ಮೇ 21ರಂದು ರಾಜ್ಯದಿಂದ ಆಂಧ್ರಪ್ರದೇಶಕ್ಕೆ ಕುಮ್ಕಿ ಆನೆಗಳ ಹಸ್ತಾಂತರ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತರಬೇತಿ ಪಡೆದ ಆನೆಗಳನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಿದ್ದಾರೆ.

ಬೆಂಗಳೂರು: ನೆರೆ ರಾಜ್ಯದೊಂದಿಗಿನ ಸೌಹಾರ್ದ ಸಂಬಂಧ ಹೆಚ್ಚಿಸಲು ಹಾಗೂ ಕರ್ನಾಟಕ ಮತ್ತು ಆಂಧ್ರಪ್ರದೇಶದ ಗಡಿಯಲ್ಲಿ ಆನೆ-ಮಾನವ ಸಂಘರ್ಷಕ್ಕೆ ಪರಿಹಾರ ಒದಗಿಸುವ ಸಲುವಾಗಿ ರಾಜ್ಯ ಸರ್ಕಾರ ಮೇ 21 ರಂದು ವಿಧಾನಸೌಧದ ಮುಂದೆ ತರಬೇತಿ ಪಡೆದ ಕುಮ್ಕಿ ಆನೆಗಳನ್ನು ಆಂಧ್ರಪ್ರದೇಶಕ್ಕೆ ಹಸ್ತಾಂತರಿಸಲಿದೆ ಎಂದು ಸಚಿವ ಈಶ್ವರ್ ಬಿ ಖಂಡ್ರೆ ಅವರು ಭಾನುವಾರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸೌಧದ ಮುಂಭಾಗದ ಮೆಟ್ಟಿಲುಗಳ ಮೇಲೆ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತರಬೇತಿ ಪಡೆದ ಆನೆಗಳನ್ನು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಮತ್ತು ಅರಣ್ಯ ಸಚಿವ ಪವನ್ ಕಲ್ಯಾಣ್ ಅವರಿಗೆ ಹಸ್ತಾಂತರಿಸಲಿದ್ದಾರೆ ಎಂದು ಹೇಳಿದರು.
ಆಂಧ್ರಪ್ರದೇಶದಲ್ಲಿ ಆನೆ–ಮಾನವ ಸಂಘರ್ಷ ತಡೆ ಮತ್ತು ಪುಂಡಾನೆಗಳ ಸೆರೆ ಕಾರ್ಯಾಚರಣೆಗಳಲ್ಲಿ ಬಳಸಲು ಕುಮ್ಕಿ ಆನೆಗಳನ್ನು ಒದಗಿಸುವಂತೆ ಮತ್ತು ಮಾವುತರಿಗೆ ತರಬೇತಿ ನೀಡುವಂತೆ, ಅಲ್ಲಿನ ಅರಣ್ಯ ಸಚಿವ ಪವನ್ ಕಲ್ಯಾಣ್ ಅವರು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು. ಅದರ ಭಾಗವಾಗಿ ಪಳಗಿಸಿದ ಕುಮ್ಕಿ ಆನೆಗಳನ್ನು ನೀಡುತ್ತಿದ್ದೇವೆಂದು ತಿಳಿಸಿದರು.
2024ರ ಆಗಸ್ಟ್‌ನಲ್ಲಿ ಬೆಂಗಳೂರಿನಲ್ಲಿ, ಆನೆ–ಮಾನವ ಸಂಘರ್ಷ ಕುರಿತ ಅಂತರರಾಷ್ಟ್ರೀಯ ಸಮ್ಮೇಳನ ನಡೆದಿತ್ತು. ಆನೆ–ಮಾನವ ಸಂಘರ್ಷ ತಡೆ ಸಂಬಂಧ ಚಾಲ್ತಿಯಲ್ಲಿರುವ ಉತ್ತಮ ರೂಢಿಗಳ ವಿನಿಮಯಕ್ಕೆ ಕರ್ನಾಟಕ, ಕೇರಳ, ಆಂಧ್ರಪ್ರದೇಶ ಮತ್ತು ತೆಲಂಗಾಣ ಸರ್ಕಾರಗಳು ತಿಳುವಳಿಕೆ ಪತ್ರಕ್ಕೆ ಸಹಿ ಹಾಕಿದ್ದವು. ಅದರ ಭಾಗವಾಗಿಯೇ ಆಂಧ್ರಪ್ರದೇಶಕ್ಕೆ ಆನೆಗಳನ್ನು ಹಸ್ತಾಂತರಿಸಲಾಗುತ್ತಿದೆ ಎಂದಿದ್ದಾರೆ.
ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಗಡಿಗೆ ಹೊಂದಿಕೊಂಡಿರುವ ರಾಜ್ಯದ ಕೋಲಾರ ಜಿಲ್ಲೆ ವ್ಯಾಪ್ತಿಯಲ್ಲೂ ಆನೆ- ಮಾನವ ಸಂಘರ್ಷ ಹೆಚ್ಚುತ್ತಿದೆ. ಆಂಧ್ರಪ್ರದೇಶದಲ್ಲಿ ಪುಂಡಾನೆಗಳನ್ನು ಸೆರೆಹಿಡಿದರೆ, ಅಲ್ಲಿಂದ ಕೋಲಾರಕ್ಕೆ ಅವು ಬರುವುದು ನಿಲ್ಲಲಿದೆ. ಈ ನಿಟ್ಟಿನಲ್ಲಿ ಕುಮ್ಕಿ ಆನೆಗಳ ಹಸ್ತಾಂತರದಿಂದ ರಾಜ್ಯಕ್ಕೂ ಅನುಕೂಲವಾಗಲಿದೆ ಎಂದು ಹೇಳಿದರು.
ಇದೇ ವೇಳೆ ಈ ಹಸ್ತಾಂತರದಲ್ಲಿ ದಸರಾ ಆನೆಗಳಿಲ್ಲ. ಕರ್ನಾಟಕದ ಪ್ರತಿಷ್ಠಿತ ದಸರಾ ಮಹೋತ್ಸವಕ್ಕೆ ಸಂಬಂಧಿಸಿದ ಯಾವುದೇ ಕುಮ್ಕಿ ಆನೆಗಳನ್ನು ಅಥವಾ ಮುಂಬರುವ ಆಚರಣೆಗಳಿಗೆ ಗುರುತಿಸಲಾದ ಆನೆಗಳನ್ನು ಆಂಧ್ರಪ್ರದೇಶಕ್ಕೆ ಕಳುಹಿಸುತ್ತಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



