ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಗೆ ನಿಂದನೆ: ಭದ್ರಾವತಿ ಶಾಸಕ ಪುತ್ರನ ದರ್ಪ, ವಿಡಿಯೋ ವೈರಲ್
ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಶಿವಮೊಗ್ಗ: ಅಕ್ರಮ ಮರಳು ದಂಧೆ ತಡೆಯಲು ಹೋದ ಮಹಿಳಾ ಅಧಿಕಾರಿಯನ್ನು ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು ನಿಂದಿಸಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಿವಮೊಗ್ಗದ ಭದ್ರಾವತಿ ಶಾಸಕ ಬಿಕೆ ಸಂಗಮೇಶ್ ಪುತ್ರ ಬಸವೇಶ್ ಅವರು, ಮಹಿಳಾ ಅಧಿಕಾರಿಗೆ ಅವಾಚ್ಯವಾಗಿ ಬಾಯಿಗೆ ಬಂದಂತೆ ಬೈದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.
ಭದ್ರಾವತಿ ಭದ್ರಾ ನದಿತಟದಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆ ಮೇಲೆ ಗಣಿ ಇಲಾಖೆಯ ವಿಜ್ಞಾನಿ ಜ್ಯೋತಿ ನಿನ್ನೆ ಮಧ್ಯರಾತ್ರಿ ದಾಳಿ ಮಾಡಿದ್ದರು. ಈ ವೇಳೆ ನಡೆದ ಘಟನೆಯ ವಿಡಿಯೋ ವೈರಲ್ ಆಗಿದೆ.
ಈ ಕುರಿತು ಪ್ರತಿಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ. ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವಿಡಿಯೋ ಪೋಸ್ಟ್ ಮಾಡಿರುವ ಜೆಡಿಎಸ್, ಕಾಂಗ್ರೆಸ್ ಸರ್ಕಾರದಲ್ಲಿ ದಕ್ಷ, ಪ್ರಾಮಾಣಿಕ ಅಧಿಕಾರಿಗಳಿಗೆ ರಕ್ಷಣೆಯೇ ಇಲ್ಲವಾಗಿದೆ ಎಂದು ಕಿಡಿಕಾರಿದೆ.
ಭದ್ರಾವತಿಯಲ್ಲಿ ಒಂದು ಪೈಸೆ ಅಭಿವೃದ್ಧಿ ಕೆಲಸ ಮಾಡದ ನಾಲಾಯಕ್ ಕಾಂಗ್ರೆಸ್ ಶಾಸಕ ಸಂಗಮೇಶ್ ಹಾಗೂ ಅವರ ಮಗ ಬಿ.ಎಸ್. ಬಸವೇಶ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ, ಗೂಂಡಾಗಿರಿ ಮಾಡಿಕೊಂಡು ಲೂಟಿ ಹೊಡೆಯುತ್ತಿದ್ದಾರೆ. ಅಕ್ರಮ ಮರಳುಗಾರಿಕೆಯನ್ನು ತಡೆಯಲು ಬಂದ ಕರ್ತವ್ಯನಿರತ ಮಹಿಳಾ ಅಧಿಕಾರಿಗೆ ಶಾಸಕ ಸಂಗಮೇಶ್ ಅವರ ಪುತ್ರ ಫೋನಿನಲ್ಲಿ ಬೆದರಿಕೆ, ಧಮ್ಕಿ ಹಾಕಿ, ಅಶ್ಲೀಲ ಶಬ್ಧಗಳಿಂದ ನಿಂದಿಸಿರುವುದು ಅಕ್ಷಮ್ಯ ಅಪರಾಧ.
ರಾಜ್ಯದಲ್ಲಿರುವ ಮಹಿಳಾ ಆಯೋಗ ಏನು ಮಾಡುತ್ತಿದೆ ? ಮಹಿಳೆಯ ಗೌರವಕ್ಕೆ ಧಕ್ಕೆ ತಂದಿರುವ ಹೆಣ್ಣುನಿಂದಕ ಶಾಸಕರ ಪುತ್ರನ ವಿರುದ್ಧ ಸರ್ಕಾರ ತಕ್ಷಣವೇ ಪ್ರಕರಣ ದಾಖಲಿಸಿ, ಬಂಧಿಸಬೇಕು ಎಂದು ಜೆಡಿಎಸ್ ಪಕ್ಷವು ಆಗ್ರಹಿಸುತ್ತದೆ. ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಹಾಗೂ ಲಕ್ಷ್ಮೀ ಹೆಬ್ಬಾಳ್ಕರ್ ಅವರೇ ತಾವು ಈಗ ಮಹಿಳಾ ಅಧಿಕಾರಿಯ ರಕ್ಷಣೆಗೆ ನಿಂತು ನ್ಯಾಯ ಒದಗಿಸಬೇಕಿದೆ ಎಂದು ಆಗ್ರಹಿಸಿದೆ.
ರಾಜ್ಯ ಬಿಜೆಪಿ ಪೋಸ್ಟ್ ಮಾಡಿ, “ಮಹಿಳೆಯರಿಗೆ ರಕ್ಷಣೆಯಿಲ್ಲ - ಮಹಿಳಾ ಅಧಿಕಾರಿಗಳಿಗೆ ಗೌರವವಿಲ್ಲ” ಇದು ಕಾಂಗ್ರೆಸ್ ಸರ್ಕಾರದ ಮಹಿಳಾ ನೀತಿ!! ಶಿವಮೊಗ್ಗ ಜಿಲ್ಲೆಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಮಹಿಳಾ ಅಧಿಕಾರಿ ಅಕ್ರಮ ಮರಳು ಗಣಿಗಾರಿಕೆಯನ್ನು ತಡೆಯಲು ಸ್ಥಳಕ್ಕೆ ಹೋದಾಗ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ.ಸಂಗಮೇಶ್ ಪುತ್ರ ಬಸವೇಶ ಬಳಸಿದ ಭಾಷೆ ಅತ್ಯಂತ ಖಂಡನೀಯ.
ಸಿಎಂ ಸಿದ್ದರಾಮಯ್ಯ ಅವರೆ, ಡಿಸಿಎಂ ಡಿಕೆ.ಶಿವಕುಮಾರ್ ಅವರೆ, ಮಹಿಳಾ ಅಧಿಕಾರಿಗಳಿಗೆ ಅವಾಚ್ಯವಾಗಿ ನಿಂದಿಸುವುದು ನಿಮ್ಮ ಕಾಂಗ್ರೆಸ್ ಸಂಸ್ಕೃತಿ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಭದ್ರಾವತಿಯನ್ನು ರಿಪಬ್ಲಿಕ್ ಮಾಡಿ ಆಟಾಟೋಪ ಮೆರೆಯುತ್ತಿರುವ ಶಾಸಕರ ಪುತ್ರ ಬಸವೇಶ್‌ರನ್ನು ಬಂಧಿಸಿ, ಗಡಿಪಾರು ಮಾಡಿ ಎಂದು ಒತ್ತಾಯಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


