ಧರ್ಮ ಯಾವುದಾದರೂ ತತ್ವ ಒಂದೇ, ಧಾರ್ಮಿಕ ಸಂಪ್ರದಾಯಗಳಿಗೆ ಧಕ್ಕೆ ಸರಿಯಲ್ಲ: ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದಕ್ಕೆ ರಾಜ್ಯ ಸರ್ಕಾರ ಖಂಡನೆ
ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು.

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ರಾಜ್ಯದಲ್ಲಿ ಭಾರೀ ಆಕ್ರೋಶಕ್ಕೆ ಕಾರಣವಾಗಿದ್ದು, ಅಧಿಕಾರಿಗಳ ಕ್ರಮಕ್ಕೆ ರಾಜ್ಯ ಸರ್ಕಾರ ತೀವ್ರ ಖಂಡನೆ ವ್ಯಕ್ತಪಡಿಸಿದೆ.
ವಿವಾದ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಿ.ಇ.ಟಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳ ಜನಿವಾರ ತೆಗೆಸಿರುವ ಕ್ರಮ ನಿಯಮ ಬಾಹಿರವಾದುದ್ದು. ಪರೀಕ್ಷೆಯಲ್ಲಿ ಅಕ್ರಮ ನಡೆಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ ಮಾತ್ರವೇ ಕ್ರಮ ಕೈಗೊಳ್ಳಬೇಕು, ವಿನಃ ಹೀಗೆ ಅನವಶ್ಯಕವಾಗಿ ಇತರರ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾದ ನಿಯಮ ಹೇರಿಕೆ ಮಾಡಬಾರದು. ಇಂಥದ್ದನ್ನು ನಾವು ಸಹಿಸುವುದಿಲ್ಲ. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ ರೋಹಿತ್ ವೆಮುಲಾ ಕಾಯ್ದೆ ಕುರಿತು ಮಾತನಾಡಿದ ಅವರು, ಕಾಯ್ದೆಯ ಕರಡು ಸಿದ್ಧಪಡಿಸುವಂತೆ ಕಾನೂನು ಸಲಹೆಗಾರರಿಗೆ ಸೂಚನೆ ನೀಡಲಾಗಿದೆ, ಈ ಬಗ್ಗೆ ಲೋಕಸಭೆಯ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ಅವರಿಗೆ ಪತ್ರ ಕೂಡ ಬರೆದಿದ್ದೇನೆ. ಸಾಧ್ಯತೆಗಳನ್ನು ಪರಿಶೀಲಿಸಿ ಕಾಯ್ದೆ ತರಲು ಪ್ರಯತ್ನ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇನ್ನು ಜನಿವಾರ ವಿವಾದಕ್ಕೆ ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರೂ ಕೂಡ ಖಂಡನೆ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ ಎಂದು ಹೇಳಿದ್ದಾರೆ.
ಧರ್ಮ ಯಾವುದಾದರೂ ತತ್ವ ಒಂದೇ, ನಾಮ ನೂರಾದರೂ ದೈವ ಒಂದೇ, ಪೂಜೆ ಯಾವುದಾದರೂ ಭಕ್ತಿ ಒಂದೇ, ಕರ್ಮ ಹಲವಾದರೂ ನಿಷ್ಠೆ ಒಂದೇ, ದೇವನೊಬ್ಬ ನಾಮ ಹಲವು. ಧರ್ಮದ ಆಚರಣೆ ವಿಚಾರದಲ್ಲಿ ಸರ್ಕಾರ ಎಂದಿಗೂ ಮಧ್ಯಪ್ರವೇಶ ಮಾಡುವುದಿಲ್ಲ. ಆಯಾ ಧರ್ಮ ಉಳಿಸಲು ನಮ್ಮ ಸರ್ಕಾರ ಸದಾ ಬದ್ಧವಾಗಿದೆ. ಯಾರೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ನಮ್ಮ ಸರ್ಕಾರ ಎಲ್ಲರನ್ನೂ ಸಾಮರಸ್ಯದಿಂದ ಒಗ್ಗೂಡಿಸಿಕೊಂಡು ಹೋಗುವ ಕೆಲಸ ಮಾಡಲಿದೆ ಎಂದು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯುತ್ತದೆ. ಬುಧವಾರ ಆದಿಚುಂಚನಗಿರಿ ಪಿಯು ಕಾಲೇಜು ಪರೀಕ್ಷಾ ಕೇಂದ್ರದ ಭದ್ರತಾ ಸಿಬ್ಬಂದಿ ವಿದ್ಯಾರ್ಥಿಗಳಿಗೆ ಜನಿವಾರ ತೆಗೆಯುವಂತೆ ಹೇಳಿದ್ದಾರೆ. ಈ ವೇಳೆ ವಿದ್ಯಾರ್ಥಿಯೊಬ್ಬ ಜನವಾರ ತೆಗೆಯಲು ನಿರಾಕರಿಸಿದರೆ, ಮತ್ತಿಬ್ಬರು ಜನಿವಾರ ತೆಗೆದು ಪರೀಕ್ಷಾ ಕೊಠಡಿ ಪ್ರವೇಶಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



