ಬಿಜೆಪಿ ಮತ್ತು RSSಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆಯೂ ಇಲ್ಲ, ಬದ್ಧತೆಯೂ ಇಲ್ಲ: ಸಿದ್ದರಾಮಯ್ಯ
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು, 2025 ಕ್ಕೆ ನೂರು ವರ್ಷಗಳಾಗುತ್ತಿದೆ.

ಮಂಡ್ಯ: ಬಿಜೆಪಿ ಮತ್ತು ಆರ್.ಎಸ್.ಎಸ್ ಗೆ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಲ್ಲ. ಈ ಬಗ್ಗೆ ಅವರಿಗೆ ಬದ್ಧತೆಯೂ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ತೂಬಿನಕೆರೆ ಹೆಲಿಫ್ಯಾಡ್ ನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ ಅವರು, ನೂರು ವರ್ಷಗಳ ಇತಿಹಾಸ ನೋಡಿದರೆ ಅವರು ಯಾವಾಗಲೂ ಸಾಮಾಜಿಕ ನ್ಯಾಯವನ್ನು ವಿರೋಧಿಸುತ್ತಲೇ ಬಂದವರು ಎಂದಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಮಿಲ್ಲರ್ ಆಯೋಗದಿಂದ ಹಿಡಿದು ಇಂದಿನವರೆಗೆ ವಿರೋಧ ಮಾಡುತ್ತಲೇ ಬಂದಿದ್ದಾರೆ. ಆರ್.ಎಸ್.ಎಸ್ 1925 ರಂದು ಪ್ರಾರಂಭವಾಗಿದ್ದು, 2025 ಕ್ಕೆ ನೂರು ವರ್ಷಗಳಾಗುತ್ತಿದೆ. ಅವರು ಮೀಸಲಾತಿಯನ್ನು ಎಂದೂ ಒಪ್ಪಿಲ್ಲ. ರಾಹುಲ್ ಗಾಂಧಿ ಅವರು ಎರಡು ವರ್ಷಗಳಿಂದ ಈ ಬಗ್ಗೆ ಬಹಳ ಗಂಭೀರವಾಗಿ ಒತ್ತಾಯ ಮಾಡುತ್ತಿದ್ದರು. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಕೂಡ ಇದನ್ನು ಸೇರಿಸಲು ಅವರೇ ಕಾರಣಕರ್ತರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಪ್ರಧಾನಿ ಮೋದಿಯವರಿಗೆ ಪತ್ರವನ್ನೂ ಬರೆದಿದ್ದರು. ಈ ಎಲ್ಲರ ಹೋರಾಟ ಮತ್ತು ಒತ್ತಡದ ನಂತರ ಜಾತಿಗಣತಿ ಮಾಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ಯಾವಾಗ ಎಂದು ಸಮಯ ನಿಗದಿ ಮಾಡಿಲ್ಲ. ಜನಗಣತಿಯಲ್ಲಿಯೇ ಜಾತಿ ಗಣತಿಯನ್ನು ಮಾಡುವುದಾಗಿ ಹೇಳಿದ್ದಾರೆ. ಜಾತಿಗಣತಿ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಗಬೇಕು. ಸಂವಿಧಾನಕ್ಕೆ ತಿದ್ದುಪಡಿ ತಂದು ಮೀಸಲಾತಿಯ ಗರಿಷ್ಠ ಪರಿಮಿತಿಯನ್ನು ಹೆಚ್ಚು ಮಾಡಬೇಕ ಎಂದಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ವಿಭಾಗೀಯ ಪೀಠವು ಮೀಸಲಾತಿ ಶೇ. 50ಕ್ಕಿಂತ ಹೆಚ್ಚಬಾರದು ಎಂದು ಹೇಳಿದೆ. ಮೀಸಲಾತಿ ಶೇ. 50ಕ್ಕಿಂತ ಹೆಚ್ಚಾದರೆ ಜನಸಂಖ್ಯೆಯ ಅನುಗುಣವಾಗಿ ಮೀಸಲಾತಿ ನೀಡಲು ಸಾಧ್ಯ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕೊಡಬೇಕಾಗಿರುವುದು ಅತ್ಯಂತ ಅನಿವಾರ್ಯ ಮತ್ತು ಅಗತ್ಯ. ಸಮ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಆರ್ಥಿಕವಾಗಿ ಸಾಮಾಜಿಕವಾಗಿ ಸಬಲರಾಗಬೇಕು. ಆಗ ಮಾತ್ರ ಜಾತಿಯನ್ನು ಹೋಗಲಾಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಮೀಸಲಾತಿಯಲ್ಲಿ ಶೇ.50 ರಷ್ಟು ಗರಿಷ್ಠ ಪರಿಮಿತಿಯನ್ನು ತೆಗೆಯಬೇಕು, ಖಾಸಗಿ ಕ್ಷೇತ್ರದಲ್ಲಿಯೂ ಮೀಸಲಾತಿಯನ್ನು ತರಬೇಕೆಂದು ಪ್ರಧಾನಿಗಳನ್ನು ಒತ್ತಾಯಿಸುತ್ತೇನೆ. ಸಮೀಕ್ಷೆಯ ಸಮಯವನ್ನು ನಿಗದಿ ಮಾಡಬೇಕು. ನ್ಯಾಯಮೂರ್ತಿ ರೋಹಿಣಿ ಸಮಿತಿಯ ಶಿಫಾರಸುಗಳನ್ನೂ ಜಾರಿಗೊಳಿಸುವ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯನ್ನೂ ಕೈಗೊಳ್ಳಬೇಕು ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



