ಸುಹಾಸ್ ಶೆಟ್ಟಿ ಹತ್ಯೆ: ಆರೋಪಿಗಳ ಗುರುತು ಪತ್ತೆ; ಇಂದು ದಕ್ಷಿಣ ಕನ್ನಡ ಬಂದ್, ಶಾಲಾ-ಕಾಲೇಜುಗಳಿಗೆ ರಜೆ
ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.

ಮಂಗಳೂರು: ಹಿಂದೂ ಸಂಘಟನೆ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಹತ್ಯೆ ಪ್ರಕರಣ ಬೆನ್ನಲ್ಲೇ ಮಂಗಳೂರು ನಗರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಪರಿಸ್ಥತಿ ಸೂಕ್ಷ್ಮವಾಗಿರುವುದರಿಂದ ದಕ್ಷಿಣ ಕನ್ನಡ ಬಂದ್ ಗೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಅವರು ಇಂದು ಬೆಳಗ್ಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಸುಹಾಸ್ ಹತ್ಯೆ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ನಾವು ಭದ್ರತೆಗೆ ಸೂಕ್ತ ವ್ಯವಸ್ಥೆಗಳನ್ನು ಮಾಡಿದ್ದೇವೆ. ಸುಹಾಸ್ ಮೃತದೇಹದ ಮರಣೋತ್ತರ ಪರೀಕ್ಷೆ ನಡೆಯುತ್ತಿದೆ. ಅಂತ್ಯಕ್ರಿಯೆಗೂ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಜನತೆ ಯಾವುದೇ ವದಂತಿಗಳಿಗೆ ಕಿವಿಗೊಡದೆ ಶಾಂತರೀತಿಯಿಂದ ವರ್ತಿಸಬೇಕು ಎಂದು ಮನವಿ ಮಾಡಿದ್ದಾರೆ.
ಆರೋಪಿಗಳ ಗುರುತು
ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ಗುರುತು ಸಿಕ್ಕಿದ್ದು ಅವರನ್ನು ವಶಕ್ಕೆ ಪಡೆಯಲು ನಮ್ಮ ಪೊಲೀಸ್ ತಂಡ ಕೆಲಸ ಮಾಡುತ್ತಿದೆ ಎಂದು ಹಿತೇಂದ್ರ ಹೇಳಿದರು.
ಮಂಗಳೂರಿನಲ್ಲಿ ನಿಷೇಧಾಜ್ಞೆ
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ. ಬಿಎನ್ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ದಕ್ಷಿಣ ಕನ್ನಡ ಬಂದ್
ಈ ಮಧ್ಯೆ ಪರಿಸ್ಥಿತಿ ಸೂಕ್ಷ್ಮವಾಗಿರುವುದರಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದೆ. ಇಂದು ಬೆಳಗ್ಗೆ 6 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿರಲಿವೆ. ಅದೇ ರೀತಿ, ಖಾಸಗಿ ಬಸ್ ಸಂಚಾರ ಕೂಡ ಸ್ಥಗಿತಗೊಳ್ಳಲಿದೆ. ಅಲ್ಲದೆ, ಮಂಗಳೂರಿನಿಂದ ಬಂಟ್ವಾಳದ ಕಾರಿಂಜದ ಪುಳಿಮಜಲು (ಸುಹಾಸ್ ಶೆಟ್ಟಿ ನಿವಾಸ) ತನಕ ಜಾಥಾ ಮೂಲಕ ಮೃತದೇಹದ ಸಾಗಾಟಕ್ಕೆ ಕಾರ್ಯಕರ್ತರು ಒತ್ತಾಯಿಸಿದ್ದಾರೆ.
ಶಾಲಾ ಕಾಲೇಜುಗಳಿಗೆ ರಜೆ
ಯಾವುದೇ ಕ್ಷಣದಲ್ಲಿ ಗಲಾಟೆಯೇಳುವ ಸಾಧ್ಯತೆಯಿರುವುದರಿಂದ ಇಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಗೆ ಕರೆ ನೀಡಲಾಗಿದ್ದು, ಜಿಲ್ಲೆಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



