ಬಿಡದಿ ಟೌನ್ಶಿಪ್ ಯೋಜನೆ: ರೈತರ ಭೂಮಿ ಸ್ವಾಧೀನಕ್ಕೆ ಮಾಜಿ ಪ್ರಧಾನಿ ದೇವೇಗೌಡ ವಿರೋಧ
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರೈತರ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.

ಬೆಂಗಳೂರು: ಟೌನ್ಶಿಪ್ ಯೋಜನೆಗಾಗಿ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಜಿಬಿಡಿಎ) ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯಲ್ಲಿ ಸುಮಾರು 10,000 ಎಕರೆ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಮುಂದಾಗಿರುವುದನ್ನು ಮಾಜಿ ಪ್ರಧಾನಮಂತ್ರಿ ಹೆಚ್ಡಿ ದೇವೇಗೌಡರ ಅವರು ತೀವ್ರವಾಗಿ ವಿರೋಧಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ರೈತರ ಜಮೀನುಗಳನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಬೇಕೆಂದು ಆಗ್ರಹಿಸಿದ್ದಾರೆ.
ಬಿಡದಿ ಹೋಬಳಿಯ ಬೈರಮಂಗಲ, ಕಂಚುಗಾರ ನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ 24 ಗ್ರಾಮಗಳಲ್ಲಿನ ಹಲವಾರು ಸರ್ವೆ ನಂಬರುಗಳಲ್ಲಿರುವ ಸುಮಾರು 10 ಸಾವಿರ ಎಕರೆ ಜಮೀನನ್ನು ಸರ್ಕಾರವು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಟೌನ್ಶಿಪ್ ಯೋಜನೆ ನಿರ್ಮಾಣಕ್ಕೆ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭಿಸಿರುವುದಾಗಿ ವರದಿಯಾಗಿದೆ. ಈಗಾಗಲೇ ರಾಜ್ಯ ಸರ್ಕಾರ ಕೈಗಾರಿಕಾಭಿವೃದ್ಧಿಗಾಗಿ ಸಾವಿರಾರು ಎಕರೆ ರೈತರ ಭೂಮಿಯನ್ನು ವಶಪಡಿಸಿಕೊಂಡು ಕೈಗಾರಿಕಾಭಿವೃದ್ಧಿ ಪ್ರದೇಶವನ್ನು ಸ್ಥಾಪಿಸಿದೆ.
ರಾಮನಗರ ಜಿಲ್ಲೆ ಬೆಂಗಳೂರು ಮಹಾನಗರಕ್ಕೆ ಹೊಂದಿಕೊಂಡಂತೆ ಇದ್ದು, ಹಲವಾರು ಉದ್ಯಮಗಳು ಖಾಸಗಿಯಾಗಿ ಕೈಗಾರಿಕೆಗಳನ್ನು ಸ್ಥಾಪಿಸಿವೆ. ಉಳಿದಂತೆ ಇರುವ ಕೃಷಿ ಭೂಮಿಯಲ್ಲಿ ರೈತರು ತಮ್ಮ ಜೀವನ ನಿರ್ವಹಣೆಗೆ ಹೈನುಗಾರಿಕೆ, ರೇಷ್ಮೆ, ತೋಟಗಾರಿಕೆ, ಕೃಷಿಗಾಗಿ ಅವಲಂಬಿ ತರಾಗಿದ್ದಾರೆ. ಬಹುಪಾಲು ರೈತರು ಅತೀ ಸಣ್ಣ ಮತ್ತು ಸಣ್ಣ ಹಿಡುವಳಿದಾರರಾಗಿದ್ದು ಬಡ ಕುಟುಂಬಕ್ಕೆ ಸೇರಿದವರಾಗಿದ್ದಾರೆ. ರೈತರು ತಮ್ಮ ಜಮೀನಿನಲ್ಲಿ ಮತ್ತು ಜಮೀನಿನ ಸುತ್ತ ಲಕ್ಷಾಂತರ ಮರ-ಗಿಡಗಳನ್ನು ಬೆಳೆಸಿದ್ದಾರೆ. ಇಂತಹ ಪ್ರದೇಶವನ್ನು ಟೌನ್ಶಿಪ್ ಯೋಜನೆಗೆ ಸ್ವಾಧೀನ ಪಡಿಸಿಕೊಂಡರೆ ಪರಿಸರಕ್ಕೆ ಅಪಾರ ಹಾನಿ ಉಂಟಾಗುತ್ತದೆ ಎಂದು ಹೇಳಿದ್ದಾರೆ.
ಸರ್ಕಾರದ ಈ ಕ್ರಮದಿಂದ ಸಾವಿರಾರು ಕುಟುಂಬಗಳ ಜೀವನ ನಿರ್ವಹಣೆಗೆ ಧಕ್ಕೆ ಉಂಟಾಗಿ, ರೈತ ಕುಟುಂಬದ ಯುವಕರು ನಿರುದ್ಯೋಗಿಗಳಾಗಿ ಬೀದಿಪಾಲಾಗುತ್ತಾರೆ. ಈ ಬಡ ರೈತರ ಜೀವನೋಪಾಯಕ್ಕೆ ಕೃಷಿ ಭೂಮಿಯೇ ಆಧಾರವಾಗಿದೆ.
ಇದಲ್ಲದೆ, ರಾಜ್ಯ ವಸತಿ ಮಂಡಳಿ ಹಾಗೂ ಇತರೆ ಸರ್ಕಾರಿ ಪ್ರಾಧಿಕಾರಗಳು ರಾಮನಗರ ಜಿಲ್ಲೆಯ ಬಿಡದಿ ಸುತ್ತ- ಮುತ್ತಲು ಹಲವಾರು ವಸತಿ ಯೋಜನೆ ಗಳನ್ನು ರೂಪಿಸಿ, ರೈತರ ಜಮೀನು ಸ್ವಾಧೀನಪಡಿಸಿಕೊಂಡು ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಿಸುತ್ತಿರುವ ಟೌನ್ಶಿಪ್ ಯೋಜನೆಗೆ ಸ್ವಾಧೀನಪಡಿಸಿಕೊಳ್ಳುತ್ತಿರುವ ರೈತರ ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಬಡ ರೈತರ ಹಿತ ದೃಷ್ಠಿಯಿಂದ ಕೈಬಿಡಬೇಕು ಎಂದು ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



