APMC ಗಳಲ್ಲಿ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಅವಕಾಶ: ಸಿಎಂ ಸಿದ್ದರಾಮಯ್ಯ
ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿರುವ ಮೂರು ದಿನಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ-2025 ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರು: ಕೃಷಿ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದ್ದು, ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದರು.
ಅರಮನೆ ಮೈದಾನದಲ್ಲಿ ಕೃಷಿ ಇಲಾಖೆ ಹಮ್ಮಿಕೊಂಡಿರುವ ಮೂರು ದಿನಗಳ ಅಂತರಾಷ್ಟ್ರೀಯ ವಾಣಿಜ್ಯ ಮೇಳ ಸಾವಯವ ಮತ್ತು ಸಿರಿಧಾನ್ಯ-2025 ಉದ್ಘಾಟಿಸಿ ಮಾತನಾಡಿದರು.
ಭಾರತ ಕೃಷಿ ಪ್ರಧಾನ ದೇಶವಾಗಿದ್ದು, ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿಗಳಾಗಿದ್ದೇವೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಆಹಾರದ ಕೊರತೆಯಿತ್ತು. ಆದರೆ, ಈಗ ಹಲವಾರು ಆಹಾರಧಾನ್ಯಗಳನ್ನು ಭಾರತ ರಫ್ತು ಮಾಡುತ್ತಿರುವುದು ಹೆಮ್ಮೆಯ ವಿಷಯ. ವಿರಳ ಮಳೆಯಿರುವ ಪ್ರದೇಶಗಳಲ್ಲಿ ಹೆಚ್ಚಾಗಿ ಸಾವಯವ ಸಿರಿಧಾನ್ಯಗಳನ್ನು ಬೆಳೆಯಲಾಗುತ್ತದೆ. ಕೃಷಿ ಕುಟುಂಬವಾದ ನಮ್ಮ ಮನೆಯಲ್ಲೂ ಸಿರಿಧಾನ್ಯ ಬೆಳೆ ಬೆಳೆಯುತ್ತಿದ್ದೆವು, ರಾಗಿ ತಿಂದವನು ನಿರೋಗಿ ಎಂಬಂತೆ, ಸಿರಿಧಾನ್ಯಗಳ ಸೇವೆನೆ ಆರೋಗ್ಯಕ್ಕೆ ಉತ್ತಮವಾಗಿದೆ.
ಭಾರತದಲ್ಲಿ ಸಿರಿಧಾನ್ಯಗಳ ಉತ್ಪಾದನೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಚ್ಚಿನ ಒತ್ತು ನೀಡಿದೆ. ಸಾವಯವ ಕೃಷಿ ವಿಸ್ತೀರ್ಣದಲ್ಲಿ ಭಾರತವು ವಿಶ್ವದಲ್ಲಿ 2ನೇ ಸ್ಥಾನ ಹಾಗೂ ಒಟ್ಟು ಸಾವಯವ ಉತ್ಪಾದಕರಲ್ಲಿ ಮೊದಲನೇ ಸ್ಥಾನದಲ್ಲಿದೆ. ವಿಶ್ವದಲ್ಲಿ ಅಂದಾಜು 903.61 ಲಕ್ಷ ಟನ್‌ಗಳಷ್ಟು ಸಿರಿಧಾನ್ಯಗಳ ಉತ್ಪಾದನೆಯಾಗುತ್ತಿದ್ದು, ಇದರಲ್ಲಿ ಶೇ.38.50 ರಷ್ಟು ಪಾಲು ನಮ್ಮ ಭಾರತ ದೇಶದ್ದಾಗಿದ್ದು, ವಿಶ್ವದ ಸಿರಿಧಾನ್ಯ ಉತ್ಪಾದನೆಯಲ್ಲಿ ಭಾರತ ಮುಂಚೂಣಿ ರಾಷ್ಟ್ರವಾಗಿದೆ. ನಮ್ಮ ರಾಜ್ಯವು ಸಿರಿಧಾನ್ಯಗಳ ವಿಸ್ತೀರ್ಣ ಮತ್ತು ಉತ್ಪಾದನೆಯಲ್ಲಿ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ ಎಂದು ಹೇಳಿದರು.
ಭಾರತದ ಒಟ್ಟು ಸಾವಯವ ರಫ್ತು ಪ್ರಮಾಣವು 2.61 ಲಕ್ಷ ಟನ್ ಆಗಿದ್ದು, ಈ ಪೈಕಿ ಸಾವಯವ ಆಹಾರ ರಫ್ತಿನಿಂದ ಸುಮಾರು 4,008 ಕೋಟಿ ರೂ.ಗಳಷ್ಟು ಆದಾಯ ಬಂದಿದೆ. ಸಾವಯವ ಮತ್ತು ಸಿರಿಧಾನ್ಯಗಳಿಗೆ ವ್ಯವಸ್ಥಿತ ಮಾರುಕಟ್ಟೆ ಮತ್ತು ಸರಬರಾಜು ಸರಪಳಿಯನ್ನು ಕಲ್ಪಿಸುವ ಉದ್ದೇಶದೊಂದಿಗೆ ಪರಿಷ್ಕೃತ “ಸಾವಯವ ಕೃಷಿ ನೀತಿ” ಯನ್ನು ನಮ್ಮ ಸರ್ಕಾರವು 2017ರಲ್ಲಿ ಹೊರತಂದಿದೆ. ರಾಜ್ಯದ ರೈತರಲ್ಲಿ ಸಾವಯವ ಕೃಷಿ ಪದ್ಧತಿಯ ಬಗ್ಗೆ ಅರಿವು ಮೂಡಿಸಲು”ಸಾವಯವ ಭಾಗ್ಯ ಯೋಜನೆಯನ್ನು” 2013 ನೇ ಸಾಲಿನಲ್ಲಿ ಹೊರತಂದು ಹೋಬಳಿ ಮಟ್ಟದಲ್ಲಿ ಮಾದರಿ ಸಾವಯವ ಗ್ರಾಮಗಳನ್ನು ಸ್ಥಾಪಿಸಿ ರೈತರನ್ನು ಒಗ್ಗೂಡಿಸಿ ಉತ್ತೇಜಿಸಲಾಗಿದೆ.
ರಾಜ್ಯದ ಸಿರಿಧಾನ್ಯ ಕ್ಷೇತ್ರವನ್ನು ವಿಸ್ತರಿಸುವ ನಿಟ್ಟಿನಲ್ಲಿ “ರೈತ ಸಿರಿ” ಯೋಜನೆಯಡಿ ಪ್ರಮುಖ ಸಿರಿಧಾನ್ಯಗಳಾದ ಊದಲು, ನವಣೆ, ಹಾರಕ, ಕೊರಲೆ, ಸಾಮೆ ಮತ್ತು ಬರಗು ಬೆಳೆಗಳನ್ನು ಬೆಳೆಯುವ ರೈತರಿಗೆ ಪ್ರತಿ ಹೆಕ್ಟೇರ್ ಗೆ ರೂ. 10,000/- ಗಳಂತೆ ಗರಿಷ್ಠ 2 ಹೆಕ್ಟೇರ್ ಗಳಿಗೆ ಪ್ರೋತ್ಸಾಹಧನವನ್ನು ಪಾವತಿಸಲಾಗುತ್ತಿದೆ. ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಸೂಕ್ತ ಮಾರುಕಟ್ಟೆ ಹಾಗೂ ಉತ್ತಮ ಧಾರಣೆ ದೊರಕಿಸಿಕೊಡಲು ರಾಜ್ಯದ ಸಾವಯವ ಕೃಷಿಕರ ಸಂಘಗಳನ್ನು ಒಗ್ಗೂಡಿಸಿ 15 ಪ್ರಾಂತೀಯ ಸಾವಯವ ಒಕ್ಕೂಟಗಳನ್ನು ರಚಿಸಲಾಗಿದೆ.
ಸಾವಯವ ಹಾಗೂ ಸಿರಿಧಾನ್ಯಗಳ ಕೃಷಿಗೆ ಸಂಬಂಧಿಸಿದ ಸಂಶೋಧನಾ ಕೇಂದ್ರಗಳನ್ನು ರಾಜ್ಯದ ಕೃಷಿ ವಿಶ್ವವಿದ್ಯಾಲಯಗಳಲ್ಲಿ ಸ್ಥಾಪಿಸಲಾಗಿದೆ. ಸಿರಿಧಾನ್ಯಗಳ ಉತ್ತೇಜನದಲ್ಲಿ ಕರ್ನಾಟಕ ಸರ್ಕಾರವು ಕೈಗೊಂಡಿರುವ ವಿಶೇಷ ಪ್ರಯತ್ನಗಳನ್ನು ಗುರುತಿಸಿ ಕೇಂದ್ರ ಸರ್ಕಾರವು ಪ್ರಶಂಸನಾ ಪತ್ರವನ್ನು ಕರ್ನಾಟಕ ಸರ್ಕಾರದ ಕೃಷಿ ಇಲಾಖೆಗೆ ನೀಡಿದೆ. ಮುಂದಿನ ಆರ್ಥಿಕ ವರ್ಷದಿಂದ ರಾಜ್ಯದ ಸಾವಯವ ಉತ್ಪನ್ನಗಳ ಮಾರಾಟಕ್ಕೆ ಎಪಿಎಂಸಿ ಗಳಲ್ಲಿ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ನಮ್ಮ ಸರ್ಕಾರ ಸಿರಿಧಾನ್ಯಗಳ ಕೃಷಿ, ಮಾರುಕಟ್ಟೆ ಹಾಗೂ ಇತರೆ ಸೌಲಭ್ಯಗಳನ್ನು ನೀಡುವ ಮೂಲಕ ಸಿರಿಧಾನ್ಯ ಕೃಷಿಯ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಾರ್ಖಂಡ್ ಕೃಷಿ ಸಚಿವೆ ಶಿಲ್ಪಿ ನೇಹಾ ಟಿರ್ಕಿ, ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮತ್ತಿತರರು ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.




