ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ECIR ದಾಖಲಿಸಿದ ಇಡಿ
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಅಕ್ರಮ ಸೈಟು ಹಂಚಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ಸಿಎಂ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಸೋಮವಾರ ECIR ದಾಖಲಿಸಿದೆ.
ಮುಡಾ ಹಗರಣ ಸಂಬಂಧ ಸಿದ್ದರಾಮಯ್ಯ ಅವರ ವಿರುದ್ಧ ಇತ್ತೀಚಿಗೆ ದಾಖಲಾಗಿದ್ದ ಲೋಕಾಯುಕ್ತ ಎಫ್‌ಐಆರ್ ಅನ್ನು ಆಧರಿಸಿ ಇಡಿ ECIR ದಾಖಲಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸಿದ್ದರಾಮಯ್ಯ ಅವರನ್ನು ಬಂಧಿಸಲು ಇಡಿ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್‌ಎ) ವಿವಿಧ ಸೆಕ್ಷನ್ ಗಳಡಿ ಇಸಿಐಆರ್ ದಾಖಲಿಸಿರುವ ನಿರೀಕ್ಷೆ ಇದೆ. ಈ ಸಂಬಂಧ ಕೇಂದ್ರ ತನಿಖಾ ಸಂಸ್ಥೆಯು ಲೋಕಾಯುಕ್ತ ಪೊಲೀಸ್ ಎಫ್‌ಐಆರ್ ಅನ್ನು ಅಧ್ಯಯನ ಮಾಡುತ್ತಿದೆ ಎಂದು ಮೂಲಗಳು ತಿಳಿಸಿವೆ.
ECIR ಪೊಲೀಸ್ ಎಫ್‌ಐಆರ್‌ಗೆ ಸಮಾನವಾಗಿದೆ. ಆದರೆ ಅದನ್ನು ಆರೋಪಿಗಳೊಂದಿಗೆ ಹಂಚಿಕೊಳ್ಳುವ ಅಗತ್ಯವಿಲ್ಲ. ಇಡಿ ದಾಖಲಿಸಿರುವ ಇಸಿಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಪಿ ನಂಬರ್ 1 (ಎ1 ಆರೋಪಿ) ಆಗಿದ್ದಾರೆ. ಜೊತೆಗೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ, ಅವರ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಜಮೀನು ಮಾರಾಟ ಮಾಡಿದ್ದ ದೇವರಾಜು ಅವರ ವಿರುದ್ಧವೂ ಇಸಿಐಆರ್‌ನಲ್ಲಿ ಆರೋಪಿಗಳೆಂದು ಉಲ್ಲೇಖ ಮಾಡಲಾಗಿದೆ.
ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಇಡಿ PMLA ಕಾಯ್ದೆಯಡಿ ECIR ದಾಖಲಿಸಿದ್ದು, ಇದು ಇತರ ಕೆಲವು ಬಲವಂತದ ಕ್ರಮಗಳ ಜೊತೆಗೆ ಸಿಎಂ ಮತ್ತು ಅವರ ಕುಟುಂಬಕ್ಕೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶ ಮಾಡಿಕೊಡುತ್ತದೆ. ಅಲ್ಲದೆ ಆರೋಪಿಗಳಿಗೆ ಸಮನ್ಸ್ ನೀಡಿ ವಿಚಾರಣೆಗೆ ಕರೆಯಬಲ್ಲ ಅಧಿಕಾರ ಇಡಿ ಇದೆ.
ಮೈಸೂರಿನ ಲೋಕಾಯುಕ್ತ ಪೊಲೀಸರು ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಬಿಎಂ ಪಾರ್ವತಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಮತ್ತೊಂದು ಕಡೆ ಸಿಬಿಐ ತೂಗುಗತ್ತಿ
ಲೋಕಾಯುಕ್ತ ತನಿಖೆ ಜೊತೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಡಬಲ್ ಟೆನ್ಷನ್ ಶುರುವಾಗಿದೆ. ಒಂದು ಕಡೆ ಸಿಬಿಐ ತನಿಖೆಗೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೊರೆ ಹೋಗಿದ್ದಾರೆ. ಲೋಕಾಯುಕ್ತ ರಾಜ್ಯ ಸರ್ಕಾರದ ಅಧೀನದಲ್ಲಿ ನಡೆಯುವ ಸಂಸ್ಥೆಯಾಗಿದೆ. ಹೀಗಾಗಿ ಪಾರದರ್ಶಕ ತನಿಖೆಯಾಗಬೇಕು ಅಂದ್ರೆ ಸಿಬಿಐಗೆ ಕೊಡಿ ಎಂದು ಮನವಿ ಮಾಡಿದ್ದಾರೆ.
ಈ ಸಂಬಂಧ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ದಸರಾ ರಜೆ ಬಳಿಕ ಈ ಅರ್ಜಿ ವಿಚಾರಣೆ ನಡೆಯುವ ಸಾಧ್ಯತೆಗಳಿವೆ. ಮತ್ತೊಂದಡೆ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



