Gold smuggling Case: ನಟಿ ರನ್ಯಾ ರಾವ್ ವಿರುದ್ಧ COFEPOSA ಕಾಯ್ದೆಯಡಿ ಪ್ರಕರಣ ದಾಖಲು; ಒಂದು ವರ್ಷ ಜೈಲೇ ಗತಿ!
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ

ಬೆಂಗಳೂರು: ಚಿನ್ನಾಭರಣ ಕಳ್ಳಸಾಗಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟಿ ರನ್ಯಾ ರಾವ್ ವಿರುದ್ಧ ವಿದೇಶಿ ವಿನಿಮಯ ಸಂರಕ್ಷಣೆ ಮತ್ತು ಕಳ್ಳಸಾಗಣೆ ಚಟುವಟಿಕೆ ತಡೆ ಕಾಯ್ದೆ (COFEPOSA ACT) 1974 ಅನ್ವಯ ದೂರು ದಾಖಲಿಸಲಾಗಿದೆ.
ಪ್ರಕರಣದ ತನಿಖೆ ನಡೆಸುತ್ತಿರುವ ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಶಿಫಾರಸಿನ ಮೇರೆಗೆ ನಟಿ ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ಆರ್ಥಿಕ ಗುಪ್ತಚರ ಬ್ಯೂರೋ (CEIB)COFEPOSA ಕಾಯ್ದೆಯನ್ನು ಜಾರಿಗೊಳಿಸಿದೆ. ಈ ಕಾಯ್ದೆ ಅನ್ವಯ ಆರೋಪಿ ರನ್ಯಾ ರಾವ್‌ಗೆ ಒಂದು ವರ್ಷ ಜಾಮೀನು ಪಡೆಯಲು ಅವಕಾಶವಿರುವುದಿಲ್ಲ.
ಆರೋಪಿಗಳು ಜಾಮೀನಿನ ಮೇಲೆ ಹೊರಬಂದ ನಂತರ ಕಳ್ಳಸಾಗಾಣಿಕೆಯಲ್ಲಿ ತೊಡಗುವುದನ್ನು ತಡೆಯುವ ಸಲುವಾಗಿ ಈ ಕಾಯ್ದೆಯನ್ನು ಜಾರಿಗೊಳಿಸಲಾಗಿದೆ. ಆರೋಪಿಯು ತನಿಖಾ ಸಂಸ್ಥೆಗಳೊಂದಿಗೆ ಸಹಕರಿಸದಿರುವುದು ಕಂಡುಬಂದರೆ ಈ ಕಾಯ್ದೆಯನ್ನು ಸಹ ಅನ್ವಯಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಪ್ರಕರಣದಲ್ಲಿ ರನ್ಯಾ ರಾವ್ ಮತ್ತು ಇತರರು ಜಾಮೀನು ಪಡೆಯಲು ಪದೇ ಪದೇ ಪ್ರಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರೀಯ ಸಂಸ್ಥೆಗಳು ಈ ಕ್ರಮಕ್ಕೆ ಮುಂದಾಗಿವೆ ಎಂದು ಮೂಲಗಳು ಬಹಿರಂಗಪಡಿಸಿವೆ. ಇತರ ಆರೋಪಿಗಳಾದ ತರುಣ್ ರಾಜು ಮತ್ತು ಸಾಹಿಲ್ ಸಕರಿಯಾ ಜೈನ್ ವಿರುದ್ಧವೂ ಕೋಫೆಪೋಸಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.
ರೂ. 12.56 ಕೋಟಿ ಮೌಲ್ಯದ 14.2 ಕೆಜಿ ಚಿನ್ನವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿ ರಾಮಚಂದ್ರ ರಾವ್ ಅವರ ಮಲ ಮಗಳು ರನ್ಯಾ ರಾವ್ ಅವರನ್ನು ಮಾರ್ಚ್ 3 ರಂದು ಬಂಧಿಸಲಾಗಿತ್ತು.
ರನ್ಯಾ ರಾವ್ ಮತ್ತು ಪ್ರಕರಣದ ಇತರ ಇಬ್ಬರು ಆರೋಪಿಗಳು ಪ್ರಸ್ತುತ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿದ್ದಾರೆ. ಈ ಪ್ರಕರಣವನ್ನು ಡಿಆರ್‌ಐ, ಜಾರಿ ನಿರ್ದೇಶನಾಲಯ (ಇಡಿ) ಮತ್ತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



