ನಾಗಮಂಗಲದಲ್ಲಿ ಪರಿಸ್ಥಿತಿ ಈಗ ಶಾಂತವಾಗಿದೆ: ಗೃಹ ಸಚಿವ ಪರಮೇಶ್ವರ
ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ, ಶಾಂತಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಬೆಂಗಳೂರು: ಹಿಂಸಾಚಾರ ಪೀಡಿತ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.
ಕಳೆದ ಬುಧವಾರ ರಾತ್ರಿ ಪಟ್ಟಣದಲ್ಲಿ ಗಣೇಶ ಮೂರ್ತಿ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಕಲ್ಲು ತೂರಾಟ ನಡೆಸಿ ಹಲವು ಅಂಗಡಿ, ವಾಹನಗಳಿಗೆ ಬೆಂಕಿ ಹಚ್ಚಲಾಗಿತ್ತು.
ನಾಗಮಂಗಲದಲ್ಲಿ ಈಗ ಪರಿಸ್ಥಿತಿ ಶಾಂತವಾಗಿದ್ದು, ಯಾವುದೇ ಸಮಸ್ಯೆ ಇಲ್ಲ, ಶಾಂತಿ ಸಭೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದೇವೆ. ಸಾಕಷ್ಟು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ ಎಂದು ಪರಮೇಶ್ವರ ತಿಳಿಸಿದರು.
ಘಟನೆಗೆ ಸಂಬಂಧಿಸಿದಂತೆ ಸುಮಾರು 55 ಜನರನ್ನು ಬಂಧಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಎಫ್ಐಆರ್ ಬಗ್ಗೆ ಜೆಡಿಎಸ್ ನಾಯಕ, ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಸೇರಿದಂತೆ ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಗೃಹ ಸಚಿವರು, ಪೊಲೀಸರು ಕಾನೂನು ಪ್ರಕಾರ ಏನು ಮಾಡಬೇಕೋ ಅದನ್ನು ಮಾಡುತ್ತಾರೆ ಎಂದರು.
ಇನ್ನು ಬಿಜೆಪಿಯವರು ನಾಗಮಂಗಲಕ್ಕೆ ಸತ್ಯಶೋಧನಾ ತಂಡ ಕಳುಹಿಸಿರುವ ಕುರಿತ ಪ್ರಶ್ನೆಗೆ ಉತ್ತರಿಸಿದ ಪರಮೇಶ್ವರ, ‘ಅವರು ಸತ್ಯಾಂಶವನ್ನು ಕಂಡುಹಿಡಿದು ನಮಗೆ ತಿಳಿಸಲಿ. ಅವರ ಸತ್ಯಶೋಧನೆಯಿಂದ ಏನಾದರೂ ಸತ್ಯಾಂಶ ಹೊರಬಂದರೆ ನಾವು ಪರಿಶೀಲಿಸುತ್ತೇವೆ. ಇದು ನಮ್ಮ ಕೆಲಸವನ್ನು ಸ್ವಲ್ಪಮಟ್ಟಿಗೆ ಸುಲಭ ಮಾಡುತ್ತದೆ ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



