ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು: 10 ಏರ್ ಬಸ್ ನಿಲುಗಡೆಗೆ ವಿಸ್ತರಣೆ!
ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅನ್ನು ಅಭಿವೃದ್ಧಿ ಪ

ಹುಬ್ಬಳ್ಳಿ: ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತರಾಷ್ಟ್ರೀಯ ಮೆರುಗು ನೀಡಲಾಗುವುದು ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಭಾನುವಾರ ತಿಳಿಸಿದರು.
ವಿಮಾನ ನಿಲ್ದಾಣದ ಟರ್ಮಿನಲ್ ಹೊಸ ಕಟ್ಟಡ ಕಾಮಗಾರಿ ಪ್ರಗತಿ ವೀಕ್ಷಣೆ ನಡೆಸಿ, ವಿಮಾನ ನಿಲ್ದಾಣದ ಅಧಿಕಾರಿಗಳೊಂದಿಗೆ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಪ್ರಲ್ಹಾದ ಜೋಶಿ, 2.5 ಲಕ್ಷ ಪ್ರಯಾಣಿಕರ ನಿರೀಕ್ಷೆ ಇರಿಸಿಕೊಂಡು 270 ಕೋಟಿ ವೆಚ್ಚದಲ್ಲಿ ಬೃಹತ್ ಆಗಿ ವಿಮಾನ ನಿಲ್ದಾಣವನ್ನು ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ಈಗ ವಾರ್ಷಿಕ 50 ಸಾವಿರ ಪ್ರಯಾಣಿಕರಿಗೆ ತಕ್ಕದಾಗಿ ಟರ್ಮಿನಲ್ ಇದೆ. ಇದನ್ನು 2.5 ಲಕ್ಷ ಪ್ರಯಾಣಿಕರಿಗೆ ತಕ್ಕಂತೆ, ಅಗತ್ಯ ಸೌಲಭ್ಯಗಳೊಂದಿಗೆ ವಿಸ್ತರಿಸಲಾಗುತ್ತಿದೆ. ಬಹು ದೊಡ್ಡ ಪ್ರಮಾಣದಲ್ಲಿ ಹೊಸ ಟರ್ಮಿನಲ್ ಅನ್ನು ಅಭಿವೃದ್ಧಿ ಪಡಿಸುತ್ತಿದ್ದು, ಈಗಾಗಲೇ ಕಾಮಗಾರಿಗೆ ತಾತ್ವಿಕ ಒಪ್ಪಿಗೆ ನೀಡಲಾಗಿದೆ. ಶೀಘ್ರದಲ್ಲೇ ಕಾಮಗಾರಿಗೆ ಟೆಂಡರ್ ಕರೆಯಲಾಗುವುದು ಎಂದರು.
10 ಏರ್ ಬಸ್ ನಿಲುಗಡೆಗೆ ವಿಸ್ತರಣೆ: ಸದ್ಯಕ್ಕೆ 4 ವಿಮಾನಗಳು ನಿಲ್ಲುವ ಸ್ಥಳವಿದ್ದು, ಅದನ್ನೀಗ ಸುಮಾರು 10 ಏರ್ ಬಸ್, ಬೋಯಿಂಗ್ ನಿಲ್ಲಿಸುವಷ್ಟು ಪ್ರದೇಶಕ್ಕೆ ವಿಸ್ತರಿಸಿ ಅಭಿವೃದ್ಧಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದ ಸಚಿವರು, ಈ ಬಗ್ಗೆ ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಚರ್ಚೆ ಸಹ ನಡೆಸಿದರು.
2024ರ ಮಾರ್ಚ್ 10ರಂದು ಪ್ರಧಾನಿ ನರೇಂದ್ರ ಮೋದಿ ಅವರು 273 ಕೋಟಿ ರು. ವೆಚ್ಚದಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ನಿರ್ಮಾಣಕ್ಕೆ ಚಾಲನೆ ನೀಡಿದ್ದು, ಕಾಮಗಾರಿ ವೇಗವಾಗಿ ಸಾಗುತ್ತಿದೆ.
ಹೊಸ ಟರ್ಮಿನಲ್ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಅಂತಾರಾಷ್ಟ್ರೀಯ ಮೆರುಗು ನೀಡಲಿದೆ. ನಮ್ಮ ವಾಣಿಜ್ಯನಗರಿ ವಿಮಾನ ನಿಲ್ದಾಣಕ್ಕೆ ಮತ್ತಷ್ಟು ಮೇಲ್ದರ್ಜೆಯ ಸೌಲಭ್ಯಗಳು ಒದಗಲಿವೆ. ಇದರಿಂದ ಇಡೀ ಉತ್ತರ ಕರ್ನಾಟಕ ಭಾಗದ ಅಭಿವೃದ್ದಿ ಪಥ ವೇಗದಲ್ಲಿರುತ್ತದೆ ಎಂದು ಹೇಳಿದರು.
ಈ ಮಹತ್ತರ ಕಾಮಗಾರಿಗೆ ಸಮ್ಮತಿ ನೀಡಿ ಕೈಗೆತ್ತಿಕೊಂಡ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ನಾಗರೀಕ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರಿಗೆ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಹಾಗೂ ವಿಮಾನ ನಿಲ್ದಾಣದ ಆಡಳಿತ ವರ್ಗದವರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



