ಉದ್ಯೋಗಸ್ಥ ಮಹಿಳೆಯರಿಗೆ ವರ್ಷಕ್ಕೆ 12 ದಿನ ವೇತನ ಸಹಿತ ಮುಟ್ಟಿನ ರಜೆ: ರಾಜ್ಯ ಸರ್ಕಾರ ಆದೇಶ
ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಉದ್ದಿಮೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ನೌಕರರಿಗೆ ಅವರ ಋತುಚಕ್ರದ ಸಮಯದಲ್ಲಿ ಮಾಸಿಕ ಒಂದು ದಿನದ ವೇತನ ಸಹಿತ ರಜೆ ಸೌಲಭ್ಯ ಒದಗಿಸಬೇಕು ಎಂದು ಕಾರ್ಮಿಕ ಇಲಾಖೆ ಆದೇಶ ಹೊರಡಿಸಿದೆ.
ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, ತೋಟ ಕಾರ್ಮಿಕರ ಕಾಯ್ದೆ, ಬೀಡಿ ಮತ್ತು ಸಿಗಾರ್ ಕಾರ್ಮಿಕರ ಕಾಯ್ದೆ, ಮೋಟಾರು ಸಾರಿಗೆ ಕಾಯ್ದೆ ಅಡಿಯಲ್ಲಿ ನೋಂದಣಿ ಆಗಿರುವ ಕೈಗಾರಿಕೆಗಳು ಮತ್ತು ಸಂಸ್ಥೆಗಳೂ ಸೇರಿದಂತೆ ಎಲ್ಲ ವಲಯಗಳಲ್ಲಿ ಕೆಲಸ ಮಾಡುತ್ತಿರುವ 18ರಿಂದ 52ರ ವಯೋಮಾನದ ಎಲ್ಲ ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರಿಗೆ ಈ ಸೌಲಭ್ಯ ನೀಡಬೇಕು ಎಂದು ಎಲ್ಲ ಉದ್ಯೋಗದಾತರಿಗೂ ಸೂಚಿಸಿದೆ.
ಈ ಸಂಬಂಧ ಸರ್ಕಾರ 2024ರ ಜನವರಿ 12ರಂದು ಅಧಿಸೂಚನೆ ಹೊರಡಿಸಿತ್ತು. ಜತೆಗೆ ಕಾರ್ಮಿಕ ಇಲಾಖೆ ಆಯುಕ್ತರು 21/02/2025ರಂದು ಪತ್ರ ಬರೆದಿದ್ದರು.
ಬಳಿಕ 9/10/2025ರಂದು ನಡೆದ ರಾಜ್ಯ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ಕೂಡ ನೀಡಲಾಗಿತ್ತು.
ಈ ಎಲ್ಲದರ ಹಿನ್ನೆಯಲ್ಲಿ ಇಂದು ಆದೇಶ ಹೊರಡಿಸಿರುವ ಕಾರ್ಮಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಸುಮ ಅವರು, ರಾಜ್ಯದಲ್ಲಿ ಕಾರ್ಖಾನೆಗಳ ಕಾಯ್ದೆ, 1948, ಕರ್ನಾಟಕ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ, 1961, ತೋಟ ಕಾರ್ಮಿಕರ ಕಾಯ್ದೆ, 1951, ಬೀಡಿ ಮತ್ತು ಸಿಗಾರ್ ಕಾರ್ಮಿಕರ (ಉದ್ಯೋಗ ಮತ್ತು ಷರತ್ತುಗಳು) ಕಾಯ್ದೆ, 1966 ಹಾಗೂ ಮೋಟಾರು ಸಾರಿಗೆ ಕಾರ್ಮಿಕರ ಕಾಯ್ದೆ, 1961ರಡಿ ನೋಂದಣಿಯಾಗಿರುವ ಎಲ್ಲ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲರಿಗೂ ಇದು ಅನ್ವಯವಾಗಲಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಷರತ್ತುಗಳು:
ಮಹಿಳಾ ನೌಕರರು ಆಯಾ ತಿಂಗಳ ಋತುಚಕ್ರ ರಜೆಯನ್ನು ಆಯಾ ತಿಂಗಳಿನಲ್ಲಿಯೇ ಬಳಸಿಕೊಳ್ಳುವುದು. ಹಿಂದಿನ ತಿಂಗಳ ಋತುಚಕ್ರ ರಜೆಯನ್ನು ಮುಂದಿನ ತಿಂಗಳಿಗೆ ವಿಸ್ತರಿಸಲು ಅವಕಾಶವಿರುವುದಿಲ್ಲ.
ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ಪಡೆಯಲು ಮಹಿಳಾ ನೌಕರರು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅವಶ್ಯಕತೆ ಇರುವುದಿಲ್ಲ ಎಂಬ ಷರತ್ತುಗಳನ್ನು ವಿವರಿಸಿ ಆದೇಶಿಸಿದ್ದಾರೆ.
52 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಈ ರಜೆಯ ಸೌಲಭ್ಯ ಇಲ್ಲ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



