ಬೆಂಗಳೂರು ಕಾಲ್ತುಳಿತ ಪ್ರಕರಣ: ನ್ಯಾ. ಕುನ್ಹಾ ವರದಿ ಬಹಿರಂಗಪಡಿಸಲ್ಲ; ಹೈಕೋರ್ಟ್'ಗೆ ರಾಜ್ಯ ಸರ್ಕಾರ
ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟೀ ಸವಾಲು ನಡೆಸಲು ತಮಗೆ ಅವಕಾಶ ನೀಡದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ.

ಬೆಂಗಳೂರು: ಜೂನ್ 4 ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣ ಕುರಿತ ನ್ಯಾಯಮೂರ್ತಿ ಜಾನ್ ಮೈಕೆಲ್ ಡಿ'ಕುನ್ಹಾ ನೇತೃತ್ವದ ವಿಚಾರಣಾ ಆಯೋಗ ಸಲ್ಲಿಸಿದ ವರದಿಯನ್ನುಕ ಬಹಿರಂಗಪಡಿಸುವುದಿಲ್ಲ ಎಂದು ಹೈಕೋರ್ಟ್'ಗೆ ರಾಜ್ ಸರ್ಕಾರ ಬುಧವಾರ ಭರವಸೆ ನೀಡಿದೆ.
ಮುಂದಿನ ವಿಚಾರಣೆಯ ದಿನಾಂಕವಾದ ಸೆಪ್ಟೆಂಬರ್ 4 ರವರೆಗೆ ವರದಿಯನ್ನು ಪ್ರಕಟಿಸುವುದಿಲ್ಲ ಅಥವಾ ಪ್ರಸಾರ ಮಾಡುವುದಿಲ್ಲ ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ಅವರು ಸಲ್ಲಿಸಿದ ಅರ್ಜಿಯನ್ನು ದಾಖಲಿಸಿಕೊಂಡ ನ್ಯಾಯಮೂರ್ತಿ ಜಯಂತ್ ಬ್ಯಾನರ್ಜಿ ಮತ್ತು ನ್ಯಾಯಮೂರ್ತಿ ಉಮೇಶ್ ಎಂ ಅಡಿಗ ಅವರಿದ್ದ ವಿಭಾಗೀಯ ಪೀಠವು ಡಿಎನ್‌ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 4 ಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ನ್ಯಾ. ಕುನ್ಹಾ ಅವರ ಆಯೋಗವು ಅರ್ಜಿದಾರರ ವಾದ ಆಲಿಸದೆ ಮತ್ತು ಪ್ರಕರಣದ ಸಾಕ್ಷಿಗಳನ್ನು ಪಾಟೀ ಸವಾಲು ನಡೆಸಲು ತಮಗೆ ಅವಕಾಶ ನೀಡದೆ ಏಪಕ್ಷೀಯವಾಗಿ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಿದೆ. ವರದಿಯ ಪ್ರತಿಯನ್ನು ಅರ್ಜಿದಾರರಿಗೆ ನೀಡಿಲ್ಲ. ಆದರೆ, ವರದಿ ಮಾಧ್ಯಮಗಳಿಗೆ ಸೋರಿಕೆಯಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಅಂಶಗಳಿಂದ ಅರ್ಜಿದಾರರ ಘನತೆಗೆ ಧಕ್ಕೆಯಾಗಿದೆ ಎಂದು ಡಿಎನ್‌ಎ ಆರೋಪಿಸಿತ್ತು.
ಇದಕ್ಕೆ ಪ್ರತಿಕ್ರಿಯಿಸಿದ ಪೀಠವು ಅರ್ಜಿದಾರರೇನು ಕ್ರಿಮಿನಲ್‌ಗಳಲ್ಲ. ವರದಿಯಲ್ಲಿನ ಅಭಿಪ್ರಾಯ ಆಘಾತಕಾರಿಯಾಗಿದೆ ಎಂದು ಹೇಳಿತು.
ಈ ವೇಳೆ ವಾದ ಮಂಡಿಸಿದ ಸರ್ಕಾರದ ಪರ ವಕೀಲರು, ಸದ್ಯಕ್ಕೆ ನ್ಯಾ. ಜಾನ್ ಮೈಕೆಲ್ ಕುನ್ಹಾ ವರದಿ ಬಹಿರಂಗಪಡಿಸುವುದಿಲ್ಲ. ಹೀಗಾಗಿ, ವರದಿ ಬಗ್ಗೆ ನ್ಯಾಯಾಲಯವು ಯಾವುದೇ ಅಭಿಪ್ರಾಯ ವ್ಯಕ್ತಪಡಿಸಬಾರದು ಎಂದು ಮನವಿ ಮಾಡಿದರು.
ಇದನ್ನು ಪರಿಗಣಿಸಿದ ಪೀಠವು “ನ್ಯಾ.ಕುನ್ಹಾ ಅವರ ವರದಿಗೆ ತಡೆಯಾಜ್ಞೆ ನೀಡಬೇಕು. ತನಿಖೆ ಆಧರಿಸಿ ಯಾವುದೇ ಕ್ರಮ ಜರುಗಿಸದಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿ ಕುರಿತು ಯಾವುದೇ ಆದೇಶ ಹೊರಡಿಸುವ ಅಗತ್ಯವಿಲ್ಲ ಎಂದು ತಿಳಿಸಿತು. ಅಂತೆಯೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಸೆಪ್ಟೆಂಬರ್ 4ಕ್ಕೆ ಮುಂದೂಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



