ರಾಜ್ಯ

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ

ದ್ವೇಷ ಭಾಷಣ ತಡೆಯುವ ದೇಶದ ಮೊದಲ ಕಾನೂನು ಇದಾಗಿದ್ದು, ಈ ಮಸೂದೆಯು ಒಂದು ಲಕ್ಷ ರೂ.ಗಳವರೆಗೆ ದಂಡ ಮತ್ತು ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶ ನೀಡುತ್ತದೆ.

'ಬೆಂಕಿ' ಗದ್ದಲದ ನಡುವೆಯೇ ವಿಧಾನಸಭೆಯಲ್ಲಿ ದ್ವೇಷ ಭಾಷಣ ಮಸೂದೆ ಅಂಗೀಕಾರ
ವಿಧಾನಸಭೆ
Published On :

ಬೆಳಗಾವಿ: ರಾಜ್ಯದಲ್ಲಿ ದ್ವೇಷಭಾಷಣಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಗುರುವಾರ ಕರ್ನಾಟಕ ದ್ವೇಷ ಭಾಷಣ ಮತ್ತು‌ ದ್ವೇಷ ಅಪರಾಧಗಳ(ಪ್ರತಿಬಂಧಕ) ವಿಧೇಯಕ- 2025 ಅನ್ನು ವಿಧಾನಸಭೆಯಲ್ಲಿ ಅಂಗೀಕರಿಸಿದೆ.

ಕಳೆದ ಬುಧವಾರ ಗೃಹ ಸಚಿವ ಡಾ. ಜಿ ಪರಮೇಶ್ವರ ಅವರು, ದ್ವೇಷ ಭಾಷಣ ಪ್ರತಿಬಂಧಕ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿದ್ದರು. ಚರ್ಚೆಯ ಬಳಿಕ ವಿರೋಧ ಪಕ್ಷಗಳ ತೀವ್ರ ವಿರೋಧದ ನಡುವೆಯೇ ಇಂದು ಮಸೂದೆಯನ್ನು ಅಂಗೀಕರಿಸಲಾಗಿದೆ.

ದ್ವೇಷ ಭಾಷಣ ತಡೆಯುವ ದೇಶದ ಮೊದಲ ಕಾನೂನು ಇದಾಗಿದ್ದು, ಈ ಮಸೂದೆಯು ಒಂದು ಲಕ್ಷ ರೂ.ಗಳವರೆಗೆ ದಂಡ ಮತ್ತು ಗರಿಷ್ಠ 10 ವರ್ಷಗಳವರೆಗೆ ಜೈಲು ಶಿಕ್ಷೆಗೆ ಅವಕಾಶ ನೀಡುತ್ತದೆ. ಈ ಮಸೂದೆಯನ್ನು ಡಿಸೆಂಬರ್ 4 ರಂದು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಂಗೀಕರಿಸಲಾಗಿತ್ತು.

ಈ ಮಸೂದೆ​ ಅಂಗೀಕಾರಗೊಳ್ಳುತ್ತಿದ್ದಂತೆ ಸಚಿವ ಭೈರತಿ ಸುರೇಶ್ ಮತ್ತು ಬಿಜೆಪಿ ಶಾಸಕ ಚನ್ನಬಸಪ್ಪ ನಡುವೆ ಏಕವಚನದಲ್ಲಿ ವಾಕ್ಸಮರ ನಡೆಯಿತು.

ಬೈರತಿ ಸುರೇಶ್ ಅವರು, ದ್ವೇಷ ಭಾಷಣ ಮತ್ತು ದ್ವೇಷ ಅಪರಾಧದಿಂದಾಗಿ ಕರಾವಳಿ ಕರ್ನಾಟಕ "ಹೊತ್ತಿ ಉರಿಯುತ್ತಿದೆ". ಅಲ್ಲಿ ಬೆಂಕಿ ಹಚ್ಚಿದ್ದೀರಿ. ಈಗ ಇಲ್ಲಿಯೂ ಬೆಂಕಿ ಹಚ್ಚುತ್ತಿದ್ದೀರಿ ಎಂದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸದನದ ಬಾವಿಗೆ ಇಳಿದು ಪ್ರತಿಭಟನೆ ನಡೆಸಿದರು ಮತ್ತು ಸಚಿವರು ಕ್ಷೇಮೆ ಕೇಳಬೇಕು ಎಂದು ಒತ್ತಾಯಿಸಿದರು.

ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಮಸೂದೆ​ ಅಂಗೀಕಾರವಾಗುತ್ತಿದ್ದಂತೆ, ಬಿಲ್ ಪ್ರತಿಯನ್ನು ಹರಿದು ಬಿಸಾಡಿ ಆಕ್ರೋಶ ವ್ಯಕ್ತಪಡಿಸಿದರು.

ಗದ್ದಲ ತೀವ್ರಗೊಂಡ ಹಿನ್ನೆಲೆಯಲ್ಲಿ ಸ್ಪೀಕರ್ ಯುಟಿ ಖಾದರ್ ಅವರು ಸದನವನ್ನು ಮುಂದೂಡಿದರು.

ಏನಿದು ದ್ವೇಷ ಭಾಷಣ ಮಸೂದೆ?

ದ್ವೇಷ ಭಾಷಣ ಪ್ರಸರಣೆ, ಪ್ರಕಟಣೆ, ಪ್ರಚಾರ ತಡೆಯುವ ವಿಧೇಯಕ ಇದಾಗಿದ್ದು, ಯಾವುದೇ ಪೂರ್ವಾಗ್ರಹ ಪೀಡಿತ ಹಿತಾಸಕ್ತಿಯನ್ನು ಪೂರೈಸಲು, ಜೀವಂತ ಅಥವಾ ಸತ್ತ ವ್ಯಕ್ತಿ, ಅಥವಾ ವ್ಯಕ್ತಿಗಳ ಗುಂಪಿನ ವಿರುದ್ಧ ದ್ವೇಷ ಅಥವಾ ದ್ವೇಷದ ಭಾವನೆಗಳನ್ನು ಉಂಟುಮಾಡುವ ಉದ್ದೇಶದಿಂದ ಮಾಡಿದ ಭಾಷಣ, ಪ್ರಕಟಿಸಿದ ಅಥವಾ ಪ್ರಸಾರ ಮಾಡಿದ ಯಾವುದೇ ಅಭಿವ್ಯಕ್ತಿಯನ್ನು ದ್ವೇಷ ಭಾಷಣ ಎಂದು ವರ್ಗೀಕರಿಸಲಾಗಿದೆ.

ಧರ್ಮ, ಜನಾಂಗ, ಜಾತಿ ಅಥವಾ ಸಮುದಾಯ, ಲಿಂಗ, ಲೈಂಗಿಕ ದೃಷ್ಟಿಕೋನ, ಜನ್ಮಸ್ಥಳ, ವಾಸಸ್ಥಳ, ಭಾಷೆ, ಅಂಗವೈಕಲ್ಯ ಅಥವಾ ಬುಡಕಟ್ಟು ಆಧಾರದ ಮೇಲೆ ಯಾವುದೇ ಪಕ್ಷಪಾತವನ್ನು ದ್ವೇಷ ಭಾಷಣ ಎಂದು ವರ್ಗೀಕರಿಸಲಾಗಿದೆ.

ಮೊದಲ ಬಾರಿಗೆ ದ್ವೇಷ ಭಾಷಣ, ದ್ವೇಷ ಅಪರಾಧಗಳಿಗೆ ಕನಿಷ್ಟ 1 ವರ್ಷ ಮತ್ತು ಗರಿಷ್ಟ 7 ವರ್ಷದವರೆಗೆ ಜೈಲು ಹಾಗೂ 50 ಸಾವಿರ ರೂ ದಂಡ ವಿಧಿಸಲು ಅವಕಾಶ ನೀಡಲಾಗಿದೆ.

ಅಪರಾಧ ಪುನರಾವರ್ತನೆ ಆದರೆ ಕನಿಷ್ಟ 2 ವರ್ಷದಿಂದ ಗರಿಷ್ಠ 10 ವರ್ಷದ ವರೆಗೆ ಜೈಲು ಶಿಕ್ಷೆ ಹಾಗೂ 1 ಲಕ್ಷ ರೂ ದಂಡ ವಿಧಿಸಬಹುದಾಗಿದೆ.

ದ್ವೇಷ ಭಾಷಣ ಮಾಡಿ ಕೇಸ್ ಬಿದ್ದರೆ ಅದು ಜಾಮೀನು ರಹಿತ ಪ್ರಕರಣವಾಗಿದ್ದು, ಪ್ರಥಮ ದರ್ಜೆ ನ್ಯಾಯಿಕ ಮ್ಯಾಜಿಸ್ಟ್ರೇಟರ್ ಮೂಲಕ ದ್ವೇಷ ಭಾಷಣಗಳ ವಿಚಾರಣೆ ಮಾಡಬೇಕು. ದ್ವೇಷ ಭಾಷಣಗಳ ಪ್ರಕರಣಗಳನ್ನು ಕಾರ್ಯ ನಿರ್ವಾಹಕ ಮ್ಯಾಜಿಸ್ಟ್ರೇಟ್ ಅಥವಾ ಉಪ ಪೊಲೀಸ್ ವರಿಷ್ಠಾಧಿಕಾರಿ ದರ್ಜೆಗಿಂತ ಕಡಿಮೆ ಇಲ್ಲದ ಯಾರೇ ಪೊಲೀಸ್ ಅಧಿಕಾರಿಯು ಮಾಹಿತಿ ಸ್ವೀಕರಿಸಿದರೆ ವಿಚಾರಣೆ ಮಾಡಿ ಕಾಯ್ದೆಯಡಿ ಕ್ರಮ ಕೈಗೊಳ್ಳಲು ಅವಕಾಶ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.