ಜಾತಿ ಗಣತಿ ವೈಜ್ಞಾನಿಕವಾಗಿಯೇ ನಡೆದಿದ್ದು, ಖಂಡಿತ ಜಾರಿಗೊಳಿಸುತ್ತೇವೆ: ಸಿಎಂ ಸಿದ್ದರಾಮಯ್ಯ
1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇಕಡಾ 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿಯೇ ನಡೆದಿದ್ದು ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ, ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದ್ದಾರೆ.
ಇಂದು ವಿಧಾನಸೌಧದಲ್ಲಿ ಹಿಂದುಳಿದ ವರ್ಗಗಳ ಮುಖಂಡರು ಹಾಗೂ ಹಿಂದುಳಿದ ವರ್ಗಗಳ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ನಡೆದ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಸಿಎಂ, ಜಾತಿ ಗಣತಿಯ ವರದಿ ವೈಜ್ಞಾನಿಕವಾಗಿ ತಯಾರಾಗಿದ್ದು ಸಮಾಜದ ಎಲ್ಲಾ ವರ್ಗಗಳ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸ್ಥಿತಿಗತಿ ತಿಳಿಯಲು ಅನುಕೂಲವಾಗಿದೆ. ಆ ಪ್ರಕಾರ ಸರ್ಕಾರದ ಕಾರ್ಯಕ್ರಮಗಳನ್ನು ರೂಪಿಸಲು ಸಹಕಾರಿಯಾಗುತ್ತದೆ ಎಂದರು.
ತಮಿಳುನಾಡು ಮಾದರಿಯಲ್ಲಿ ಮೀಸಲಾತಿ ಹೆಚ್ಚಳಕ್ಕೆ ಸಭೆಯಲ್ಲಿ ಒತ್ತಾಯ ಬಂದಿದೆ. 1992ರ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಶೇಕಡಾ 50ರಷ್ಟು ಮೀರಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಕಳೆದ ಸರ್ಕಾರದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಎಂದು ( EWS) ಮೀಸಲಾತಿ ಕಲ್ಪಿಸಿದ್ದು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಸಂವಿಧಾನದ ಆರ್ಟಿಕಲ್ (15) ಮತ್ತು(16)ರ ಪ್ರಕಾರ ಮೀಸಲಾತಿ ನೀಡಬೇಕಾಗಿರುವುದು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮಾತ್ರ.
ಅಸಮಾನತೆ ಹೋಗಬೇಕು, ಜಾತಿ ವ್ಯವಸ್ಥೆಯಿಂದ ನಿರ್ಮಾಣವಾಗಿರುವ ಅಸಮಾನತೆಯಿಂದ ಬಹುಸಂಖ್ಯಾತ ಜನ ಅವಕಾಶ ವಂಚಿತರಾಗಿದ್ದಾರೆ. ಎಲ್ಲರಿಗೂ ಸಮಾನ ಅವಕಾಶ ನೀಡಬೇಕಿದೆ. ತಳ ಸಮುದಾಯವಿರಲಿ, ಮೇಲ್ವರ್ಗವಿರಲಿ ಎಲ್ಲರಿಗೂ ಸಮಾನತೆ ಇರಬೇಕು ಎಂಬ ಅಂಶವನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಹೇಳಿದ್ದಾರೆ. ಹಿಂದುಳಿದ ಜಾತಿಗಳಲ್ಲೂ ತಾರತಮ್ಯ - ಅಸಮಾನತೆ ಇದೆ. ಇದನ್ನು ಒಂದೇ ಬಾರಿಗೆ ಹೋಗಲಾಡಿಸಲು ಸಾಧ್ಯವಿಲ್ಲ ಎಂದರು.
ಅಲೆಮಾರಿ ಜನಾಂಗಕ್ಕೆ ಉಚಿತ ಶಿಕ್ಷಣದ ಹಕ್ಕೊತ್ತಾಯ ಸಮಂಜಸವಾಗಿದೆ. ಸರ್ಕಾರ ಸರ್ವರಿಗೂ ಶಿಕ್ಷಣದ ಹಕ್ಕನ್ನು ನೀಡಿದೆ(RTE). ಅದರ ಪ್ರಕಾರ ಸರ್ಕಾರಿ ಶಾಲೆಗಳಲ್ಲಿ ಉಚಿತ ಶಿಕ್ಷಣ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿಯೂ ಅವಕಾಶ ಸಿಗಲು ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಈ ಬಾರಿಯ ಆಯವ್ಯಯದಲ್ಲಿ ಅಲೆಮಾರಿ ಜನಾಂಗಕ್ಕೆ ವಿಶೇಷ ಗಮನ ಹರಿಸಲಾಗುವುದು. ಇಷ್ಟು ಮಾತ್ರವಲ್ಲ ಅತಿ ಹಿಂದುಳಿದ ವರ್ಗದವರಿಗೂ ಕಾರ್ಯಕ್ರಮಗಳನ್ನು ಈ ಬಾರಿಯ ಆಯವ್ಯಯದಲ್ಲಿ ಅನುಷ್ಠಾನಗೊಳಿಸಲು ಪ್ರಯತ್ನಿಸುತ್ತೇನೆ. ಜೊತೆಗೆ ಹಣಕಾಸಿನ ಲಭ್ಯತೆಗೆ ಅನುಗುಣವಾಗಿ ಹಿಂದುಳಿದ ವರ್ಗಗಳಿಗೆ ಕಾರ್ಯಕ್ರಮಗಳನ್ನು ರೂಪಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



