ನೇ ಆರೋಪಿಯನ್ನಾಗಿ, ಜಮೀನು ಮಾಲೀಕ ದೇವರಾಜು ಅವರನ್ನು 4ನೇ ಆರೋಪಿಯನ್ನಾಗಿಸಲಾಗಿದೆ.
ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಪತ್ನಿ ಪಾರ್ವತಿಯವರಿಗೆ ಕಾನೂನು ಬಾಹಿರವಾಗಿ 14 ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಸಾಮಾಜಿಕ ಹೋರಾಟಗಾರರಾದ ಸ್ನೇಹಮಯಿ ಕೃಷ್ಣ ಅವರು ಜನಪ್ರತಿನಿಧಿ ನ್ಯಾಯಾಲಯದಲ್ಲಿ ದೂರು ಸಲ್ಲಿಸಿದ್ದರು.
ಈ ದೂರಿನ ವಿಚಾರಣೆ ನಡೆಸಿದ ಜನಪ್ರತಿನಿಧಿ ನ್ಯಾಯಾಲಯ ಲೋಕಾಯುಕ್ತ ತನಿಖೆಗೆ ಆದೇಶಿಸಿ, ಡಿಸೆಂಬರ್ 24 ರೊಳಗೆ ತನಿಖಾ ವರದಿಯನ್ನು ಸಲ್ಲಿಸುವಂತೆ ಸೂಚಿಸಿತ್ತು. ಅದರಂತೆ ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ನಡೆಸಿದ್ದು. ಈಗ ತನಿಖೆ ಚುರುಕುಗೊಳಿಸಿ ಎ3 ಮಲ್ಲಿಕಾರ್ಜುನ ಸ್ಬಾಮಿ, ಎ4 ದೇವರಾಜು ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದೆ.
ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುತ್ತಿದ್ದಂತೆ ಸಿದ್ದರಾಮಯ್ಯರವರ ಪತ್ನಿ ಪಾರ್ವತಿ ಅವರು ತಮಗೆ ಮುಡಾದಿಂದ ನೀಡಲಾಗಿದ್ದ 14 ನಿವೇಶನಗಳನ್ನು ಮುಡಾಗೆ ವಾಪಸ್ ಮಾಡಿದ್ದರಾದರೂ ಲೋಕಾಯುಕ್ತ ಪೊಲೀಸರು ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿ ಇಬ್ಬರು ಆರೋಪಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಕೆಲ ದಿನಗಳ ಹಿಂದೆ ಸಿದ್ದರಾಮಯ್ಯರವರ ಪತ್ನಿ ಪಾರ್ವತಿ ಅವರಿಗೆ ನೀಡಲಾಗಿದ್ದ ಮೈಸೂರಿನ ವಿಜಯನಗರದ ನಿವೇಶದ ಸ್ಥಳಕ್ಕೆ ಲೋಕಾಯುಕ್ತರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



